ಮೈಸೂರಿನಲ್ಲಿ ಡಿ.29 ರಂದು ವಿಶ್ವಮಾನ ದಿನ

Kuvempu
Published on

ಮೈಸೂರು: ಜಿಲ್ಲಾಮಟ್ಟದ ವಿಶ್ವ ಮಾನವ ದಿನ ಹಾಗೂ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಆರ್.ಲೋಕನಾಥ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆ ಮತ್ತು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಲಾಮಂದಿರದಲ್ಲಿ ಡಿ.29 ರಂದು ಬೆಳಗ್ಗೆ 11.30ಕ್ಕೆ ವಿಶ್ವಮಾನವ ದಿನಾಚರಣೆ ಆಚರಿಸಲಾಗು ವುದು. 2024ರ ಜನವರಿ 1 ರಂದು ಬೆಳಗ್ಗೆ 11:30ಕ್ಕೆ ಕಲಾಮಂದಿರದ ಆವರಣದ ಕಿರುರಂಗ ಮಂದಿರದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲಾಡಳಿತದ ಶಿಷ್ಟಾಚಾರದಂತೆ ಕಾರ್ಯಕ್ರಮ ಆಯೋಜಿಸಲಾಗುವುದು. ಜಯಂತಿ ಕಾರ್ಯಕ್ರಮ ನಡೆಯುವ ಸ್ಥಳದ ಸ್ವಚ್ಛತೆ, ತಳಿರು ತೋರಣ, ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರ ಪಾಲಿಕೆಯಿಂದ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಅಮರಶಿಲ್ಪಿ ಜಕಣಾಚಾರಿ ಹೆಸರಿನಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ಸಾಧಕರಿಗೆ ನೀಡಬೇಕು ಎಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಸಮಿತಿಯವರು ಮನವಿ ಮಾಡಿದರು. ಈ ಕುರಿತು ಪ್ರತಿಕ್ರಿಯಿಸಿದ ಎಡಿಸಿ ಆರ್. ಲೋಕನಾಥ್, ಈ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ನಗರ ಪಾಲಿಕೆ ಉಪಆಯುಕ್ತ ಜಿ.ಎಸ್. ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜೆ. ಗೋವಿಂದರಾಜು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಮಡ್ಡೀಕೆರೆ ಗೋಪಾಲ್, ಕನ್ನಡಪರ ಹೋರಾಟಗಾರರಾದ ತಾಯೂರು ವಿಠಲಮೂರ್ತಿ, ಮೋಹನ್ ಕುಮಾರ್ ಗೌಡ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net