

ಗುಂಡ್ಲುಪೇಟೆ: ಕಳೆದ ಹಲವಾರು ವರ್ಷಗಳಿಂದ ಗ್ರಾಮಕ್ಕೆ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಬಾಚಹಳ್ಳಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ಆರಂಭಿಸಿದ್ದು, ಹಿರಿಯ ಅಧಿಕಾರಿಗಳು ಬರುವವರೆಗೆ ಕದಲುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ.
ಗ್ರಾಮ ಪಂಚಾಯಿತಿಯು ತನ್ನ ವ್ಯಾಪ್ತಿಯ ಗ್ರಾಮಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸುವಲ್ಲಿ ವಿಫಲವಾಗಿದೆ. ಪಂಚಾಯಿತಿಗೆ ಸಾಕಷ್ಟು ಅನುದಾನ ಬರುತ್ತಿದ್ದರೂ ಚರಂಡಿ ಹೂಳೆತ್ತಿಸುವುದು, ರಸ್ತೆ ನಿರ್ಮಾಣ ಸೇರಿದಂತೆ ಕನಿಷ್ಠ ಕಾರ್ಯಗಳನ್ನೂ ಕೈಗೊಳ್ಳುತ್ತಿಲ್ಲ. ನಾಲ್ಕು ವರ್ಷದ ಹಿಂದೆ ಪಂಚಾಯಿತಿ ಅಧಿಕಾರಿಗಳೇ ಲಕ್ಷಾಂತರ ರೂ.ದುರ್ಬಳಕೆ ಮಾಡಿಕೊಂಡಿದ್ದರೂ ಇನ್ನೂ ಅದನ್ನು ವಾಪಸ್ ಪಡೆದಿಲ್ಲ. ಸ್ಥಳಕ್ಕೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಆಗಮಿಸಿ ಗ್ರಾಮದ ಸಮಸ್ಯೆಗಳಿಗೆ ಪರಿಹಾರ ದೊರಕಿಸಬೇಕು ಎಂದು ಒತ್ತಾಯಿಸಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಆರಂಭಿಸಿದರು.
ಮಧ್ಯಾಹ್ನದವರೆಗೂ ಸ್ಥಳಕ್ಕೆ ಯಾವುದೆ ಅಧಿಕಾರಿಗಳು ಆಗಮಿಸದ ಹಿನ್ನೆಲೆಯಲ್ಲಿ ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿದ್ದಾರೆ. ಮುಖಂಡರಾದ ಮಣಿ, ವೀರಭದ್ರಸ್ವಾಮಿ, ಪರಶಿವಮೂರ್ತಿ, ಚನ್ನಬಸಪ್ಪ, ಸಿದ್ದಯ್ಯ, ಮಣಿಕಂಠ ಇತರರಿದ್ದರು.