ಕೋವಿಡ್ ಮಾರ್ಗಸೂಚಿ ಉಲ್ಲಂಘನೆ; ರಾಜಕೀಯ ಪಕ್ಷಗಳಿಗೆ ಹೈಕೋರ್ಟ್ ನೋಟಿಸ್

Dharwad HighCourt
Published on

ಬೆಂಗಳೂರು: ಗಣ್ಯ ವ್ಯಕ್ತಿಗಳಿಂದ ಕೋವಿಡ್ ಮಾರ್ಗಸೂಚಿಗಳ ಉಲ್ಲಂಘನೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ, ಕಾಂಗ್ರೆಸ್ ಸೇರಿ ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ರಾಜ್ಯದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ್ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.

ನ್ಯಾಯಾಲಯ ಕಳೆದ ವಿಚಾರಣೆ ವೇಳೆ ನೀಡಿದ್ದ ನಿರ್ದೇಶನದಂತೆ ಅರ್ಜಿದಾರರ ಪರ ವಕೀಲರು ರಾಜ್ಯದಲ್ಲಿ ಮಾನ್ಯತೆ ಹೊಂದಿದ ರಾಜಕೀಯ ಪಕ್ಷಗಳ ಪಟ್ಟಿಯನ್ನು ನ್ಯಾಯಪೀಠಕ್ಕೆ ಒದಗಿಸಿದರು. ಅದನ್ನು ದಾಖಲಿಸಿಕೊಂಡ ಪೀಠ, ಪಿಐಎಲ್‌ನಲ್ಲಿ ರಾಜಕೀಯ ಪಕ್ಷಗಳನ್ನೂ ಪ್ರತಿವಾದಿಗಳಾಗಿ ಸೇರಿಸಿ ತಿದ್ದುಪಡಿ ಮಾಡಲು ಅರ್ಜಿದಾರರಿಗೆ 1 ವಾರ ಕಾಲಾವಕಾಶ ನೀಡಿತು. ಜತೆಗೆ, ಕಾಂಗ್ರೆಸ್, ಬಿಜೆಪಿ, ಜೆಡಿ(ಎಸ್), ಸಿಪಿಐ(ಎಮ್) ಹಾಗೂ ಕನ್ನಡ ಚಳವಳಿ ವಾಟಾಳ್ ಪಕ್ಷಗಳಿಗೆ ನೋಟಿಸ್ ಜಾರಿಗೊಳಿಸಿತು.

ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವುದು ರಾಜಕೀಯ ಪಕ್ಷಗಳ ಜವಾಬ್ದಾರಿ. ಆದ್ದರಿಂದ, ನಿಯಮ ಪಾಲನೆ ವಿಚಾರದಲ್ಲಿ ಪಕ್ಷಗಳು ಸರ್ಕಾರಕ್ಕೆ ಸಹಕಾರ ನೀಡಬೇಕು. ಪಕ್ಷದ ಬೆಂಬಲಿಗರು ಹಾಗೂ ಕಾರ್ಯಕರ್ತರು ನಿಯಮಗಳನ್ನು ಉಲ್ಲಂಘಿಸದಂತೆ ಸೂಚಿಸಬೇಕು. ಈ ಕುರಿತು ಎಲ್ಲ ರಾಜಕೀಯ ಪಕ್ಷಗಳು ಲಿಖಿತವಾಗಿ ತಮ್ಮ ಸ್ಪಷ್ಟನೆ ಸಲ್ಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಡಿ. 2ಕ್ಕೆ ಮುಂದೂಡಿತು.

ಮುಂದಿನ ವಿಚಾರಣೆ ವೇಳೆ, ಕೋವಿಡ್ ನಿಯಮಗಳ ಜಾರಿಗೆ ಕೈಗೊಂಡಿರುವ ಕ್ರಮಗಳು ಹಾಗೂ ಈವರೆಗೆ ವಿಧಿಸಿರುವ ದಂಡದ ವಿವರಗಳನ್ನು ಸಲ್ಲಿಸುವಂತೆಯೂ ಸರ್ಕಾರಕ್ಕೆ ಕೋರ್ಟ್ ನಿರ್ದೇಶಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net