ಅಪಘಾತ ತಡೆಗೆ ಸುರಕ್ಷತಾ ಕ್ರಮ ಕೈಗೊಳ್ಳಿ, ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ
ವಿಜಯಪುರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ ಅಧ್ಯಕ್ಷತೆಯಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು. ಎಸ್‌ಪಿ ಲಕ್ಷ್ಮಣ ನಿಂಬರಗಿ, ವಿಜಯಪುರ ಎಸಿ ಗುರುನಾಥ ದಡ್ಡೆ, ಇಂಡಿ ಎಸಿ ಚಿದಾನಂದ ಗುರುಸ್ವಾಮಿ ಇತರರಿದ್ದಾರೆ.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ
ರಸ್ತೆ ಸುರಕ್ಷತಾ ಕ್ರಮ ಕುರಿತು ಚರ್ಚೆ
ಅಪಘಾತ ವಲಯ ಗುರುತಿಸಲು ಸೂಚನೆ
ವಿಜಯಪುರ: ಜಿಲ್ಲೆಯಲ್ಲಿ ಅಪಘಾತ ತಡೆಗೆ ಸುರಕ್ಷತಾ ಕ್ರಮ ಕೈಗೊಳ್ಳಬೇಕು. ಅದಕ್ಕಾಗಿ ಅಪಘಾತ ವಲಯಗಳನ್ನು ಗುರುತಿಸಿಟ್ಟುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಸ್ತೆ ಅಪಘಾತ ತಡೆಗೆ ರಾಷ್ಟೀಯ ಹೆದ್ದಾರಿ, ಜಿಲ್ಲಾ ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಮುಖ್ಯ ರಸ್ತೆ ಸೇರಿದಂತೆ ಅಪಘಾತ ವಲಯಗಳಲ್ಲಿ ಅಪಘಾತ ಪ್ರಮಾಣ ತಗ್ಗಿಸಲು ಸಂಬಂಧಿಸಿದ ಇಲಾಖೆಗಳು ಮಾಹಿತಿ ಫಲಕಗಳನ್ನು ಅಳವಡಿಸಬೇಕು. ಸೂಕ್ತ ಗುರುತು ಫಲಕ, ಅಗತ್ಯವಿದ್ದಲ್ಲಿ ಬ್ಯಾರಿಕೇಡ್ ಸೇರಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ ಅಪಘಾತಗಳು ನಡೆಯದಂತೆ ನೋಡಿಕೊಳ್ಳುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿರುವ ಅಪಘಾತ ವಲಯಗಳಲ್ಲಿ ಅಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು, ಪರಿಶೀಲಿಸಿ, ಅಪಘಾತ ತಡೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ ಅವರು, ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ಪದೇ ಪದೇ ಅಪಘಾತಗಳು ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆ ಸ್ಥಳಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ ಅಪಘಾತಗಳ ತಡೆಗೆ ಸೂಕ್ತ ಕ್ರಮ ವಹಿಸಬೇಕು. ಅವಶ್ಯವಿದ್ದೆಡೆ ಸೈನೇಜ್ ಬೋರ್ಡ್ ಬ್ಯಾರಿಕೇಡ್ ಹಾಕಬೇಕು. ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಆಯೋಜಿಸುವ ಮೂಲಕ ಜನರಲ್ಲಿ ಸೂಕ್ತ ಜಾಗೃತಿ ಮೂಡಿಸುವಂತೆ ಅವರು ಸೂಚನೆ ನೀಡಿದರು.
ನಗರದಲ್ಲಿ ರಸ್ತೆ ಸುರಕ್ಷಾ ನಿಯಮಗಳನ್ನು ಅನುಸರಿಸಲು ವಾಹನ ಸವಾರರಿಗೆ ತಿಳಿಸಿ ಹೇಳಬೇಕು ಎಂದು ಅಧಿಕಾರಿಗಳಿಗೆ ಸಲಹೆ ಮಾಡಿದ ಅವರು, ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ನೀಡಲಾದ ಸೂಚನೆಗಳ ಬಗ್ಗೆ ವರದಿ ಸಲ್ಲಿಸಲು ಲೋಕೋಪಯೋಗಿ ಇಲಾಖೆಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. ರಸ್ತೆ ವಿಭಜಕಗಳನ್ನು ಅನಧಿಕೃತವಾಗಿ ಒಡೆದು ವಾಹನ ಸವಾರರು ಸಂಚರಿಸುತ್ತಿದ್ದಾರೆ. ಇವುಗಳನ್ನು ತಕ್ಷಣವೇ ಮುಚ್ಚಿ, ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎಸ್‌ಪಿ ಲಕ್ಷ್ಮಣ ನಿಂಬರಗಿ ಮಾತನಾಡಿ, ರಸ್ತೆಗಳಲ್ಲಿ ಅಳವಡಿಸಲಾದ ಗುರುತು ಫಲಕಗಳು ಹಾಗೂ ರಸ್ತೆ ನಿಯಮಗಳ ಪಾಲನೆಗೆ ವಾಹನ ಸವಾರರಲ್ಲಿ ಸೂಕ್ತ ತಿಳಿವಳಿಕೆ ಮೂಡಿಸಬೇಕು. ಕಡ್ಡಾಯವಾಗಿ ನಿಯಮಗಳ ಪಾಲನೆ ಕುರಿತು ಜಾಗೃತಿ ಮೂಡಿಸಬೇಕು. ಈಗಾಗಲೇ ಗುರುತಿಸಲಾದ ಅಪಘಾತ ವಲಯ ಸ್ಥಳಗಳಾದ ಮನಗೂಳಿ ಮುದ್ದೇಬಿಹಾಳ ಕ್ರಾಸ್ ಸೇರಿ ಹೈಲೆವೆಲ್ ಬ್ಲಾಕ್‌ಪಾಟ್ಸ್ ಆಗಿರುವುದರಿಂದ ಅಪಘಾತ ತಡೆಗೆ ಅಗತ್ಯ ಕ್ರಮ ವಹಿಸುವಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದರು.
ವಿಜಯಪುರ ಎಸಿ ಗುರುನಾಥ ದಡ್ಡೆ, ಇಂಡಿ ಎಸಿ ಚಿದಾನಂದ ಗುರುಸ್ವಾಮಿ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಲ್ಲಿಕಾರ್ಜುನ ಕುಸುನಾಳ, ಪಾಲಿಕೆಯ ಉಪ ಆಯುಕ್ತ ಮಹಾವೀರ ಬೋರಣ್ಣವರ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಂ ಬಾಬಾ ಇತರರಿದ್ದರು.