ಹುಬ್ಬಳ್ಳಿ: ಧಾರವಾಡ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಉಣಕಲ್ಲನ ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಐ.ಜಿ. ಹಿರೇಗೌಡರ ಪದವಿ ಪೂರ್ವ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯನ್ನು ಸೆಪ್ಟೆಂಬರ್ 20ರಂದು ಆಯೋಜಿಸಲಾಗಿದೆ.
ಉಣಕಲ್ಲ ಟೀಚರ್ಸ್ ಕಾಲನಿಯಲ್ಲಿರುವ ಶ್ರೀತರಳಬಾಳು ಕ್ಯಾಂಪಸ್ ನಲ್ಲಿ ಪಂದ್ಯಾವಳಿಗಳು ನಡೆಯಲಿವೆ. ವಾಲಿಬಾಲ್ ಪಂದ್ಯಾವಳಿಯಲ್ಲಿ ಧಾರವಾಡ ಶಹರ ಮತ್ತು ಗ್ರಾಮೀಣ, ಹುಬ್ಬಳ್ಳಿ ಶಹರ ಮತ್ತು ಗ್ರಾಮೀಣ, ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ತಾಲೂಕು ಮಟ್ಟದ ಪಂದ್ಯಾವಳಿಯಲ್ಲಿ ವಿಜೇತ ಬಾಲಕ ಹಾಗೂ ಬಾಲಕಿಯರ ತಂಡಗಳು ಭಾಗವಹಿಸಲಿವೆ.
ಅಂದು ಬೆಳಗ್ಗೆ 8ಕ್ಕೆ ನಡೆಯುವ ಸಮಾರಂಭದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಡಾ. ತೇಜಶ್ವಿನಿ ನಾರಾಯಣಕರ ಪಂದ್ಯಾವಳಿಗೆ ಚಾಲನೆ ನೀಡುವರು. ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಾಲೇಜಿನ ಸಲಹಾ ಸಮಿತಿ ಅಧ್ಯಕ್ಷ ಶಿವಾನಂದ ಹೆಬಸೂರ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಸಂಜೆ 4ಕ್ಕೆ ನಡೆಯುವ ಸಮಾರೋಪದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ವಿಜೇತರಿಗೆ ಬಹುಮಾನ ವಿತರಣೆ ಮಾಡುವರು.