ಹೊಸಪೇಟೆ: ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಬಲವಂತವಾಗಿ ಕರೆದೊಯ್ದ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ನಗರದ ಸಿಪಿಐಎಂ ತಾಲೂಕು ಸಮಿತಿಯಿಂದ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಪರೀಕ್ಷಾ ವೈಫಲ್ಯದಿಂದಾಗಿ ಬಡ ಹಾಗೂ ಮಧ್ಯಮ ವರ್ಗದ ಅನೇಕ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ದೇಶದ ಶಿಕ್ಷಣ ವ್ಯವಸ್ಥೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಜುಗರಕ್ಕೀಡಾಗಿದೆ. ಉಪವಾಸದಿಂದ ವಾಂಗ್ಚುಕ್ ಅವರ ಆರೋಗ್ಯ ತೀವ್ರವಾಗಿ ಕ್ಷೀಣಿಸಿದ್ದರೂ, ಸರ್ಕಾರ ಬೇಡಿಕೆ ಈಡೇರಿಸುವ ಬದಲು ಅವರನ್ನು ಬಲವಂತವಾಗಿ ತೆರವುಗೊಳಿಸಿರುವುದು ಹೋರಾಟದ ಮೌಲ್ಯಗಳಿಗೆ ಎಸಗಿದ ಅಪಚಾರವಾಗಿದೆ ಎಂದು ಆಗ್ರಹಿಸಿದರು.
ರಾಷ್ಟ್ರಪತಿಗಳು ತಕ್ಷಣ ಮಧ್ಯಪ್ರವೇಶಿಸಿ ಪರೀಕ್ಷಾ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲರಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪಡೆಯಬೇಕು. ಅಕ್ರಮಕ್ಕೀಡಾಗಿರುವ ನೀಟ್ ಪರೀಕ್ಷೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಕಾಲಮಿತಿಯ ಸ್ವತಂತ್ರ ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಸೋನಂ ವಾಂಗ್ಚುಕ್ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳೊಂದಿಗೆ ತಕ್ಷಣವೇ ನೇರ ಮಾತುಕತೆ ಆರಂಭಿಸಬೇಕು ಮತ್ತು ಸಂಕಷ್ಟಕ್ಕೊಳಗಾದ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.