

ಬೆಂಗಳೂರು: ಬಿಜೆಪಿ ನಾಯಕ ಯೋಗೀಶ್‌ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಅವರು ಧಾರವಾಡ ಜಿಲ್ಲೆಗೆ ಪ್ರವೇಶಿಸಲು ಅನುಮತಿ ಕೋರಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮತ್ತೊಮ್ಮೆ ಅರ್ಜಿ ಸಲ್ಲಿಸಿದ್ದಾರೆ.
ಶಾಸಕನಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಈ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಾಲಯವು ಜೂ.20ರೊಳಗೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸಿಬಿಐಗೆ ಸೂಚನೆ ನೀಡಿದೆ.
ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಪ್ರಭಾವಿ ವ್ಯಕ್ತಿಯಾಗಿದ್ದು, ಸಾಕ್ಷೃ ನಾಶ ಪಡಿಸುವ ಸಾಧ್ಯತೆ ಇರುವ ಕಾರಣ ಧಾರವಾಡ ಪ್ರವೇಶಕ್ಕೆ ನ್ಯಾಯಾಲಯವು ನಿರ್ಬಂಧ ವಿಧಿಸಿದೆ. ಧಾರವಾಡ ಜಿಲ್ಲೆಯಿಂದ ದೂರ ಉಳಿದುಕೊಂಡೇ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಇದೀಗ ಶಾಸಕರಾಗಿರುವ ಕಾರಣ ಕ್ಷೇತ್ರಕ್ಕೆ ತೆರಳಲು ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದಾರೆ.