

ಮಡಿಕೇರಿ: ಕೊಡಗು ವಿಶ್ವ ವಿದ್ಯಾನಿಲಯವು ಅಧ್ಯಾಪಕರ ಅಭಿವೃದ್ಧಿಯ ಮಹತ್ವವನ್ನು ಅರ್ಥಮಾಡಿಕೊಂಡು ಅಧ್ಯಾಪಕರಲ್ಲಿ ಕೌಶಲ್ಯ ಅಭಿವೃದ್ಧಿ, ಜ್ಞಾನ ಮತ್ತು ಬೋಧನಾ ವಿಧಾನಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಕೊಡಗು ವಿಶ್ವ ವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಡಾ.ಸೀನಪ್ಪ ತಿಳಿಸಿದರು.
ಕರ್ನಾಟಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರಿನ ಫೋರ್ಕ್ ಟೆಕ್ನಾಲಜಿಸ್ ಹಾಗೂ ಕೊಡಗು ವಿಶ್ವ ವಿದ್ಯಾನಿಲಯದ ಸಂಯುಕ್ತಾಶ್ರಯದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ಎರಡು ವಾರಗಳ ಕಾಲ ವಿವಿಧ ಕಾಲೇಜುಗಳ ಅಧ್ಯಾಪಕರಿಗೆ ನಡೆಯುವ ಅಧ್ಯಾಪಕರ ಅಭಿವೃದ್ಧಿ ಕಾರ್ಯಾಗಾರವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.
ನೂತನವಾಗಿ ಆರಂಭವಾಗಿರುವ ಕೊಡಗು ವಿಶ್ವವಿದ್ಯಾನಿಲಯ ಶೈಕ್ಷಣಿಕ ಪ್ರಗತಿಯಲ್ಲಿ ಪ್ರಮುಖ ಮೈಲಿಗಲ್ಲನ್ನು ಹೊಂದಿದೆ. ವಿದ್ಯಾರ್ಥಿಗಳ ಮನಸ್ಸು ಮತ್ತು ಸಮಾಜದ ಭವಿಷ್ಯವನ್ನು ರೂಪಿಸುವ ಸಲುವಾಗಿ ಬೋಧನಾ ವಿಭಾಗದ ಸದಸ್ಯರ ಕೌಶಲ್ಯ ಮತ್ತು ಸಾಮರ್ಥ್ಯಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಆರಂಭಿಕ ಹಂತವಾಗಿ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಇಂದಿನ ವೇಗದ ಮತ್ತು ನಿರಂತರವಾಗಿ ವಿಕಸನಗೊಳ್ಳುತ್ತಿರುವ ಜಗತ್ತಿನಲ್ಲಿ, ಅಧ್ಯಾಪಕರು ನವೀಕೃತವಾಗಿರುವುದು ಬಹಳ ಮುಖ್ಯ. ಶಿಕ್ಷಣ ಕ್ಷೇತ್ರದಲ್ಲಿ ಆಧುನಿಕ ಯುಗದ ಸವಾಲುಗಳನ್ನು ಎದುರಿಸುವ ಸಲುವಾಗಿ ಅಧ್ಯಾಪಕರುಗಳಿಗೆ ನವೀನ ಬೋಧನಾ ವಿಧಾನಗಳು, ಪರಿಣಾಮಕಾರಿ ತರಗತಿ ನಿರ್ವಹಣೆ, ಸಂಶೋಧನಾ ವಿಧಾನಗಳು, ಸುಧಾರಿತ ಶಿಕ್ಷಣ ವಿಧಾನಗಳು ಮತ್ತು ಶಿಕ್ಷಣದಲ್ಲಿ ತಂತ್ರಜ್ಞಾನದ ಏಕೀಕರಣ, ಬೋಧನಾ ಕೌಶಲ್ಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ ಜಿಲ್ಲೆಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡುವ ಸಲುವಾಗಿ ಅಧ್ಯಾಪಕರಿಗೆ ವಿವಿಧ ತರಬೇತಿಗಳನ್ನು ನೀಡಲಾಗುತ್ತಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ.ಬಿ.ರಾಘವ, ಕೊಡಗು ವಿಶ್ವವಿದ್ಯಾನಿಲಯ ದೂರ ದೃಷ್ಟಿಯನ್ನು ಇಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿದೆ. ವಿಶ್ವ ವಿದ್ಯಾನಿಲಯ ಒಳಗೊಂಡಿರುವ ೨೨ ಕಾಲೇಜುಗಳ ಅಧ್ಯಾಪಕರಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಂಡು ಕ್ರಾಂತಿಕಾರಿ ಬದಲಾವಣೆ ಮಾಡುತ್ತಿದೆ. ಬೋಧಕ ವರ್ಗ ಇಂದಿನ ತಾಂತ್ರಿಕತೆಗೆ ಹೊಂದಿಕೊಂಡು ವಿದ್ಯಾರ್ಥಿಗಳಲ್ಲಿ ಬದಲಾವಣೆ ತರಲು ಈ ತರಬೇತಿ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದರು.
ಕೊಡಗು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿಲ್ಲ ಎಂಬ ಉದ್ದೇಶದಿಂದ ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳಿಗೆ ತೆರಳುತ್ತಿದ್ದು, ಈ ಮನೋಭಾವನೆಯನ್ನು ದೂರ ಮಾಡುವ ಕೆಲಸವಾಗಬೇಕು. ಜಿಲ್ಲೆಯಲ್ಲಿ ಸಮರ್ಥ ಶಿಕ್ಷಕರಿದ್ದು, ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮತ್ತು ಉತ್ತಮ ಅಂಕ ದೊರೆಯುತ್ತಿದೆ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದ ಬೆಂಗಳೂರಿನ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ತರಬೇತುದಾರ ಅವಿನಾಶ್, ನವೀನ ತಂತ್ರಜ್ಞಾನವನ್ನು ಅವಳಡಿಸಿಕೊಂಡು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಕುರಿತು ಕಾರ್ಯಾಗಾರದಲ್ಲಿ ಅಧ್ಯಾಪಕರಿಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ಕಾರ್ಯಪ್ಪ ಕಾಲೇಜಿನ ಪ್ರೊ.ಈ.ತಿಪ್ಪೇಸ್ವಾಮಿ, ಪ್ರೊ.ಗಾಯತ್ರಿದೇವಿ, ಪ್ರೊ.ಕೃಷ್ಣ, ಎಂ.ಎ.ಕೊಡವ ವಿಭಾಗದ ಸಂಯೋಜಕ ರವಿಶಂಕರ್ ನಾಣಯ್ಯ, ಆಂಗ್ಲ ವಿಭಾಗದ ಸಂಯೋಜಕ ಪ್ರೊ.ಪೂಣಚ್ಚ ಹಾಗೂ ವಿವಿಧ ಕಾಲೇಜುಗಳ ಅಧ್ಯಾಪಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.