

ಕಡೂರು: ತಾಲೂಕಿನ ಬಳ್ಳೇಕೆರೆ ಗ್ರಾಮದ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವವು ಸೋಮವಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಬೆಳಗ್ಗೆ ಮೂಲ ದೇವರಿಗೆ ಪಂಚಾಮೃತ ಅಭಿಷೇಕ, ಸಂಕಲ್ಪ ಸೇವೆಗಳು ನಡೆದು ಸ್ವಾಮಿಗೆ ಬಂಗಾರದ ಕವಚವನ್ನು ಸಮರ್ಪಿಸಲಾಯಿತು. ನಂತರ ಸ್ವಾಮಿಯ ಉತ್ಸವ ಮೂರ್ತಿಯನ್ನು ವಿವಿಧ ಕಲಾ ತಂಡಗಳೊಂದಿಗೆ ಅದ್ದೂರಿ ಮೆರವಣಿಗೆ ಮೂಲಕ ಅಲಂಕೃತಗೊಂಡ ರಥದ ಬಳಿ ಕರೆತರಲಾಯಿತು. ರಥಕ್ಕೆ ಬಲಿಪ್ರಧಾನ ಸಾಂಪ್ರದಾಯಿಕ ಪೂಜಾ ಕಾರ್ಯಕ್ರಮ ನೆರವೇರಿಸಿ ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಟಾಪಿಸಲಾಯಿತು. ನೆರೆದಿದ್ದ ಭಕ್ತರು ಜಯ ಘೋಷಗಳೊಂದಿಗೆ ರಥವನ್ನು ಎಳೆದು ಸಂಭ್ರಮಿಸಿದರು. ರಥದ ಕಳಶಕ್ಕೆ ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು.
ದೇವಾಲಯ ಸಮಿತಿಯಿಂದ ದಾಸೋಹದ ವ್ಯವಸ್ಥೆ ಕಲ್ಪಿಸಲಾಯಿತು. ಸಂಜೆ ಶನಿ ಪ್ರಭಾವಳಿಯ ಪೌರಾಣಿಕ ನಾಟಕವನ್ನು ಪ್ರದರ್ಶಿಸಲಾಯಿತು. ದೇವಾಲಯ ಸಮಿತಿಯ ಪದಾಧಿಕಾರಿಗಳು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ರಥೋತ್ಸವದಲ್ಲಿ ಭಾಗವಹಿಸಿದ್ದರು.