ಮಳೆಗಾಲ ಎದುರಿಸಲು ಸರ್ವ ಸನ್ನದ್ಧರಾಗಿ, ಅಧಿಕಾರಿಗಳಿಗೆ ಡಿಸಿ ಡಾ.ಆನಂದ ಕೆ ಖಡಕ್ ಸೂಚನೆ

ವಿಜಯಪುರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು. ಜಿಪಂ ಸಿಇಒ ರಿಷಿ ಆನಂದ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಯೋಜನಾ ನಿರ್ದೇಶಕ ಬದ್ರುದ್ದಿನ್ ಸೌದಾಗರ್ ಇತರರಿದ್ದಾರೆ.
ವಿಜಯಪುರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು. ಜಿಪಂ ಸಿಇಒ ರಿಷಿ ಆನಂದ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಯೋಜನಾ ನಿರ್ದೇಶಕ ಬದ್ರುದ್ದಿನ್ ಸೌದಾಗರ್ ಇತರರಿದ್ದಾರೆ.
Published on

ಪ್ರಮುಖ ಮುಖ್ಯಾಂಶಗಳು

  • ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ
  • ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ
  • ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ
  • ತುರ್ತು ಸಹಾಯವಾಣಿ ಸ್ಥಾಪಿಸಲು ಕ್ರಮ
ವಿಜಯಪುರ: ಮುಂಗಾರು ಆರಂಭಗೊಳ್ಳುತ್ತಿದ್ದು ಈಗಿನಿಂದಲೇ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಂಭವನೀಯ ಪ್ರಕೃತಿ ವಿಕೋಪ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಸರ್ವಸನ್ನದ್ಧವಾಗಿದ್ದು, ಪ್ರವಾಹದಲ್ಲಿ ಜನ-ಜಾನುವಾರು ಹಾನಿಯಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಅಧಿಕಾರಿಯ ಪ್ರಥಮ ಆದ್ಯತೆಯಾಗಿದೆ ಎಂದರು.
ತಾಲೂಕು ಹಂತದಲ್ಲಿ ಸಂಭವಿಸುವ ಪ್ರಕೃತಿ ವಿಕೋಪ ಸಂದರ್ಭದಲ್ಲಿ ತಹಸೀಲ್ದಾರ್‌ರು ಸ್ಥಳದಲ್ಲಿರಬೇಕು. ದಿನದ 24 ಗಂಟೆ ಸಹಾಯವಾಣಿ ಕಾರ್ಯನಿರತವಾಗಿರಬೇಕು. ಯಾವುದೇ ಘಟನೆ ಸಂಭವಿಸಿದ ತಕ್ಷಣ ಸ್ಪಂದಿಸಿ, ಸ್ಥಳಕ್ಕೆ ಧಾವಿಸಬೇಕು. ಕಂಟ್ರೋಲ್ ರೂಂ ವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದರು.

ನದಿ ಪಾತ್ರದಲ್ಲಿ ಕಟ್ಟೆಚ್ಚರ

ಜಿಲ್ಲೆಯ ಕೃಷ್ಣಾ, ಭೀಮಾ ಮತ್ತು ದೋಣಿ ನದಿಗಳಿಗೆ ಎದುರಾಗಬಹುದಾದ ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಲು ಸನ್ನದ್ಧರಾಗಿ, ನದಿ ಪಾತ್ರದಲ್ಲಿ ನಿರಂತರ ನಿಗಾ ಮತ್ತು ಪ್ರವಾಹ ಮುನ್ನೆಚ್ಚರಿಕೆ ವಹಿಸಬೇಕು. ಜಲಾಶಯಗಳಲ್ಲಿನ ನೀರಿನ ಲಭ್ಯತೆಯ ಮಾಹಿತಿಯನ್ನು ಪ್ರತಿದಿನ ಸಂಗ್ರಹಿಸಿ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ಪ್ರಕೃತಿ ವಿಕೋಪದಿಂದ ಉಂಟಾಗುವ ಹಾನಿಗೆ ನಿಯಮಾನುಸಾರ ತಕ್ಷಣವೇ ಪರಿಹಾರ ವಿತರಿಸಲು ಕ್ರಮ ವಹಿಸಬೇಕು ಎಂದರು.
ತುರ್ತು ಸಂದರ್ಭದಲ್ಲಿ ರಕ್ಷಣಾ ಸಾಮಗ್ರಿ ಬೋಟ್ಸ್, ರೋಪ್ಸ್, ಲೈಫ್ ಜಾಕೆಟ್, ಇತ್ಯಾದಿ ಸಾಮಗ್ರಿಗಳನ್ನು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸುಸಜ್ಜಿತವಾಗಿಟ್ಟುಕೊಳ್ಳಬೇಕು ಎಂದರು.

ರಾಜಕಾಲುವೆ ಸ್ವಚ್ಛಗೊಳಿಸಿ

ರಾಜ ಕಾಲುವೆಗಳಲ್ಲಿನ ಹೂಳನ್ನು ಸಂಪೂರ್ಣವಾಗಿ ತೆಗೆದು, ಅಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ನೋಡಿಕೊಳ್ಳಬೇಕು. ಗ್ರಾಪಂ ಸ್ಥಳೀಯ ಆಡಳಿತ ಹಾಗೂ ಪಾಲಿಕೆ ಅಧಿಕಾರಿಗಳು ಒಂದು ವಾರದಲ್ಲಿ ಈ ಕಾರ್ಯ ಪೂರ್ಣಗೊಳಿಸಿ, ಮಳೆ ಬಂದ ನಂತರ ಪ್ರವಾಹ ಆಗದಂತೆ ನೋಡಿಕೊಳ್ಳಬೇಕು.
ಕಳೆದ ಸಾಲಿನಲ್ಲಿ ಸಮಸ್ಯೆ ಎಲ್ಲಿ ಆಗಿದೆ. ಯಾವ ವಾರ್ಡ್‌ನಲ್ಲಿ ಪ್ರವಾಹ ಸಾಧ್ಯತೆಯಿದೆ ಎನ್ನುವುದನ್ನು ಈಗಲೇ ಗೊತ್ತು ಮಾಡಿಕೊಂಡು, ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು. ಈ ವಿಷಯದಲ್ಲಿ ಸ್ಥಳೀಯವಾಗಿ ಕ್ರಿಯಾ ಯೋಜನೆ ಸಿದ್ಧಪಡಿಸಿಕೊಂಡು, ಈಗಿನಿಂದಲೇ ಕಾರ್ಯೋನ್ಮುಖರಾಗಬೇಕು ಎಂದರು.

ಶಿಥಿಲಾವಸ್ಥೆಯಲ್ಲಿರುವ ಕಟ್ಟಡ ಗುರುತಿಸಿ

ಮಣ್ಣು ಹಾಗೂ ಕಟ್ಟಿಗೆ ಮನೆಗಳು ಶಿಥಿಲಾವಸ್ಥೆಯಲ್ಲಿರುವುದರ ಕುರಿತು ಗ್ರಾಮದಲ್ಲಿ ಡಂಗೂರ ಸಾರುವ ಮೂಲಕ ಸಾರ್ವಜನಿಕರಿಗೆ ತಿಳಿವಳಿಕೆ ಮೂಡಿಸಬೇಕು. ಶಿಥಿಲಾವಸ್ಥೆಯಲ್ಲಿರುವ ಮನೆಗಳ ಮಾಹಿತಿಯನ್ನು ತಕ್ಷಣವೇ ಕ್ರೋಢಿಕರಿಸುವುದರೊಟ್ಟಿಗೆ ಜನರಿಗೆ ಮುಂಜಾಗ್ರತೆ ವಹಿಸಲು ತಿಳಿಸಬೇಕು. ಆ ಮೂಲಕ ಜಿಲ್ಲೆಯಾದ್ಯಂತ ಜನ-ಜಾನುವಾರು ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಡಿಸಿ ತಿಳಿಸಿದರು.
ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ, ಆಸ್ಪತ್ರೆ , ವಸತಿ ನಿಲಯಗಳ ಕಟ್ಟಡಗಳ ಮಾಹಿತಿ ಕ್ರೋಢಿಕರಿಸಬೇಕು. ಅಲ್ಲೆಲ್ಲ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಮಕ್ಕಳ ಹಿತ ಮುಖ್ಯವಾಗಿದೆ. ಹಾಗಾಗಿ ಎಲ್ಲ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ತಕ್ಷಣ ಶಾಲೆಗಳಿಗೆ ಭೇಟಿ ನೀಡಿ, ಈಗಿನಿಂದಲೇ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವಿದ್ಯುತ್ ಅವಘಡ ತಪ್ಪಿಸಿ

ಶಿಥಿಲಾವಸ್ಥೆಯಲ್ಲಿರುವ ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ಪರಿವರ್ತಕಗಳ ಮಾಹಿತಿಯನ್ನು ಆಯಾ ತಹಸೀಲ್ದಾರ್‌ರು ಸಮನ್ವಯತೆಯಿಂದ ಕಲೆ ಹಾಕಿ ಸಮಸ್ಯೆಗಳಿದ್ದಲ್ಲಿ ಆಯಾ ಹಂತಗಳಲ್ಲಿಯೇ ಪರಿಹರಿಸಬೇಕು. ರಸ್ತೆ ಪಕ್ಕದ ಬೃಹದಾಕಾರದ ಮರದ ಕೊಂಬೆಗಳು ಬೀಳುವಂತಿದ್ದರೆ, ಅವುಗಳನ್ನು ತಕ್ಷಣ ಕಟಾವು ಮಾಡಿಸಬೇಕು. ಖಾಸಗಿ ವ್ಯಾಪ್ತಿಯಲ್ಲೂ ಈ ತರಹದ ಪರಿಸ್ಥಿತಿಯಿದ್ದರೆ, ಕ್ರಮವಹಿಸಿ ಸಾರ್ವಜನಿಕ ಆರೋಗ್ಯ ಮುಖ್ಯವಾಗಿದ್ದು, ಸ್ಥಳೀಯ ಆಡಳಿತ ನಿಗಾವಹಿಸಬೇಕು. ಯಾವುದೇ ಅವಘಡಗಳಾಗದಂತೆ ತುಂಬಾ ಮುತುವರ್ಜಿಯಿಂದ ಕೆಲಸ ಮಾಡಬೇಕು ಎಂದರು.
ಸ್ಥಳೀಯ ಸಮಸ್ಯೆಗಳಿಗೆ ಆಯಾ ಪಿಡಿಒಗಳು ವಿಪತ್ತು ನಿರ್ವಹಣೆ ಸಭೆ ನಡೆಸಬೇಕು. ಏನೇ ಸಮಸ್ಯೆಗಳಿದ್ದರೆ, ಗ್ರಾಮಗಳಲ್ಲಿ ಡಂಗೂರ ಸಾರುವ ಮೂಲಕ ಸ್ಥಳೀಯವಾಗಿ ಮಾಹಿತಿ ನೀಡಬೇಕು. ಈ ಕಾರ್ಯ ಗ್ರಾಮ ಪಂಚಾಯತಿ ಮಟ್ಟದಲ್ಲಿ ನಿರ್ವಹಿಸಬೇಕು ಎಂದು ಸೂಚಿಸಿದರು.
ಮುಂಗಾರು ಬಿತ್ತನೆಗೆ ಅವಶ್ಯಕವಾದ ಬೀಜ ಹಾಗೂ ರಸಗೊಬ್ಬರ ಪಡೆಯಲು ರೈತರಿಗೆ ತೊಂದರೆಯಾಗಬಾರದು. ಕೃಷಿ ಕೇಂದ್ರ ಸೇರಿದಂತೆ ಅಂಗಡಿ ಮುಂಗಟ್ಟುಗಳಲ್ಲಿ ಯಾವುದೇ ಸಮಸ್ಯೆಯಾಗದಂತೆ ಸಾಕಷ್ಟು ಬೀಜ ಹಾಗೂ ರಸಗೊಬ್ಬರ ದಾಸ್ತಾನು ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂ ಸಿಇಒ ರಿಷಿ ಆನಂದ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಯೋಜನಾ ನಿರ್ದೇಶಕ ಬದ್ರುದ್ದಿನ್ ಸೌದಾಗರ್, ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವಾನಂದ ಪಾಟೀಲ, ತೋಟಗಾರಿಕಾ ಜಂಟಿ ನಿರ್ದೇಶಕ ರಾಹುಲ್ ಬಾವಿದೊಡ್ಡಿ, ಡಿಎಚ್‌ಒ ಡಾ. ಸಂಪತ್ ಗುಣಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ. ಚವಾಣ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net