

ವಿಜಯಪುರ: ಇಂಜಿನಿಯರಿಂಗ್ ಕೋರ್ಸ್ ಪ್ರವೇಶ ಶುಲ್ಕ ಏರಿಕೆ ಖಂಡಿಸಿ ವಿಜಯಪುರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಸಚಿನ್ ಕುಳಗೇರಿ ಮತನಾಡಿ, ಕೋವಿಡ್ ಹಿನ್ನೆಲೆಯಲ್ಲಿ ಖಾಸಗಿ ಕಾಲೇಜುಗಳ ಇಂಜಿನಿಯರಿಂಗ್ ಕೋರ್ಸ್ ಶುಲ್ಕದಲ್ಲಿ ಯಾವುದೇ ಹೆಚ್ಚಳ ಮಾಡದೆ ಹಿಂದಿನ ವರ್ಷದ ಶುಲ್ಕವನ್ನೇ ಮುಂದುವರಿಸಲು ತೀರ್ಮಾನಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿಎನ್.ಅಶ್ವತ್ಥ್ ನಾರಾಯಣ್ ಇತ್ತೀಚೆಗೆ ಹೇಳಿಕೆ ಕೊಟ್ಟಿದ್ದರು. ಆದರೆ ಈಗ ಸರ್ಕಾರ ಕೆಲವು ಪರೋಕ್ಷ ಕ್ರಮಗಳ ಮೂಲಕ ಶುಲ್ಕ ಹೆಚ್ಚಳಕ್ಕೆ ದಾರಿ ಮಾಡಿಕೊಡುವ ಆದೇಶವನ್ನು ಹೊರಡಿಸಿದೆ. ಇದರಿಂದಾಗಿ ಇಂಜಿನಿಯರಿಂಗ್ ವ್ಯಾಸಂಗ ಮಾಡುವ ಕನಸು ಕಂಡಿರುವ ರಾಜ್ಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಕನಸು ಕನಸಾಗಿಯೇ ಉಳಿಯುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಸರ್ಕಾರಿ ಹಾಗೂ ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಸರ್ಕಾರಿ ಕೋಟಾದಡಿ ಇಂಜಿನಿಯರಿಂಗ್ ಕೋರ್ಸುಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪ್ರಸ್ತಕ ಸಾಲಿನಿಂದ 83,526 ರೂ. ಹಾಗೂ 90,060 ರೂ. ಶುಲ್ಕ ನಿಗದಿಪಡಿಸಲಾಗಿದೆ. ಹಿಂದಿನ ವರ್ಷ ಈ ಶುಲ್ಕವು 58,806 ರೂ. ಹಾಗೂ 65,340 ರೂ. (ವಿಶ್ವವಿದ್ಯಾಲಯ ಶುಲ್ಕವನ್ನು ಒಳಗೊಂಡಂತೆ) ನಿಗದಿಪಡಿಸಲಾಗಿತ್ತು. 2021-2022 ನೇ ಸಾಲಿನಿಂದ 20 ಸಾವಿರ ರೂ. ಕಾಲೇಜುಗಳ ಇತರ ಶುಲ್ಕ ಹಾಗೂ ಸ್ಕಿಲ್ ಲ್ಯಾಬ್ ಸೌಲಭ್ಯಕ್ಕಾಗಿ 10 ಸಾವಿರದಿಂದ 20 ಸಾವಿರ ರೂ. ವರೆಗೆ ಹೆಚ್ಚುವರಿ ಶುಲ್ಕ ವಸೂಲಿಗೆ ಸರ್ಕಾರ ಕಾಲೇಜುಗಳಿಗೆ ಅವಕಾಶ ನೀಡಿದೆ. ಇದರಿಂದಾಗಿ 40 ಸಾವಿರ ರೂ.ಹೆಚ್ಚುವರಿಯಾಗಿ ವಿದ್ಯಾರ್ಥಿಗಳು ನೀಡಬೇಕಾಗಿದೆ ಎಂದು ಮಾಹಿತಿ ನೀಡಿದರು.
ನಗರ ಸಹ ಕಾರ್ಯದರ್ಶಿ ಮಹಾಂತೇಶ ಕಂಬಾರ ಮಾತನಾಡಿ, ಸರ್ಕಾರ ಈ ಹಿಂದಿನ ವರ್ಷಗಳಲ್ಲಿ ಕಾಲೇಜುಗಳಲ್ಲಿ ಹೆಚ್ಚಿನ ಶುಲ್ಕ ಪಡೆಯದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಶುಲ್ಕ ನಿಯಂತ್ರಣ ಸಮಿತಿ ಮೂಲಕ ಕಡಿವಾಣ ಹಾಕಲಾಗಿತ್ತು. ಕೋವಿಡ್‌ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಪಾಲಕರಿಗೆ ಸರ್ಕಾರ ಪರೋಕ್ಷವಾಗಿ ಹೆಚ್ಚಳ ಮಾಡಿರುವ ಶುಲ್ಕ ಹೊರೆಯಾಗಲಿದೆ. ಬಡ, ಪ್ರತಿಭಾವಂತ ವಿದ್ಯಾರ್ಥಿಗಳ ಮತ್ತು ಕೋವಿಡ್‌ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿರುವ ಪಾಲಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಶುಲ್ಕ ಹೆಚ್ಚಳಕ್ಕೆ ಹೊರಡಿಸಿರುವ ಆದೇಶವನ್ನು ತಕ್ಷಣಕ್ಕೆ ಹಿಂಪಡೆಯಬೇಕೆಂದು ಆಗ್ರಹಿಸಿದರು.
ಎಬಿವಿಪಿಯ ನಗರ ಸಂಘಟನಾ ಕಾರ್ಯದರ್ಶಿ ನಾಗರಾಜ ಬಟೆಗೇರಾ, ಮಂಜುನಾಥ ಹಳ್ಳಿ, ಸಿದ್ದು ಉಪ್ಪಾರ, ಮಾಳು ಪೂಜಾರಿ, ಆಕಾಶ ಕುಂಬಾರ, ಕಿರಣ ಹಿಪ್ಪರಗಿ, ಅಭಿಷೇಕ ಸುರಪುರ, ಮಹಾಂತೇಶ ಕೊಟಿಹಾನಿ ಇತರರು ಉಪಸ್ಥಿತರಿದ್ದರು.