ಸಾಹಿತ್ಯ, ಸಂಸ್ಕೃತಿ ಬೆಳೆಸುವಲ್ಲಿ ವಿಶ್ವೇಶ್ವರಯ್ಯ ಪಾತ್ರ ಹೆಚ್ಚು

vishveshwaraiah
Published on

ಮಡಿಕೇರಿ: ಕನ್ನಡ ನಾಡಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ಪ್ರಮುಖರಾದ ಸರ್.ಎಂ.ವಿಶ್ವೇಶ್ವರಯ್ಯ ರವರು ಸಾಹಿತ್ಯ ಸಂಸ್ಕೃತಿಯನ್ನು ಬೆಳೆಸುವಲ್ಲಿ ದಾರ್ಶನಿಕರಾಗಿ ದುಡಿದವರು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಹೇಳಿದರು.


ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪಕರಲ್ಲಿ ಒಬ್ಬರಾದ ಸರ್.ಎಂ.ವಿಶ್ವೇಶ್ವರಯ್ಯ ಅವರ ೧೬೪ನೇ ಜನ್ಮದಿನಾಚರಣೆಯ ಕುರಿತು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.


ವಿಶ್ವೇಶ್ವರಯ್ಯ ರವರ ಜನ್ಮದಿನವನ್ನು ಇಂಜಿನಿಯರ್ಸ್ ಡೇ- ಅಭಿಯಂತರರ ದಿನವನ್ನಾಗಿ ಕರ್ನಾಟಕ ಸರ್ಕಾರ ಆಚರಿಸುತ್ತಿದೆ. ಭಾರತದ ಪ್ರತಿಭಾವಂತ ಇಂಜಿನಿಯರ್ ಆಗಿದ್ದ ವಿಶ್ವೇಶ್ವರಯ್ಯ ಅವರು ಬ್ರಿಟಿಷ್ ಸರ್ಕಾರದಲ್ಲೂ ಕಾರ್ಯನಿರ್ವಹಿಸಿದ್ದರು. ಅಂತಹ ದಾರ್ಶನಿಕರು ಹಾಕಿಕೊಟ್ಟ ಹಾದಿಯಲ್ಲಿ ಕನ್ನಡನಾಡನ್ನು ಪ್ರಬಲವಾಗಿ ಕಟ್ಟಲು ನಾವು ಮುಂದಾಗಬೇಕು ಎಂದು ಟಿ.ಪಿ.ರಮೇಶ್ ನುಡಿದರು.


ಕೊಡಗು ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಬಿ.ಜಿ.ಅನಂತಶಯನ ಮಾತನಾಡಿ, ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ ಸರ್.ಎಂ.ವಿಶ್ವೇಶ್ವರಯ್ಯನವರು ವಿದ್ಯಾರ್ಥಿ ಮತ್ತು ಯುವಜನರಲ್ಲಿ ಶಿಕ್ಷಣದ ಮಹತ್ವದ ಬಗ್ಗೆ ತಿಳುವಳಿಕೆ ನೀಡಿ ಭವಿಷ್ಯ ರೂಪಿಸಿಕೊಳ್ಳಲು ಮಾರ್ಗದರ್ಶನ ಮಾಡಿದವರು ಎಂದರು.


ಭಾರತ ಸ್ಕೌಟ್ ಮತ್ತು ಗೈಡ್ ಸಂಸ್ಥೆಯ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ, ಸಿರಿಗಂಧ ವೇದಿಕೆಯ ಅಧ್ಯಕ್ಷ ಅಲ್ಲಾರಂಡ ವಿಠಲ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧಿಕಾರಿ ಎಸ್.ಎಸ್ ಸಂಪತ್ ಕುಮಾರ್ ವಿಶ್ವೇಶ್ವರಯ್ಯ ಕುರಿತು ಮಾತನಾಡಿದರು.


ಮುರ್ನಾಡು ಹೋಬಳಿ ಕ.ಸಾ.ಪ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್, ಜಿಲ್ಲಾ ಕ.ಸಾ.ಪ ಮಾಜಿ ಗೌರವ ಕೋಶಾಧಿಕಾರಿ ಬಿ.ಎಂ.ವಾಸು ರೈ ಉಪಸ್ಥಿತರಿದ್ದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮದ್ ಸ್ವಾಗತಿಸಿದರೆ, ಜಿಲ್ಲಾ ಕ.ಸಾ.ಪ ಗೌರವ ಕಾರ್ಯದರ್ಶಿ ರೇವತಿ ರಮೇಶ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net