ಹೂವಿನಹಿಪ್ಪರಗಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜು.2ರಂದು ಬಸವನಬಾಗೇವಾಡಿ ಪಟ್ಟಣದಲ್ಲಿ ಕೃಷ್ಣಾ ಕೊಳ್ಳ ಜಲ ಸಂರಕ್ಷಣಾ ಹೋರಾಟ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಅರವಿಂದ ಕುಲಕರ್ಣಿ ತಿಳಿಸಿದರು.
ಪಟ್ಟಣದ ಮಲ್ಲಿಕಾರ್ಜುನ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿಸಭೆಯಲ್ಲಿ ಅವರು ಮಾತನಾಡಿದರು.
ಕೃಷ್ಣಾ ನ್ಯಾಯಾಧೀಕರಣ ತೀರ್ಪಿನಂತೆ ಲಾಲ್ ಬಹದ್ದೂರ್ ಶಾಸಿ ಜಲಾಶಯದ ನೀರಿನ ಮಟ್ಟವನ್ನು 524.256ಕ್ಕೆ ನಿಲ್ಲಿಸಿ, ಗೇಟ್ ಅಳವಡಿಸಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸುವುದು ಹಾಗೂ ಮುಳುಗಡೆ ಹೊಂದುವ ಅಂದಾಜು 22 ಹಳ್ಳಿಗಳ ಪುನರ್ವಸತಿ ಹಾಗೂ ಪುನರ್ನಿರ್ಮಾಣಕ್ಕೆ ಅಗತ್ಯವಿರುವ ಅನುದಾನ ಸಿದ್ಧತೆ ಮಾಡಬೇಕು ಎಂದು ಆಗ್ರಹಿಸಿ ಜು. 2ರಂದು ಬೆಳಗ್ಗೆ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ಪ್ರತಿಭಟನಾ ಮೆರವಣಿಗೆ ಬಸ್ ಸ್ಟಾೃಂಡ್ ಮಾರ್ಗವಾಗಿ ಹೊರಟು ತಹಸೀಲ್ದಾರ್ ಕಚೇರಿ ತಲುಪಿ, ಸಭೆ ನಡೆಸಿದ ನಂತರ ತಹಸೀಲ್ದಾರ್ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಅಂದಿನ ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸಬೇಕೆಂದು ಮನವಿ ಮಾಡಿಕೊಂಡರು.
ಹೋರಾಟ ಸಮಿತಿ ಸದಸ್ಯ ವಿಠ್ಠಲ ಬಿರಾದಾರ ಮಾತನಾಡಿ ನೀರಾವರಿ ವಿಷಯದಲ್ಲಿ ಸರ್ಕಾರಗಳು ಅವಳಿ ಜಿಲ್ಲೆಯ ರೈತರಿಗೆ ಅನ್ಯಾಯ ಮಾಡುತ್ತಿವೆ. ರೈತರಿಗೆ ನ್ಯಾಯ ದೊರಕಿಸಿಕೊಳ್ಳಲು ಹೋರಾಟ ಅನಿವಾರ್ಯವಾಗಿದೆ. ಆದ್ದರಿಂದ ಪಕ್ಷ ಭೇದ ಮರೆತು ರೈತರು ಹಾಗೂ ಜನಸಾಮಾನ್ಯರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು.