ಮಕ್ಕಳ ಹಕ್ಕುಗಳ ಉಲ್ಲಂಘನೆ ಶಿಕ್ಷಾರ್ಹ

work
Published on

 ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ಮಕ್ಕಳು ದೇಶದ ಆಸ್ತಿ ಎಂಬುದನ್ನು ಎಲ್ಲರೂ ಗಂಭೀರವಾಗಿ ಪರಿಗಣಿಸಬೇಕು ಆದ್ದರಿಂದ ಮಕ್ಕಳ ಹಕ್ಕುಗಳ ಮೇಲಿನ ದೌರ್ಜನ್ಯ ಶಿಕ್ಷಾರ್ಹ ಅಪರಾಧವಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ಘಟಕ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ತಾಲೂಕು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಆರ್‌ಟಿಇ 2009, ಪೋಕ್ಸೋ 2012 ಹಾಗೂ ಬಾಲನ್ಯಾಯ ಕಾಯ್ದೆ 2015 ರ ಅನುಷ್ಠಾನದ ಕುರಿತು ವಿವಿಧ ಇಲಾಖೆ ಭಾಗಿದಾರರೊಂದಿಗೆ ಪ್ರಗತಿ ಪರಿಶಿಲನಾ ಸಭೆ ಮತ್ತು ತರಬೆತಿ ಕಾರ್ಯಗಾರದಲ್ಲಿ ಮಾತನಾಡಿದರು. ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಅವರ ಹಕ್ಕುಗಳನ್ನು ಎಲ್ಲರೂ ಗೌರವಿಸಬೇಕು, ಹಕ್ಕುಗಳನ್ನು ಕಿತ್ತುಕೊಳ್ಳಲು ಯಾರಿಗೂ ಅಧಿಕಾರವಿಲ್ಲ ಎಂದು ಕೆ.ನಾಗಣ್ಣ ಗೌಡ ಹೇಳಿದರು.

ಹಕ್ಕುಗಳ ಉಲ್ಲಂಘನೆ ಅಘಾತಕಾರಿ: ಪ್ರತಿ ಮಗುವಿನ ಸರ್ವತೋಮುಖ ಅಭಿವೃದ್ಧಿಗೆ ಬದುಕುವ ಹಕ್ಕು, ವಿಕಾಸ ಹೊಂದುವ ಹಕ್ಕು, ಭಾಗವಹಿಸುವ ಹಕ್ಕು, ರಕ್ಷಣೆ ಹಕ್ಕು ಪ್ರಮುಖ ಅಂಶಗಳಾಗಿದೆ. ವಿವಿಧ ಕಾರಣಗಳಿಂದ ಮಕ್ಕಳ ಮೇಲೆ ದೌರ್ಜನ್ಯಗಳು, ಹಕ್ಕುಗಳ ಉಲ್ಲಂಘನೆ ನಡೆಯುತ್ತಾ ಬಂದಿರುವುದು ಆಘಾತಕಾರಿಯಾದ ವಿಷಯವಾಗಿದೆ ಎಂದು ನಾಗಣ್ಣಗೌಡ ಕಳವಳ ವ್ಯಕ್ತಪಡಿಸಿದರು. ಕಾನೂನು ಅಡಿಯಲ್ಲಿ ಮಕ್ಕಳ ರಕ್ಷಣೆ ಆಗಬೇಕು. ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಮಕ್ಕಳ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂಬುದನ್ನು ಯಾರೂ ಮರೆಯಬಾರದು ಎಂದು ಒತ್ತಿ ಹೇಳಿದರು.

ದೂರು ಪೆಟ್ಟಿಗೆ ಇರಿಸಬೇಕು: ಶಾಲೆಗೆ ಹಾಜರಾಗುತ್ತಿರುವ ಮಕ್ಕಳು ಮತ್ತು ಶಾಲೆಗೆ ಬರದೇ ಇರುವ ಮಕ್ಕಳ ಬಗ್ಗೆ ಗಮನ ಹರಿಸಬೇಕು. ಶಾಲೆಗೆ ಬರದೇ ಇರುವ ಮಕ್ಕಳು ಕಂಡು ಬಂದಾಗ ಆ ವಿದ್ಯಾರ್ಥಿ ಶಾಲೆಗೆ ಬರದೇ ಇರಲು ಕಾರಣ ತಿಳಿದು ಅದನ್ನು ಪರಿಹರಿಸಬೇಕು. ಶಾಲೆಗಳಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಅನ್ನು ಕಾಡ್ಡಾಯವಾಗಿ ಪ್ರದರ್ಶಿಸಬೇಕು ಜತೆಗೆ ದೂರು ಪೆಟ್ಟಿಗೆಯನ್ನು ಇರಿಸಲು ಕ್ರಮಕೈಗೊಳ್ಳಬೇಕು ಎಂದು ನಾಗಣ್ಣಗೌಡ ಹೇಳಿದರು. ಬಾಲ್ಯ ವಿವಾಹ, ಭಿಕ್ಷಾಟನೆ, ಮಕ್ಕಳ ಮಾರಾಟ, ಲೈಂಗಿಕ ದೌರ್ಜನ್ಯ, ಬಾಲ ಕಾರ್ಮಿಕ ಪದ್ಧತಿ ಕಂಡು ಬಂದಲ್ಲಿ ಸಾರ್ವಜನಿಕರು ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ ಪೊಲೀಸ್‌ಸಹಾಯವಾಣಿ ಸಂಖ್ಯೆ 112 ಗೆ ಉಚಿತ ಕರೆ ಮಾಡಿ ದೂರು ನೀಡಬಹುದಾಗಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸುವುದರಿಂದ ದೇಶದ ಅಭಿವೃದ್ಧಿಗೆ ಪೂರಕ. ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಹೊಸ ಹೊಸ ಕಾನೂನುಗಳು ಬರುತ್ತದೆ, ಕಾನೂನುಗಳು ತಿದ್ದುಪಡಿ ಆಗುತ್ತದೆ. ಆ ಕಾನೂನುಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಲು ಕಾಲಕಾಲಕ್ಕೆ ಕಾರ್ಯಾಗಾರಗಳನ್ನು ಏರ್ಪಡಿಸಲಾಗುತ್ತದೆ ಎಂದು ಅವರು ಹೇಳಿದರು.

ಶಾಲೆಗಳಲ್ಲಿ ಪ್ರಚಾರ: ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಅಲ್ಲದೆ ಎಲ್ಲಿಯಾದರೂ ಮಕ್ಕಳ ಹಕ್ಕುಗಳ ಉಲ್ಲಂಘನೆ ದೌರ್ಜನ್ಯ ಮತ್ತಿತರ ಪ್ರಕರಣಗಳು ಕಂಡುಬಂದರೆ ಕೂಡಲೇ ಸಹಾಯವಾಣಿಗೆ ಕರೆ ಮಾಡುವಂತೆ ಅರಿವು ಮೂಡಿಸಲಾಗುತ್ತಿದೆ ಇದಕ್ಕೆ ಸಂಬಂಧಪಟ್ಟಂತೆ ಸಹಾಯವಾಣಿ ಸಂಖ್ಯೆಗಳನ್ನು ಅಳವಡಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net