ದ್ವಿತೀಯ ಪಿಯುಸಿ ಪರೀಕ್ಷೆ-1 ಸುಸೂತ್ರವಾಗಿ ಜರುಗಿಸಿ

ವಿಜಯಪುರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಪಂ ಸಿಇಒ ರಿಷಿ ಆನಂದ ಪೂರ್ವಭಾವಿ ಸಭೆ ನಡೆಸಿದರು. ಎಎಸ್‌ಪಿ ರಾಮನಗೌಡ ಹಟ್ಟಿ, ಪಪೂ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ಹೊಸಮನಿ ಇದ್ದಾರೆ.
ವಿಜಯಪುರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಪಂ ಸಿಇಒ ರಿಷಿ ಆನಂದ ಪೂರ್ವಭಾವಿ ಸಭೆ ನಡೆಸಿದರು. ಎಎಸ್‌ಪಿ ರಾಮನಗೌಡ ಹಟ್ಟಿ, ಪಪೂ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ಹೊಸಮನಿ ಇದ್ದಾರೆ.
Published on

ಪ್ರಮುಖ ಮುಖ್ಯಾಂಶಗಳು

  • ಸಿಇಒ ರಿಷಿ ಆನಂದ ಸೂಚನೆ
  • 32178 ವಿದ್ಯಾರ್ಥಿಗಳು ಹಾಜರಿ
  • ಸರ್ಕಾರಿ ಪಿಯು ಕಾಲೇಜ್‌ನಲ್ಲಿ ಪೂರ್ವಭಾವಿ ಸಭೆ
ವಿಜಯಪುರ: ಜಿಲ್ಲೆಯ 13 ತಾಲೂಕುಗಳಲ್ಲಿ ಒಟ್ಟು 64 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಜರುಗಲಿದ್ದು ಯಾವುದೇ ಲೋಪವಾಗದಂತೆ ಸುಸೂತ್ರವಾಗಿ ಹಾಗೂ ಅಚ್ಚುಕಟ್ಟಾಗಿ ಪರೀಕ್ಷೆ ನಡೆಸುವಂತೆ ಜಿಪಂ ಸಿಇಒ ರಿಷಿ ಆನಂದ ಸೂಚಿಸಿದರು.
ನಗರದ ಗಾಂಧಿ ವೃತ್ತದ ಬಳಿ ಇರುವ ಸರ್ಕಾರಿ ಪಿಯುಸಿ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಒಟ್ಟು 32178 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವರು. ನಿಯೋಜಿತ ಅಧಿಕಾರಿಗಳು ಯಾವುದೇ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಬೇಕು. ಪರೀಕ್ಷಾ ನಿಯಮಗಳನ್ವಯ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು.
ಪರೀಕ್ಷಾ ಕೇಂದ್ರದ ಮುಖ್ಯಸ್ಥರು ನಿಗದಿತ ಅವಧಿಯೊಳಗೆ ಅಧಿಕಾರಿ ಹಾಗೂ ಸಿಬ್ಬಂದಿ ಜೊತೆ ಸಭೆ ನಡೆಸಬೇಕು. ಕೊಠಡಿಗಳು ಸುವ್ಯವಸ್ಥಿತವಾಗಿರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ದಿನಗಳಂದು ಶುದ್ಧ ಕುಡಿಯುವ ನೀರು, ಶೌಚಗೃಹ, ಸಮರ್ಪಕವಾಗಿ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು. ವಿದ್ಯುತ್ ವ್ಯತ್ಯಯವಾಗದಂತೆ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಸಿಇಒ ಸೂಚಿಸಿದರು.
ಪರೀಕ್ಷೆಗೆ ಸಂಬಂಧಿಸಿದ ಸಾಮಾಗ್ರಿಗಳನ್ನು 27 ಮಾರ್ಗಾಧಿಕಾರಿಗಳ ತಂಡಕ್ಕೆ ಹಸ್ತಾಂತರಿಸಲು ಅಪರ ಜಿಲ್ಲಾಧಿಕಾರಿಗಳು, ಉಪ ನಿರ್ದೇಶಕರು ಜಿಲ್ಲಾ ಖಜಾನೆ ಮತ್ತು ಉಪ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವಿಜಯಪುರ ಇವರನ್ನೊಳಗೊಂಡ ಸಮಿತಿ ನೇಮಕ ಮಾಡಲಾಗಿದೆ. ತಹಸೀಲ್ದಾರ್, ತಹಸೀಲ್ದಾರ್ ಗ್ರೇಡ್-2, ಉಪ ತಹಸೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು ಹಾಗೂ ಸರ್ಕಾರಿ, ಅನುದಾನಿತ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು ಮತ್ತು ಉಪನ್ಯಾಸಕರುಗಳನ್ನು ತ್ರಿಸದಸ್ಯ ಸಮಿತಿಯ ಸದಸ್ಯರನ್ನಾಗಿ ಜಿಲ್ಲಾಧಿಕಾರಿಗಳು ನೇಮಕ ಮಾಡಿದ್ದಾರೆ. ಈ ಸಮಿತಿಗೆ ತಲಾ ಒಬ್ಬ ಸಶಸ್ತ್ರ ಪೊಲೀಸ್ ಸಿಬ್ಬಂದಿ ಹಾಗೂ ಜಿಲ್ಲೆಯ 64 ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ಗಾಗಿ ಅವಶ್ಯಕತೆಗೆ ಅನುಗುಣವಾಗಿ ಪೊಲೀಸ್ ಸಿಬ್ಬಂದಿ ಮತ್ತು ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆ ಬಂಡಲ್‌ಗಳನ್ನು ಪರೀಕ್ಷಾ ಕೇಂದ್ರದಿಂದ ಅಂಚೆ ಕಚೇರಿಗೆ ಸಾಗಿಸುವಾಗ ಪೊಲೀಸ್ ಸಿಬ್ಬಂದಿ ನೇಮಕ ಮಾಡಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ ಪ್ರದೇಶವನ್ನು ನಿಷೇಧಿತ ಎಂದು ಘೋಷಿಸಲಾಗುವುದು. ಬಿಗಿ ಬಂದೋಬಸ್ತ್ ಏರ್ಪಡಿಸಲಾಗುವುದು. ಸಿಸಿ ಕ್ಯಾಮರಾ ಅಳವಡಿಸಲು ಕ್ರಮ ವಹಿಸಬೇಕು ಹಾಗೂ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕಚೇರಿಗಳಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದರು.
ಎಎಸ್‌ಪಿ ರಾಮನಗೌಡ ಹಟ್ಟಿ ಮಾತನಾಡಿ, ಜಿಲ್ಲೆಯಲ್ಲಿರುವ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಕಾನೂನು ಸುವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲಾಗುವುದು ಎಂದರು.
ಎಡಿಸಿ ಡಾ. ಔದ್ರಾಮ್, ಪಪೂ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ಹೊಸಮನಿ, ಎ.ಕೆ. ಉಪ್ಪಾರ, ಸಿ.ಬಿ. ನಾಟಿಕಾರ, ಬಿ.ಬಿ. ಗಂಗನಹಳ್ಳಿ ಪ್ರಕಾಶ ಮೇತ್ರಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net