ಸಚಿವ ಜಮೀರ್ ಬದಲು ಬಸವಂತಪ್ಪ ಧ್ವಜಾರೋಹಣ

ಕೆ.ಎಸ್.ಬಸವಂತಪ್ಪ
ಕೆ.ಎಸ್.ಬಸವಂತಪ್ಪ
Published on

ಪ್ರಮುಖ ಮುಖ್ಯಾಂಶಗಳು

  • ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ
ಹೊಸಪೇಟೆ: ರಾಜ್ಯ ರಾಜಕೀಯದ ದಿಢೀರ್ ಬೆಳವಣಿಗೆಯೊಂದರಲ್ಲಿ, ವಸತಿ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಅವರ ಬದಲಿಗೆ ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಕೆ.ಎಸ್.ಬಸವಂತಪ್ಪ ಅವರು ವಿಜಯನಗರ ಜಿಲ್ಲೆಯಲ್ಲಿ 80ನೇ ಸ್ವಾತಂತ್ರ‍್ಯ ದಿನಾಚರಣೆಯ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ.
ಮುಂಬರುವ ಬಿಬಿಎಂಪಿ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ, ಉಪಚುನಾವಣೆ ಹಾಗೂ ಪಕ್ಷ ಸಂಘಟನೆಯ ಕಾರ್ಯಗಳ ಹಿನ್ನೆಲೆಯಲ್ಲಿ ತಮಗೆ ಸಮಯದ ಅಭಾವವಿರುವುದರಿಂದ ವಿಜಯನಗರ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ಮುಕ್ತಿ ನೀಡುವಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದರು. ಜತೆಗೆ ಅನಿವಾರ್ಯ ಕಾರಣಗಳಿಂದ ಆ.15ರ ಧ್ವಜಾರೋಹಣ ಕಾರ್ಯಕ್ರಮದಿಂದಲೂ ವಿನಾಯಿತಿ ಕೋರಿದ್ದರು.
ಈ ಹಿನ್ನೆಲೆಯಲ್ಲಿ, ಸಚಿವ ಕೆ.ಎಸ್. ಬಸವಂತಪ್ಪ ಅವರಿಗೆ ಸರ್ಕಾರ ವಿಜಯನಗರ ಜಿಲ್ಲಾ ಉಸ್ತುವಾರಿ ವಹಿಸಿದ ಬೆನ್ನೆಲೆ ಪ್ರವಾಸ ಕೈಗೊಂಡಿದ್ದಾರೆ. ಶನಿವಾರ ಬೆಳಿಗ್ಗೆ 8.15ಕ್ಕೆ ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯುವ ಧ್ವಜಾರೋಹಣದಲ್ಲಿ ಪಾಲ್ಗೊಳ್ಳಲಿರುವ ಅವರು, ನಂತರ ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿರುವ 80ನೇ ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಪರೇಡ್ ಗೌರವ ಸ್ವೀಕರಿಸಿ ಸಂದೇಶ ನೀಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಎಚ್.ಆರ್.ಗವಿಯಪ್ಪ ವಹಿಸಲಿದ್ದು, ಸಂಸದರಾದ ಈ.ತುಕಾರಾಮ್, ಡಾ.ಪ್ರಭಾ ಮಲ್ಲಿಕಾರ್ಜುನ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಇತರರು ಭಾಗವಹಿಸಲಿದ್ದಾರೆ. ಸಚಿವ ಜಮೀರ್ ಅವರ ದಿಢೀರ್ ನಿರ್ಧಾರ ಹಾಗೂ ಬದಲಾದ ಉಸ್ತುವಾರಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net