ಅಯೋಧ್ಯೆಗೆ ಜ.22ರ ನಂತರ ಭೇಟಿ ನೀಡಿ ಶ್ರೀರಾಮನಿಗೆ ಪೂಜೆ: ಸಿಎಂ

cm siddaramaiah
ಮುಖ್ಯಮಂತ್ರಿ ಸಿದ್ದರಾಮಯ್ಯ
Published on

ಶಿವಮೊಗ್ಗ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಲೋಕಾರ್ಪಣೆಗೆ ನಮಗೆ ಆಹ್ವಾನ ಬಂದಿಲ್ಲ. ಆದರೂ ನಾವು ಶ್ರೀರಾಮನನ್ನು ಪೂಜಿಸುತ್ತೇವೆ. ಜ.22ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಶ್ರೀರಾಮನಿಗೆ ಪೂಜೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಿಸಿ ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದಾರೆ. ದೇವರನ್ನು ರಾಜಕೀಯವಾಗಿ ಬಿಜೆಪಿ ಬಳಸಿಕೊಳ್ಳುವುದನ್ನು ನಾವು ವಿರೋಧಿಸುತ್ತೇವೆಯೇ ಹೊರತು ಶ್ರೀ ರಾಮಚಂದ್ರನನ್ನು ವಿರೋಧಿಸುವುದಿಲ್ಲ ಎಂದರು.
ನಮ್ಮ ಕಾರ್ಯಕರ್ತರು ಕೂಡ ಶ್ರೀರಾಮಮಂದಿರಕ್ಕೆ ಹೋಗಿ ಪೂಜೆ ಮಾಡುತ್ತಾರೆ. ದೇವರ ಹೆಸರು, ಮಂದಿರ ಬಳಸಿಕೊಂಡು ಬಿಜೆಪಿ ಮಾಡುತ್ತಿರುವ ರಾಜಕೀಯವನ್ನು ನಾವು ವಿರೋಧಿಸುತ್ತೇವೆ ಎಂದು ಕಿಡಿಕಾರಿದರು.
ಗ್ಯಾರಂಟಿ ಯೋಜನೆಗಳ ಬಗ್ಗೆ ಯಾರದ್ದೋ ದುಡ್ಡು, ಯಲ್ಲಮ್ಮನ ಜಾತ್ರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಅಂದರೆ ಸುಳ್ಳು, ಸುಳ್ಳು ಎಂದರೆ ಕುಮಾರಸ್ವಾಮಿ. ಅವರ ಟೀಕೆಗೆ ನಾನು ಉತ್ತರಿಸುವುದಿಲ್ಲ ಎಂದರು. ಇದೇ ವೇಳೆ ರಾಜ್ಯದಲ್ಲಿ ಮೂವರು ಡಿಸಿಎಂ ಸ್ಥಾನದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net