ವಿಜ್ಞಾನ ವಾಹಿನಿ-ಸಂಚಾರಿ ವಿಜ್ಞಾನ ಪ್ರಯೋಗಾಲಯಕ್ಕೆ ಮರು ಚಾಲನೆ

MDK02
Published on

ಮಡಿಕೇರಿ: ವಿದ್ಯಾರ್ಥಿಗಳಿಗೆ ವಿಜ್ಞಾನದ ವಿಷಯವನ್ನು ಪ್ರಾಯೋಗಿಕವಾಗಿ ಮಾಡುವ ಮೂಲಕ ಕಲಿಕೆಯಲ್ಲಿ ಉತ್ತಮ ಯಶಸ್ಸನ್ನು ಸಾಧಿಸಲು ವಿಜ್ಞಾನ ವಾಹಿನಿ-ಸಂಚಾರಿ ವಿಜ್ಞಾನ ಪ್ರಯೋಗಾಲಯ ಸಹಕಾರಿಯಾಗಲಿದೆ ಎಂದು ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್‌ನ ಅಧ್ಯಕ್ಷ ಪ್ರಸಾದ್ ಗೌಡ ತಿಳಿಸಿದರು.


ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಕೊಡಗು ಶಾಖೆ, ರೋಟರಿ ಮಿಸ್ಟಿ ಹಿಲ್ಸ್, ಮಡಿಕೇರಿ, ಆಶಾ ಫಾರ್ ಎಜುಕೇಶನ್ ಯು.ಎಸ್.ಎ. ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಕೊಡಗು ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ವಿಭಾಗದಲ್ಲಿ ವಿಜ್ಞಾನ ವಾಹಿನಿ-ಸಂಚಾರಿ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿ ಮಾತನಾಡಿದರು.


ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ವಿಜ್ಞಾನಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳ ಸೃಜನಾತ್ಮಕ ಕಲಿಕೆಗೆ ವೇದಿಕೆ ಕಲ್ಪಿಸುತ್ತಾ ಬಂದಿದೆ ಎಂದು ತಿಳಿಸಿದರು.


ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಮುಖ್ಯ ಕಾರ್ಯನಿವಾಹಣಾಧಿಕಾರಿ ಡಾ॥ ಜಿ.ಎಸ್.ಕುಮಾರ್ ಮಾತನಾಡಿ, ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಅನುಕೂಲತೆಗಳನ್ನು ಮನಗಂಡು ಅವರಿಗೆ ಅನುಕೂಲವಾಗುವಂತೆ ವಿಜ್ಞಾನದ ವಿಷಯವನ್ನು ಪಾಯೋಗಿಕವಾಗಿ ಮಾಡುವುದರಿಂದ ವಿದಾರ್ಥಿಗಳ ಕಲಿಕಾ ಗುಣಮಟ್ಟ ಹೆಚ್ಚುವುದರ ಮೂಲಕ ಕಲಿಕಾ ಆಸಕ್ತಿಯೂ ಹೆಚ್ಚಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಸಂಚಾರಿ ವಿಜ್ಞಾನ ಪ್ರಯೋಗಾಲಯದ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.


ಶಾಲಾ ನಾಯಕಿ ಬಿ.ಬಿ.ನಂದಿನಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ವಿಜ್ಞಾನ ವಿಷಯದ ಕುರಿತು ಪಾಯೋಗಿಕವಾಗಿ ಕಲಿಯಲು ನಮಗೆ ಪ್ರಯೋಗಾಲಯದ ಕೊರತೆಯಿತ್ತು. ಇದೀಗ ಸರ್ಕಾರಿ ಶಾಲೆಗಳಲ್ಲಿ ಸಂಚಾರಿವಿಜ್ಞಾನ ಪ್ರಯೋಗಾಲಯ ಆರಂಭಿಸಿರುವುದು ನಮಗೆ ಸಂತಸ ತಂದಿದೆ. ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳುವುದಾಗಿ ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಖಜಾಂಚಿ ಡಾ॥ ಕೆ.ಎನ್.ಚಂದ್ರಶೇಖರ್, ಜಿಲ್ಲೆಯಲ್ಲಿ ೨೦೧೭ ಡಿಸೆಂಬರ್ ಮಾಹೆಯಲ್ಲಿ ವಿಜ್ಞಾನ ವಾಹಿನಿ-ಸಂಚಾರಿ ವಿಜ್ಞಾನ ಪ್ರಯೋಗಾಲಯ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿತ್ತು. ಆನಂತರ ಕೋವಿಡ್-೧೯ ನಿಂದಾಗಿ ಸ್ಥಗಿತಗೊಂಡಿದ್ದ ಸಂಚಾರಿ ವಿಜ್ಞಾನ ಪ್ರಯೋಗಾಲಯ ಕಾರ್ಯಕ್ರಮವನ್ನು ಮರು ಪ್ರಾರಂಭಿಸಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಶಿಕ್ಷಕರೊಂದಿಗೆ ಚರ್ಚಿಸಿ ನೇರವಾಗಿ ಪ್ರಶ್ನೆಗಳಿಗೆ ಉತ್ತರ ಪಡೆದುಕೊಳ್ಳಬಹುದು. ವಿದ್ಯಾರ್ಥಿಗಳ ಕಲಿಕೆಗೂ ಇದು ಹೆಚ್ಚಿನ ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.


ಈ ಸಂದರ್ಭದಲ್ಲಿ ಮೂರು ವಿಜ್ಞಾನ ವಾಹಿನಿ-ಸಂಚಾರಿ ವಿಜ್ಞಾನ ಪ್ರಯೋಗಾಲಯದ ವಾಹನಗಳಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಯೋಜನಾ ಉಪ ಸಮನ್ವಯಾಧಿಕಾರಿ ಎಂ.ಕೃಷ್ಣಪ್ಪ, ಮಡಿಕೇರಿ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಪ್ರಮುಖರಾದ ರತನ್ ತಮ್ಮಯ್ಯ, ಎನ್.ಡಿ.ಅಚ್ಚಯ್ಯ, ಚಂದ್ರಶೇಖರ್, ಕೆ.ಕೆ.ವಿಶ್ವನಾಥ್, ಡಾ॥ ಪ್ರವೀಣ್ ಕುಮಾರ್, ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net