ಸಿದ್ದರಾಮಯ್ಯರಿಂದ ಸಂವಿಧಾನಕ್ಕೆ ಅಪಮಾನ

Yatanal -web
Published on

ವಿಜಯಪುರ : ಬೀದರ್‌ನ ಶಾಹೀನ್ ಶಾಲೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿರುವುದು ಖಂಡನೀಯ. ಆ ಶಾಲೆಗೆ ಭೇಟಿ ನೀಡುವ ಮೂಲಕ ಸಿದ್ದರಾಮಯ್ಯ ಭಾರತೀಯ ಸಂವಿಧಾನಕ್ಕೆ ದೊಡ್ಡ ಅಪಮಾನ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ವಿಸರ್ಜನೆ ಮಾಡಬೇಕಾದ ಅವಶ್ಯಕತೆ ಇದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಕಾಂಗ್ರೆಸ್‌ನವರು ದೇಶದ ಜನತೆಗೆ ಕ್ಷಮೆಯಾಚಿಸಬೇಕು, ಕಾಂಗ್ರೆಸ್ ವಿಸರ್ಜನೆ ಮಾಡಬೇಕು. ಕುಟುಂಬಶಾಹಿ ವ್ಯವಸ್ಥೆಯಲ್ಲಿ ಕಾಂಗ್ರೆಸ್ ಮುಳುಗಿದೆ ಎಂದು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡೆ ವಿರೋಧಿಸಿ ಇಂದು ಕಾಂಗ್ರೆಸ್ ಪ್ರತಿಭಟನೆ ವಿಚಾರವನ್ನು ಪ್ರತಿಕ್ರಿಯೆ ನೀಡಿದ ಯತ್ನಾಳ, ಕಾಂಗ್ರೆಸ್ ಈ ದೇಶದ ಸ್ವಾತಂತ್ರ್ಯಾಕ್ಕಾಗಿ ಹೋರಾಟ ಮಾಡಿಲ್ಲ. ಕಾಂಗ್ರೆಸ್‌ನವರದ್ದು ಬರೀ ಅಡ್ಜೆಸ್ಟ್‌ಮೆಂಟ್ ರಾಜಕಾರಣ. ಈಗಲೂ ಅವರು ಅದನ್ನೇ ಮಾಡುತ್ತಿದ್ದಾರೆ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಡವಾಗಿ ದೊರಕಲು ಕಾಂಗ್ರೆಸ್‌ನವರೇ ಮೂಲ ಕಾರಣ ಎಂದು ಆರೋಪಿಸಿದರು.

ಸಿಎಎ ವಿರೋಧ ದೇಶವಿರೋಧಿ ಚಟುವಟಿಕೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಮಾಡುತ್ತಿರುವ ಪ್ರತಿಭಟನೆ ದೇಶ ವಿರೋಧಿ ಚಟುವಟಿಕೆಯಾಗಿದೆ ಎಂದು ಶಾಸಕ ಯತ್ನಾಳ ಹೇಳಿದರು. ಪೌರತ್ವ ಕಾಯ್ದೆ ವಿರೋಧಿಸಿ ಮಾಡುವ ಹೋರಾಟ ಅಂಬೇಡ್ಕರ್ ಸಂವಿಧಾನಕ್ಕೆ ಮಾಡಿದ ಅಪಮಾನವಾಗಿದೆ. ಲೋಕಸಭೆ, ರಾಜ್ಯಸಭೆಗಳಲ್ಲಿ ಅಂಗೀಕೃತವಾಗಿ ಜಾರಿಯಾಗಿರುವ ಕಾಯ್ದೆಯ ವಿರುದ್ಧ ಪ್ರತಿಭಟನೆ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net