ಮಾಹಿತಿ ವಿನಿಮಯಕ್ಕೆ ಯೋಜನೆ ರೂಪಿಸಿ

VJP 11-1
Published on

ವಿಜಯಪುರ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜಾರಿಗೊಳಿಸಿದ ಯೋಜನೆಗಳು, ವೃತ್ತಿ ಆಯ್ಕೆ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉನ್ನತ ವ್ಯಾಸಂಗಕ್ಕೆ ಇರುವ ಅವಕಾಶಗಳು, ಕೌಶಲ್ಯಾಭಿವೃದ್ಧಿ ಮೂಲಕ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸಲು ಸಂವಾದದ ಮೂಲಕ ಮಾಹಿತಿ ವಿನಿಮಯದ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಯುವ ಸಬಲೀಕರಣ ಸಲಹಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ನಗರದ ಸರ್ಕಾರಿ ಪಪೂ ಕಾಲೇಜಿನಲ್ಲಿ ಯುವ ಸಬಲೀಕರಣ ಕೇಂದ್ರ ಆರಂಭಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಯುವ ಜನತೆಗೆ ಈ ಕೇಂದ್ರದ ಮೂಲಕ ಒದಗಿಸಲು ಅವಶ್ಯಕ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಪದವಿ, ಪಪೂ ಹಾಗೂ ಪ್ರೌಢಶಾಲೆ ಸೇರಿದಂತೆ ಎಲ್ಲ ಶಿಕ್ಷಣ ಸಂಸ್ಥೆಗಳವರು ಆಯಾ ಕಾಲೇಜ್‌ಗಳಿಂದ ಓರ್ವ ಸಂಯೋಜಕರನ್ನು ಮತ್ತು ತಲಾ 5 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡು ಈ ಕೇಂದ್ರಕ್ಕೆ ನಿಯೋಜಿಸಬೇಕು. ಇಲ್ಲಿ ಅವಶ್ಯಕ ಮಾಹಿತಿ ಪಡೆದು ಎಲ್ಲ ವಿದ್ಯಾರ್ಥಿಗಳಿಗೆ ಸಂವಾದದ ಮೂಲಕ ಮಾಹಿತಿ ಹಂಚಿಕೊಳ್ಳಲು ಕಾರ್ಯ ಯೋಜನೆ ರೂಪಿಸಿಕೊಳ್ಳಲು ತಿಳಿಸಿದರು.
ಅದರಂತೆ ಫೆಬ್ರವರಿ ಅಂತ್ಯಕ್ಕೆ ಪದವಿ ಕಾಲೇಜ್ ಸಂಯೋಜಕರನ್ನು ನೇಮಿಸಿಕೊಂಡು ಕಾರ್ಯಾಗಾರವೊಂದನ್ನು ಆಯೋಜಿಸಿ ಸೂಕ್ತ ಮಾಹಿತಿ ಒದಗಿಸಬೇಕು. ಮುಂದಿನ ದಿನಗಳಲ್ಲಿ ಯುವ ಸಬಲೀಕರಣ ಕೇಂದ್ರದ ಮೂಲಕ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳ ಸಂವಾದ ಕಾರ್ಯಕ್ರಮವನ್ನೂ ವಿಶೇಷವಾಗಿ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಇಲಾಖೆ, ಸಮಾಜಕಲ್ಯಾಣ ಇಲಾಖೆ, ಪದವಿ ಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ ಅಧಿಕಾರಿಗಳ ಸಂವಾದ ಕಾರ್ಯಕ್ರಮ ಆಯೋಜಿಸಿ ಸೂಕ್ತ ಮಾಹಿತಿ ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜತೆಗೆ ಸಮಗ್ರ ಯೋಜನೆ ರೂಪಿಸುವಂತೆ ತಿಳಿಸಿದರು.
ಪದವಿ ಕಾಲೇಜ್ ಪ್ರಾಂಶುಪಾಲ ಎಸ್.ಎಸ್. ರಾಜಮಾನೆ, ಸಹಾಯಕ ಪ್ರಾಧ್ಯಾಪಕ ಐ.ಎಸ್. ಮಠಪತಿ, ಯುವ ಸಬಲೀಕರಣ ಸಂಯೋಜನಾಧಿಕಾರಿ ಎ.ಎ. ಮುಲ್ಲಾ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net