

ಹನೂರು: ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಆರೋಪಗಳಿಗೆ ತಕ್ಕ ಉತ್ತರ ನೀಡುವ ಸಲುವಾಗಿ ಡಿ.5 ರಂದು ಹಾಸನದಲ್ಲಿ ಆಯೋಜಿಸಿರುವ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಹನೂರು ಕ್ಷೇತ್ರದಿಂದ ಹೆಚ್ಚಿನ ಜನರು ಆಗಮಿಸುವಂತೆ ಮಾಜಿ ಶಾಸಕ ಆರ್.ನರೇಂದ್ರ ಮನವಿ ಮಾಡಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕರ್ತರು ಹಾಗೂ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತವನ್ನು ನೀಡುವುದರ ಜತೆಗೆ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. 5 ಗ್ಯಾರಂಟಿ ಯೋಜನೆಯ ಅನುಕೂಲತೆಯನ್ನು ಜನತೆ ಪಡೆಯುತ್ತಿದ್ದಾರೆ. ಇದರ ಪರಿಣಾಮವೇ 3 ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಕಪ್ಪು ಚುಕ್ಕೆ ಇಲ್ಲದಂತೆ ಆಡಳಿತ ನಡೆಸುತ್ತಿದ್ದಾರೆ. ಆದರೆ ಇದನ್ನು ಸಹಿಸದ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾಂಗ್ರೆಸ್‌ನಲ್ಲಿ ಒಡಕನ್ನುಂಟು ಮಾಡುವ ಸಲುವಾಗಿ ಹುನ್ನಾರ ನಡೆಸುತ್ತಿದ್ದು, ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಹಾಗಾಗಿ ಪಕ್ಷ ಸಂಘಟನೆ, ವಿರೋಧ ಪಕ್ಷದವರಿಗೆ ತಕ್ಕ ಉತ್ತರ ನೀಡಲು ಹಾಗೂ ಪಕ್ಷದ ಶಕ್ತಿ ಪ್ರದರ್ಶನಕ್ಕಾಗಿ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಆರೋಪದಲ್ಲಿ ಹುರುಳಿಲ್ಲ: ಮುಡಾ ಪ್ರಕರಣ ನ್ಯಾಯಾಲಯದಲ್ಲಿದ್ದು, ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇದೀಗ ಸಮಾವೇಶ ಆಯೋಜಿಸಲಾಗುತ್ತಿದ್ದು, ಪಕ್ಷದ ಶಕ್ತಿ ಪ್ರದರ್ಶನದಿಂದ ಕೋರ್ಟ್‌ನಲ್ಲಿರುವ ಪ್ರಕರಣ ವಜಾ ಆಗಲಿದೆಯೇ? ಎಂದು ಪ್ರಶ್ನಿಸಿದ ಅವರು, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಕನಿಷ್ಠ ಜ್ಞಾನವೂ ಇಲ್ಲದೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇತ್ತ ವಿಜಯೇಂದ್ರ ಹಾಗೂ ಯತ್ನಾಳ್ ಬಣ ಪ್ರತಿದಿನ ಕಿತ್ತಾಡಿಕೊಳ್ಳುತ್ತಲೇ ಇದೆ. ಬಿಜೆಪಿ ನಾಯಕರ ಬಗ್ಗೆ ಬಸವರಾಜ ಯತ್ನಾಳ್ ಏಕವಚನದಲ್ಲೇ ಮಾತನಾಡುತ್ತಿದ್ದಾರೆ. ಹಾಗಾಗಿ ಅವರವರಲ್ಲಿಯೇ ಸಾಕಷ್ಟು ತಪ್ಪುಗಳಿವೆ. ಈಗೀರುವಾಗ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇವರಿಗಿಲ್ಲ ಎಂದು ಮಾಜಿ ಶಾಸಕ ಆರ್.ನರೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ: ನನ್ನ ಅಧಿಕಾರಾವಧಿಯಲ್ಲಿ ಕ್ಷೇತ್ರದಲ್ಲಿ ಏಕಲವ್ಯ ಶಾಲೆ, ಆಸ್ಪತ್ರೆಗಳ ಸ್ಥಾಪನೆ, ಕೆ.ಶಿಪ್ ಯೋಜನೆಯಡಿ ರಸ್ತೆ ಅಭಿವೃದ್ಧಿ, ಸೇತುವೆಗಳ ನಿರ್ಮಾಣ ಹಾಗೂ ಇನ್ನಿತರ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಆದರೆ ಕ್ಷೇತ್ರದ ಜನತೆ ಇದನ್ನು ಮನಗಾಣಲಿಲ್ಲ. ಇದರಿಂದ ಸೋಲಬೇಕಾಯಿತು. ಆದರೂ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ನನ್ನ ಕೈ ಬಲಪಡಿಸಿದ್ದಾರೆ. ಆದ್ದರಿಂದ ಮುಂಬರುವ ಜಿಪಂ ಹಾಗೂ ತಾಪಂ ಚುನಾವಣೆಗೆ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಸಂಘಟಿಸಬೇಕಿದ್ದು, ಕಾರ್ಯೋನ್ಮುಖರಾಗಬೇಕಿದೆ ಎಂದು ತಿಳಿಸಿದರು.
ಇದೇ ವೇಳೆ ಹನೂರು ತಾಲೂಕು ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ರಾಜಮ್ಮ ಅವರಿಗೆ ಪಕ್ಷದ ಬಾವುಟ ನೀಡುವುದರ ಮೂಲಕ ಪಕ್ಷಕ್ಕೆ ಬಡಮಾಡಿಕೊಳ್ಳಲಾಯಿತು.
ಸಭೆಯಲ್ಲಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಮುಕುಂದವರ್ಮ, ರಾಮಾಪುರದ ಈಶ್ವರ್, ಮಹಿಳಾ ಘಟಕದ ಅಧ್ಯಕ್ಷೆ ರಾಧಾಮಣಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಸಿದ್ದರಾಜು, ಪಪಂ ಸದಸ್ಯರಾದ ಗಿರೀಶ್, ಸುದೇಶ್, ಹರೀಶ್, ಬಸವರಾಜು, ತಾಪಂ ಮಾಜಿ ಅಧ್ಯಕ್ಷ ಮುರುಡೇಶ್ವರಸ್ವಾಮಿ, ಉಪ್ಪಾರ ನಿಗಮದ ಮಾಜಿ ಅಧ್ಯಕ್ಞ ಶಿವಕುಮಾರ್ ಹಾಗೂ ಇನ್ನಿತರರು ಇದ್ದರು.