ಮಕ್ಕಳನ್ನು ಸಾಧಕರಾಗಿ ಮಾಡಿ

phoshan shakti abiyan
Published on

ಶಿಕ್ಷಕರಿಗೆ ಸಚಿವ ಮುನಿಯಪ್ಪ ಕಿವಿಮಾತು

ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ವಿತರಣೆ


ವಿಜಯವಾಣಿ ಸುದ್ದಿಜಾಲ ವಿಜಯಪುರ
ವಿದ್ಯಾರ್ಥಿಗಳನ್ನು ಸಾಧಕರನ್ನಾಗಿ ಮಾಡುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಆವರಣದಲ್ಲಿ ಶಿಕ್ಷಣ ಇಲಾಖೆಯಿಂದ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಶಿಕ್ಷಣದ ಜತೆಯಲ್ಲಿ ಪಠ್ಯೇತರ ಚಟುವಟಿಕೆಗೂ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಹೆಚ್ಚು ಅಂಕ ಗಳಿಸುವ ಜತೆಗೆ ಭಾರತವನ್ನು ಜಗತ್ತಿನಲ್ಲಿ ಶಕ್ತಿಶಾಲಿ ರಾಷ್ಟ್ರವನ್ನಾಗಿಸಲು ಕೊಡುಗೆ ನೀಡಬೇಕು ಎಂದರು.
ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆ ಮಾಡುವ ಜತೆಗೆ ಶೈಕ್ಷಣಿಕವಾಗಿ ಅಭಿವೃದ್ಧಿಯತ್ತ ಕೊಂಡೊಯ್ಯಲು ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ವಿತರಣೆ ಪೂರಕವಾಗಿದೆ ಎಂದರು.
ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನುರಾಧಾ ಮಾತನಾಡಿ, ಹಸಿವು ನೀಗಿಸಿ, ಸಮಾಜದ ಕಟ್ಟಕಡೆಯ ವಿದ್ಯಾರ್ಥಿಯನ್ನು ಶಿಕ್ಷಣದ ಕಡೆಗೆ ಸೆಳೆಯುವ ಪ್ರಯತ್ನ ಮಾಡಲಾಗಿದೆ. ಶಾಲಾ ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸುವುದು ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ ಎಂದರು.
ಕೆಪಿಸಿಸಿ ಕಾರ್ಯದರ್ಶಿ ವಿ.ಮಂಜುನಾಥ್ ಮಾತನಾಡಿ, ಕಲಿಕೆಗೆ ಉತ್ತಮ ವಾತಾವರಣದ ಜತೆಗೆ ಇತಿಹಾಸ ಹೊಂದಿರುವ ಶಾಲೆಗೆ ಮುಂದಿನ ವರ್ಷ 75 ವರ್ಷ ಪೂರ್ಣಗೊಳ್ಳಲಿದ್ದು, ಅಮೃತ ಮಹೋತ್ಸವ ಆಚರಣೆ ಮಾಡಬೇಕಿದ್ದು, ಅಮೃತಮಹೋತ್ಸವ ಭವನ ನಿರ್ಮಾಣವಾಗಬೇಕು. ಪಟ್ಟಣಕ್ಕೆ ಪದವಿ ಕಾಲೇಜು ಮಂಜೂರು ಮಾಡಿಸಬೇಕು ಎಂದು ಮನವಿ ಮಾಡಿದರು.
ಪುರಸಭೆ ಅಧ್ಯಕ್ಷೆ ವಿಮಲಾ ಬಸವರಾಜ್ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಗುರಿ ಇಟ್ಟುಕೊಂಡು ಶಿಕ್ಷಕರ ಮಾರ್ಗದರ್ಶನದಲ್ಲಿ ಸಾಗಿದರೆ, ಉತ್ತಮ ಭವಿಷ್ಯ ದೊರಕಲಿದೆ ಎಂದರು.
ಪುರಸಭೆ ಉಪಾಧ್ಯಕ್ಷ ಎಂ.ಕೇಶವಪ್ಪ, ಪುರಸಭೆ ಸದಸ್ಯರಾದ ಎಂ.ಸತೀಶ್ ಕುಮಾರ್, ಎ.ಆರ್.ಹನಿಪುಲ್ಲ, ಭವ್ಯಾ ಮಧು, ಎಂ.ನಾರಾಯಣಸ್ವಾಮಿ, ರಾಜಣ್ಣ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಶಾಂತ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ರಾಮಚಂದ್ರಪ್ಪ, ಪ್ರಸನ್ನಕುಮಾರ್, ಪ್ರಧಾನ ಕಾರ್ಯದರ್ಶಿ ನಾಗೇಗೌಡ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಗೌಸ್ ಖಾನ್, ಎಸ್‌ಸಿ ಘಟಕದ ಅಧ್ಯಕ್ಷ ಲೋಕೇಶ್, ಹೋಬಳಿ ಎಸ್‌ಟಿ ಘಟಕದ ಅಧ್ಯಕ್ಷರಾದ ಮುನಿಆಂಜಿನಪ್ಪ, ಕೋಕೋಕೋಲಾ ಮಂಜುನಾಥ್, ವೇಣುಗೋಪಾಲ್, ಧರ್ಮಪುರ ಕೃಷ್ಣಪ್ಪ, ಸಿಆರ್‌ಪಿ ಮುನಿಯಪ್ಪ, ಕಾಲೇಜಿನ ಪ್ರಾಂಶುಪಾಲ ಗೋಪಾಲಯ್ಯ, ಉಪಪ್ರಾಂಶುಪಾಲ ಪಿ.ವೆಂಕಟೇಶ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net