ಹೊಸಪೇಟೆ: ಮಾದಿಗ ಸಮುದಾಯವನ್ನು ಶೈಕ್ಷಣಿಕ, ರಾಜಕೀಯ, ಸಾಮಾಜಿಕವಾಗಿ ಅಭಿವೃದ್ದಿ ದೃಷ್ಟಿಯಿಂದ ರಾಜ್ಯದಲ್ಲಿ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಮಾರ್ಗದರ್ಶನದಲ್ಲಿ ಕರ್ನಾಟಕ ಮಾದಾರ ಮಹಾಸಭಾ ರಚಿಸಲಾಗಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು.
ಇಲ್ಲಿನ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದಾರ ಮಹಾಸಭಾ ನೇತೃತ್ವದಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಈ ಕುರಿತು ಜಾಗೃತಿ ಮೂಡಿಸಲು ನಗರದಲ್ಲಿ ಮಹಾಸಭಾದ ಸಭೆ ಕರೆಯಲಾಗಿದೆ. ಸಭೆಯಲ್ಲಿ ಚರ್ಚಿಸಿ ಮಹಾಸಭಾಕ್ಕೆ ಜಿಲ್ಲಾ ಹಾಗೂ ತಾಲೂಕು ಅಧ್ಯಕ್ಷರನ್ನು ಅಯ್ಕೆ ಮಾಡಲಾಗುವುದು. ನೂತನ ಅಧ್ಯಕ್ಷರು ಸದಸ್ಯರನ್ನು ನೋಂದಣಿ ಮಾಡಿಸಬೇಕು. ಮಾದಾರ ಮಹಾಸಭಾಕ್ಕೆ 30 ಎಕರೆ ಜಮೀನು ನೀಡಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಲಾಗಿದೆ. ಇದನ್ನು ಮಹಾಸಭಾ ಸ್ವಾಗತಿಸುತ್ತದೆ ಎಂದರು.
ಸುದ್ದಿಗಾರರ ಪ್ರಶ್ನೆಗೆ ಉತ್ತರವಾಗಿ ಪೆಟ್ರೋಲ್, ಡಿಸೇಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು.