ವಿವೇಕಾನಂದರ ಚಿಂತನೆ ದೇಶದ ಅಧ್ಯಯನಕ್ಕೆ ಸಮ

12adarshkdga2
Published on

ಮಡಕೇರಿ: ಭಾರತವನ್ನು ಅಧ್ಯಯನ ಮಾಡಬೇಕೆಂದರೆ, ದೇಶ ಸುತ್ತುವ ಅಗತ್ಯವಿಲ್ಲ. ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಅಧ್ಯಯನ ಮಾಡಿದರೆ ಸಾಕು ಎಂದು ಬೆಂಗಳೂರಿನ ರಾಮಕೃಷ್ಣ ಮಠದ ಸ್ವಾಮೀಜಿ ಮೇದಾನಂದರು ಹೇಳಿದರು.

ಜಿಲ್ಲಾಡಳಿತ ಮತ್ತು ಜಿಪಂ, ಕಾಲೇಜು ಶಿಕ್ಷಣ ಇಲಾಖೆ, ನೆಹರು ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ, ಹಾಕತ್ತೂರಿನ ತ್ರಿನೇತ್ರ ಯುವಕ ಸಂಘಗಳ ಸಂಯುಕ್ತಾಶ್ರಯದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಸ್ವಾಮಿ ವಿವೇಕಾನಂದರ 157 ನೇ ಜನ್ಮ ದಿನಾಚರಣೆಯ ‘ರಾಷ್ಟ್ರೀಯ ಯುವ ದಿನಾಚರಣೆ’ ಪ್ರಯುಕ್ತ ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಕ್ತಿಯೇ ಜೀವನ, ದೌರ್ಬಲ್ಯವೇ ಮರಣ ಎಂಬುದನ್ನು ಸಿಂಹ ಮತ್ತು ಕುರಿಯ ಕಥೆಯೊಂದಿಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದ ಅವರು, ಜೀವನದಲ್ಲಿ ಹೋರಾಟವನ್ನು ಎಂದೂ ಬಿಡಬೇಡಿ. ಹೋರಾಟದ ಮನೋಭಾವನೆಯಿಂದ ಅನೇಕ ಲಾಭಗಳನ್ನು ನೀವು ಪಡೆಯಬಹುದು ಎಂದು ನುಡಿದರು.

ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಜವರಪ್ಪ ಮಾತನಾಡಿ, ಸ್ವಾಮಿ ವಿವೇಕಾನಂದರು ಬಹು ಭಾಷೆಗಳಲ್ಲಿ ಮಾತನಾಡಬಲ್ಲವರಾಗಿದ್ದರು. ಯುವ ಜನರೂ ಸಹ ಹೆಚ್ಚು ಭಾಷೆಗಳನ್ನು ಕಲಿಯಿರಿ ಎಂದರು.

ಈ ಸಂದರ್ಭದಲ್ಲಿ ಮಡಿಕೇರಿ ಶಾಸಕರು ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಿದರು. ನಂತರ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ವೈ.ಚಿತ್ರಾ, ತಹಸೀಲ್ದಾರ್ ಪಿ.ಎಸ್.ಮಹೇಶ್, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಸುಕುಮಾರ್ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net