ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಪಡಿಸಿ

HN 31-2
Published on

ವಿಜಯಪುರ: ಜಿಲ್ಲೆಯಲ್ಲಿನ ನಿರುಪಯುಕ್ತ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತಕ್ಷಣ ಸರಿಪಡಿಸುವಂತೆ ರಾಜ್ಯ ಕುಡಿಯುವ ನೀರು ಸರಬರಾಜು ಮಂಡಳಿ ವ್ಯವಸ್ಥಾಪಕ ನಿರ್ದೇಶಕ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜೆ.ರವಿಶಂಕರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಈಗಾಗಲೇ ಸ್ಥಾಪಿಸಲಾಗಿರುವ 828 ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಸುಮಾರು 388 ಶುದ್ಧ ಕುಡಿಯುವ ನೀರಿನ ಘಟಕಗಳು ವಿವಿಧ ರೀತಿಯಲ್ಲಿ ದುರಸ್ತಿಯಾಗಬೇಕಾಗಿದ್ದು , ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕಾರ್ಯ ಪ್ರವೃತ್ತರಾಗಿ ಫೆಬ್ರುವರಿ 10 ರ ವರೆಗೆ ದುರಸ್ತಿ ಪಡಿಸಿ ಕೈಗೊಂಡ ಕ್ರಮದ ಬಗ್ಗೆ ವರದಿ ಸಲ್ಲಿಸುವಂತೆ ತಿಳಿಸಿದರು.
ಸೀ ಶಕ್ತಿ ಗುಂಪುಗಳಿಗೆ ಕೆಲವು ಘಟಕಗಳ ಹಸ್ತಾಂತರದ ಮೂಲಕ ನಿರ್ವಹಣೆಗೆ ಅವಕಾಶವಿದ್ದಲ್ಲಿ ಕ್ರಮ ಕೈಗೊಳ್ಳಬೇಕು. ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಸಮರ್ಪಕವಾಗಿ ನಿಭಾಯಿಸಬೇಕು. ಕೃಷ್ಣಾಭಾಗ್ಯ ಜಲ ನಿಗಮದ ವ್ಯಾಪ್ತಿಯಲ್ಲಿ ಬರುವ ವಿವಿಧ ಕಾಲುವೆಗಳ ದುರಸ್ತಿ, ವಿವಿಧ ಕೆರೆ ಭರ್ತಿ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಹೇಳಿದರು.

ಕಾಮಗಾರಿ ಪೂರ್ಣಗೊಳಿಸಿ

ಜಿಲ್ಲೆಯಲ್ಲಿ ದುರಸ್ತಿಯಾಗಬೇಕಾದ 28 ಶಾಲಾ ಕಟ್ಟಡಗಳ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸುವ ಜತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪಂಚಾಯತ್‌ರಾಜ್ ಇಲಾಖೆ ಇಂಜಿನಿಯರಿಂಗ್ ವಿಭಾಗ ಅಧಿಕಾರಿಗಳು ಜವಾಬ್ದಾರಿಯಿಂದ ಮತ್ತು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಲಭ್ಯ ಇರುವ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ೆ. 10 ರೊಳಗೆ ದುರಸ್ತಿಗೊಳಿಸಬೇಕು. ಆಯಾ ಶಾಲಾ ಮುಖ್ಯೋಪಾಧ್ಯಾಯರಿಂದ ದುರಸ್ತಿಯಾದ ಬಗ್ಗೆ ಪ್ರಮಾಣ ಪತ್ರ ಪಡೆದು ವರದಿ ಸಲ್ಲಿಸುವಂತೆ ಅವರು ಸೂಚಿಸಿದರು.

ವಿವಿಧ ಇಲಾಖೆ ಪರಿಶೀಲನೆ

ಅಬಕಾರಿ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನಡೆದ ಪ್ರಗತಿ ಕುರಿತು ಪರಿಶೀಲನೆ ನಡೆಸಿದರು. ಅಲ್ಲದೆ ಗಂಗಾ ಕಲ್ಯಾಣ ಯೋಜನೆಯಡಿ ವಿವಿಧ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಾರ್ಯ ಪೂರ್ಣಗೊಳಿಸುವ ಕುರಿತು, ರೈತ ಸಂಪರ್ಕ ಕೇಂದ್ರಗಳಲ್ಲಿನ ಸೇವೆ, ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಪಂ ಸಿಇಒ ಗೋವಿಂದ ರೆಡ್ಡಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಕರೊನಾ ವೈರಸ್ ಬಗ್ಗೆ ಕಟ್ಟೆಚ್ಚರ

ದೇಶದ ವಿವಿಧೆಡೆ ಕರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಹೊರ ರಾಜ್ಯ, ಜಿಲ್ಲೆಗಳಿಂದ ಆಗಮಿಸುವ ಪ್ರವಾಸಿಗರ, ಪ್ರಯಾಣಿಕರ ಮೇಲೆ ನಿಗಾವಹಿಸುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಶ್ವ ಆರೋಗ್ಯ ಸಂಸ್ಥೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ದೇಶನಗಳ ಬಗ್ಗೆ ಮಾಹಿತಿ ಪಡೆದು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net