

ವಿಜಯಪುರ : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಎರಡನೇ ಅಲೆ ಅಪಾಯ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ಹೇಳಿದ್ದಾರೆ.
ಕೋವಿಡ್ ನಿಯಂತ್ರಣ ಕುರಿತು ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕಿದೆ. ಮಾಸ್ಕ್ ಧರಿಸುವುದು, ಪರಸ್ಪರ ಅಂತರ ಕಾಪಾಡುವುದನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಸ್ಥಳಗಳಲ್ಲಿ ಮತ್ತು ಪ್ರಯಾಣದ ಸಮಯದಲ್ಲಿ ಮುಖಕ್ಕೆ ಮಾಸ್ಕ್ ಧರಿಸಬೇಕು. ಇಲ್ಲದಿದ್ದರೆ ಮಹಾನಗರ ಪಾಲಿಕೆ ಪ್ರದೇಶಗಳಲ್ಲಿ 250 ರೂ. ಮತ್ತು ಇನ್ನುಳಿದ ಪ್ರದೇಶಗಳಲ್ಲಿ 100 ರೂ. ದಂಡ ವಿಧಿಲಾಗುವುದು ಎಂದು ತಿಳಿಸಿದ್ದಾರೆ.
ಪ್ರತಿಯೊಬ್ಬರೂ ಸಾರ್ವಜನಿಕ ಸ್ಥಳಗಳಲ್ಲಿ ಆರು ಅಡಿ ಅಂತರವನ್ನು ಕಾಪಾಡಿಕೊಳ್ಳಬೇಕು. ಅಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಉಗಳುವುದು ಮಾಡಿದರೆ ಕಾನೂನು ಪ್ರಕಾರ ದಂಡ ವಿಧಿಸಲಾಗುವುದು. ಕೋವಿಡ್-19 ಹರಡುವುದನ್ನು ತಡೆಗಟ್ಟಲು ಜನರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತ್ತೆ 12 ಜನರಿಗೆ ಪಾಸಿಟಿವ್
ಜಿಲ್ಲೆಯಲ್ಲಿ ಮಂಗಳವಾರ 12 ಜನರಿಗೆ ಕರೊನಾ ಪಾಸಿಟಿವ್ ದೃಢವಾಗಿದೆ. ಈವರೆಗೆ ಒಟ್ಟು 14,820 ಜನರಿಗೆ ಕೋವಿಡ್ ಸೋಂಕು ಬಂದಿದೆ. 3,56,886 ಜನರ ಗಂಟಲು ದ್ರವ ಪರೀಕ್ಷಿಸಲಾಗಿದೆ. ಅದರಲ್ಲಿ 3,40,133 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 1933 ಜನರ ವರದಿ ಬರಬೇಕಿದೆ. ಈ ವರೆಗೆ 207 ಜನರು ಕರೊನಾದಿಂದ ಮೃತಪಟ್ಟಿದ್ದಾರೆ ಎಂದು ಸುನೀಲ್‌ಕುಮಾರ್ ತಿಳಿಸಿದ್ದಾರೆ.