ವಿಜಯಪುರ ನಗರದ ಜಿಲ್ಲಾಡಳಿತ ಕಚೇರಿ ಎದುರು ರಾಜ್ಯ ದಲಿತ ಸಂಘರ್ಷ ಸಮಿತಿ (ಡಾ. ಡಿ.ಜಿ. ಸಾಗರ ಬಣ) ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಸಿದ್ದು ರಾಯಣ್ಣನವರ, ರಮೇಶ ದರಣಾಕರ, ಮಹಾಂತೇಶ ಸಾಸಬಾಳ ಇತರರಿದ್ದಾರೆ.
ವಿಜಯಪುರ: ದೆಹಲಿಯ ಜಂತರ್-ಮಂತರ್‌ನಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ನಡೆಯುತ್ತಿದ್ದ ಶಾಂತಿಯುತ ಪ್ರತಿಭಟನೆ ವೇಳೆ ಲಾಠಿ ಪ್ರಹಾರ ನಡೆಸಿದ ಕ್ರಮ ಖಂಡಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ (ಡಾ. ಡಿ.ಜಿ.ಸಾಗರ ಬಣ) ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ಜಿಲ್ಲಾಡಳಿತ ಕಚೇರಿ ಎದುರು ಕೆಲ ಕಾಲ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದ ಕಾರ್ಯಕರ್ತರು ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದರು. ಬಳಿಕ ಜಿಲ್ಲಾಡಳಿತದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಸಂಚಾಲಕ ಸಿದ್ದು ರಾಯಣ್ಣನವರ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಪ್ರತಿಭಟ ನೆಗಳು ವ್ಯವಸ್ಥೆಯನ್ನು ಸುಧಾರಿಸುವ ಅವಕಾಶಗಳಾಗಿವೆ. ಸರ್ಕಾರಗಳು ಜನರ ಅಸಮಾಧಾನವನ್ನು ಆಲಿಸುವ ಸಾಮರ್ಥ್ಯ ಹೊಂದಿದಾಗ ಮಾತ್ರ ಅವು ಬಲಿಷ್ಠವಾಗುತ್ತವೆ. ಆದರೆ, ಪ್ರತಿಭಟನೆಯನ್ನೇ ಹತ್ತಿಕ್ಕುವ ಕ್ರಮ ಸಂವಿಧಾನ ವಿರೋಧಿಯಾಗಿದೆ ಎಂದರು.