ಕಾಲುಬಾಯಿ ಲಸಿಕಾ ಅಭಿಯಾನ ಚುರುಕು

ಹೊಸಪೇಟೆ ಜಿಲ್ಲಾಧಿಕಾರಿ ನಿವಾಸದಲ್ಲಿ ಆಕಳುಗಳಿಗೆ ಕಾಲುಬಾಯಿ ಲಸಿಕೆ ಹಾಕಲಾಯಿತು. ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಪಶು ವೈದ್ಯಾಧಿಕಾರಿ ಡಾ. ಎನ್.ಕೆ.ಇಮ್ರಾನ್ ಇದ್ದರು.
ಹೊಸಪೇಟೆ ಜಿಲ್ಲಾಧಿಕಾರಿ ನಿವಾಸದಲ್ಲಿ ಆಕಳುಗಳಿಗೆ ಕಾಲುಬಾಯಿ ಲಸಿಕೆ ಹಾಕಲಾಯಿತು. ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಪಶು ವೈದ್ಯಾಧಿಕಾರಿ ಡಾ. ಎನ್.ಕೆ.ಇಮ್ರಾನ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • 2.56 ಲಕ್ಷ ಜಾನುವಾರಗಳ ಗುರಿ
  • ದನ, ಎಮ್ಮೆಗೆ ಮಾತ್ರ ವ್ಯಾಕ್ಸಿನ್
ಹೊಸಪೇಟೆ: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 9ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ ಭರದಿಂದ ಸಾಗಿದ್ದು, ಪಶುವೈದ್ಯಕೀಯ ಇಲಾಖೆ ಸಿಬ್ಬಂದಿ ಮನೆ ಮನೆಗೆ ತೆರಳಿ ಜಾನುವಾರುಗಳಿಗೆ ಲಸಿಕೆ ಹಾಕುತ್ತಿದ್ದಾರೆ.
ಏ.23ರಿಂದ ಆರಂಭವಾಗಿರುವ ಲಸಿಕಾ ಅಭಿಯಾನ ಮೇ 22ರವರೆಗೆ ನಡೆಯಲಿದೆ. ಜಿಲ್ಲೆಯಲ್ಲಿ 1,80,912 ದನ ಹಾಗೂ 78,076 ಎಮ್ಮೆಗಳಿಗೆ ಒಟ್ಟು2,58,988 ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಲಸಿಕೆದಾರರು ಈ ಕಾರ್ಯವನ್ನು ನಿರ್ವಹಣೆ ಮಾಡುತ್ತಿದ್ದಾರೆ. ಇಲ್ಲಿಯ ವರೆಗೆ ಒಟ್ಟು 19690 ಜಾನುವಾರುಗಳಿಗೆ ಲಸಿಕೆ ನೀಡಲಾಗಿದ್ದು, ತಿಂಗಳಲ್ಲಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕಾಲುಬಾಯಿ ರೋಗವು ವೈರಾಣುನಿಂದ ಬರುವ ಅಂಟು ಜಾಡ್ಯವಾಗಿದೆ. ದನ, ಎಮ್ಮೆ, ಆಡು, ಕುರಿ, ಹಂದಿ, ಸೇರಿದಂತೆ ಎಲ್ಲಾ ಸೀಳು ಗೊರಸಿನ ಪ್ರಾಣಿಗಳಲ್ಲಿ ಈ ರೋಗವು ಕಾಣಿಸಿಕೊಳ್ಳುವ ಸಾಧ್ಯತೆಯಿರುತ್ತದೆ. ಇದು ರೈತರಿಗೆ ಅಪಾರವಾದ ಆರ್ಥಿಕ ನಷ್ಟವನ್ನುಂಟು ಮಾಡುವ ರೋಗವಾಗಿದೆ. ಕಾಲುಬಾಯಿ ಜ್ವರವು ಒಂದು ವೈರಾಣುರೋಗವಾಗಿದ್ದು, ನಿರ್ದಿಷ್ಟ ಚಿಕಿತ್ಸೆ ಅಸಾಧ್ಯವಾಗಿರುತ್ತದೆ. ಕಾಲುಬಾಯಿ ರೋಗದಿಂದ ಗುಣಮುಖವಾದರೂ ಸಹ ಜಾನುವಾರುಗಳು ಬಿಸಿಲಿಗೆ ಏದುಸಿರು ಬಿಡುತ್ತವೆ.
ಹೈನು ರಾಸುಗಳಲ್ಲಿ ಹಾಲಿನ ಇಳುವರಿ ಇಳಿಮುಖವಾಗಲಿದ್ದು ಗರ್ಭಪಾತ, ಗರ್ಭಕಟ್ಟುವಲ್ಲಿ ವಿಳಂಬ. ಎತ್ತು, ಹೋರಿಗಳಲ್ಲಿ ಕೆಲಸ ಮಾಡುವ ಸಾಮರ್ಥ್ಯ ಕ್ಷೀಣಿಸಿ ತೀವ್ರ ಆರ್ಥಿಕ ನಷ್ಟವನ್ನುಂಟು ಮಾಡುತ್ತದೆ. ಲಸಿಕೆ ಹಾಕಿಸುವುದೊಂದೇ ಕಾಲುಬಾಯಿ ರೋಗ ನಿಯಂತ್ರಿಸಲು ಇರುವ ಏಕೈಕ ಮಾರ್ಗವಾಗಿದೆ. ಈ ರೋಗದ ವಿರುದ್ದ ಪ್ರತಿ 6 ತಿಂಗಳಿಗೊಮ್ಮೆ ಲಸಿಕೆ ಹಾಕಿಸಿ, ರೋಗ ಬಾರದಂತೆ ತಡೆಗಟ್ಟಬಹುದಾಗಿರುತ್ತದೆ. ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದರೂ ಸಹ 6 ತಿಂಗಳಿಗೊಮ್ಮೆ ಕೈಗೊಳ್ಳುವ ಸಾಮೂಹಿಕ ಲಸಿಕಾ ಕಾರ್ಯಕ್ರಮದಲ್ಲಿ ತಪ್ಪದೇ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು ಎಂದು ಪಶುಪಾಲನೆ ಮತ್ತು ಪಶು ವೈದ್ಯ ಕೀಯ ಇಲಾಖೆ ತಿಳಿಸಿದೆ.

2030ರೊಳಗೆ ರೋಗ ಗುರಿ

ಪ್ರತಿ 6 ತಿಂಗಳಿಗೊಮ್ಮೆ ಲಸಿಕಾ ಕಾರ್ಯಕ್ರಮವನ್ನು ನಡೆಸಲಾಗುತ್ತಿದ್ದು, 2030ರ ವರೆಗೆ ಇದು ಮುಂದುವರಿಯಲಿದೆ. 2030ರ ಹೊತ್ತಿಗೆ ಭಾರತದಿಂದ ಕಾಲು ಬಾಯಿ ರೋಗ ಸಂಪೂರ್ಣ ನಿರ್ಮೂ ಲನೆ ಮಾಡುವ ಗುರಿ ಹೊಂದಲಾಗಿದೆ. ಕಾಲುಬಾಯಿ ರೋಗವು ಎತ್ತು, ಹೋರಿ, ಹಸು, ಎಮ್ಮೆ ಮತ್ತು ಹಂದಿಗಳಿಗೆ ತಗಲುವ ಮಾರಕ ರೋಗವಾಗಿದ್ದು, ಈ ರೋಗದಿಂದ ಹೈನುಗಾರಿಕೆಯಲ್ಲಿ ತೊಡಗಿರುವ ರೈತರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗುತ್ತಾರೆ. ಇದನ್ನು ತಡೆಯುವುದು ಅಭಿಯಾನದ ಉದ್ದೇಶವಾಗಿದೆ.

ಜಿಲ್ಲಾಧಿಕಾರಿ ಸೂಚನೆ

ವರ್ಷದಲ್ಲಿ ಕನಿಷ್ಠ ಎರಡು ಬಾರಿ ದನ ಮತ್ತು ಎಮ್ಮೆಗಳಿಗೆ ಲಸಿಕೆ ಹಾಕುವುದರಿಂದ ರೋಗ ತಡೆಗಟ್ಟಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಮೂರು ತಿಂಗಳ ಮೇಲ್ಪಟ್ಟ ಎಲ್ಲಾ ಕರುಗಳಿಗೆ ತಪ್ಪದೇ ಒಮ್ಮೆ ಲಸಿಕೆ ಹಾಕಿಸಿದ ನಂತರ ಮತ್ತೊಮ್ಮೆ 3 ರಿಂದ 5 ವಾರದೊಳಗೆ ಬೂಸ್ಟರ್ ಲಸಿಕೆ ಹಾಕಿಸಬೇಕಿದೆ. ಗರ್ಭಧರಿಸಿದ ಹಸು ಮತ್ತು ಎಮ್ಮೆಗಳಿಗೂ ತಪ್ಪದೇ ಲಸಿಕೆ ಹಾಕಿಸಬೇಕಿದೆ. ಇದೊಂದು ರಾಷ್ಟ್ರೀಯ ಕಾರ್ಯಕ್ರಮವೂ ಆಗಿದ್ದು, ಈಗಾಗಲೇ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ. ಯಾವುದೇ ಜಾನುವಾರು ಲಸಿಕೆಯಿಂದ ಬಿಟ್ಟು ಹೋಗದಂತೆ ಕಾರ್ಯಕ್ರಮ ಲಸಿಕಾ ಅಭಿಯಾನದ ಯಶಸ್ಸಿಗೆ ಶ್ರಮಿಸುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
"

ಜಿಲ್ಲೆಯಲ್ಲಿ ಕಾಲು ಬಾಯಿ ಲಸಿಕೆ ನೀಡುವ ಅಭಿಯಾನ ಅಂಗವಾಗಿ ಮನೆಗೆ ಬರುವ ಸಿಬ್ಬಂದಿಗೆ ರೈತರು ಸಹಕರಿಸಬೇಕು. ಲಸಿಕೆಯಿಂದ ಹಾಲಿನ ಇಳುವರಿ ಕಡಿಮೆಯಾಗುವುದಿಲ್ಲ. ಹಿಂದೆ ಎಷ್ಟು ಬಾರಿ ಲಸಿಕೆ ಹಾಕಿಸಿದ್ದರೂ, ಮತ್ತೆ ಹಾಕಿಸಿಕೊಳ್ಳಬೇಕು.

— ಡಾ.ಎಂ.ರವಿ, ಉಪ ನಿರ್ದೇಶಕರು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ವಿಜಯನಗರ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net