

ಶಿವಮೊಗ್ಗ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮತದಾರ ಚೇತನ ಮಹಾಭಿಯಾನ ಆರಂಭವಾಗಿದ್ದು, ಸೆ.10ಕ್ಕೆ ಮುಕ್ತಾಯವಾಗಲಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.
ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಚುನಾವಣಾ ಆಯೋಗ ನಡೆಸುತ್ತದೆ. ಇದಕ್ಕೆ ಪೂರಕವಾಗಿ ಬಿಜೆಪಿ ಕಾರ್ಯಕರ್ತರು ಪ್ರತಿ ಮನೆಗಳಿಗೆ ತೆರಳಿ ಹೊಸ ಮತದಾರರ ಸೇರ್ಪಡೆ, ಹೆಸರು, ವಿಳಾಸ ತಿದ್ದುಪಡಿ ಮುಂತಾದ ಕಾರ್ಯಗಳನ್ನು ಕೈಗೊಂಡು ಅದರ ವಿವರಗಳನ್ನು ಪಕ್ಷದ ಕಚೇರಿಗೆ ನೀಡುವುದು ಮಹಾಭಿಯಾನದ ಉದ್ದೇಶವಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಿಲ್ಲಾ ಕೇಂದ್ರದಲ್ಲಿ ಮೂವರು ಪ್ರಮುಖರ ಸಮಿತಿ, ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಮೂವರ ಸಮಿತಿ ರಚನೆ ಮಾಡಲಾಗಿದೆ. ಶಕ್ತಿ ಕೇಂದ್ರಗಳಲ್ಲೂ ಇದರ ಉಸ್ತುವಾರಿ ನೋಡಿಕೊಳ್ಳಲಾಗಿದೆ. ಆ.25ಕ್ಕೆ ಇವರವಿವರಗಳನ್ನು ಕಳುಹಿಸುವಂತೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚಿಸಿದ್ದರು. ಅದರಂತೆಯೇ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮಾಹಿತಿಗಳನ್ನು ಕಳುಹಿಸಲಾಗಿದೆ ಎಂದರು.
ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲಿ ದೇಶದ ಜನರು ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿ ಅಧಿಕಾರ ಒದಗಿಸಿದ್ದರು. ಈ ಬಾರಿಯೂ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆಡಳಿತಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲೂ ಜನರು ಬಿಜೆಪಿಯನ್ನು ಆಶೀರ್ವದಿಸುವ ವಿಶ್ವಾಸವಿದೆ ಎಂದು ಹೇಳಿದರು.
10 ವರ್ಷಗಳಲ್ಲಿ ದೇಶ ಅನೇಕ ಸಾಧನೆಗಳನ್ನು ಮಾಡಿದೆ. ಇದರ ಹಿಂದೆ ಸ್ಥಿರ ಆಡಳಿತ ಹಾಗೂ ನರೇಂದ್ರ ಮೋದಿ ಅವರ ದೂರದೃಷ್ಟಿಯಿದೆ. ಇತಿಹಾಸ ಸೃಷ್ಟಿಸಿದ ಅನೇಕ ಕಾರ್ಯಗಳು ಈ ಅವಧಿಯಲ್ಲಿ ನಡೆದಿವೆ. ಮುಂದೆಯೂ ಬಿಜೆಪಿ ಅಧಿಕಾರಕ್ಕೆ ಬಂದು ದೇಶವನ್ನು ಇನ್ನಷ್ಟು ಸದೃಢಗೊಳಿಸಲಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ.ಶ್ರೀನಾಥ್, ಶಿವರಾಜ್, ಪಾಲಿಕೆ ಸದಸ್ಯ ಎಸ್.ಜ್ಞಾನೇಶ್ವರ್, ಪ್ರಮುಖರಾದ ಕೆ.ವಿ.ಅಣ್ಣಪ್ಪ, ಹೃಷಿಕೇಶ್ ಪೈ, ಚಂದ್ರಶೇಖರ್ ಮುಂತಾದವರು ಸುದ್ದಿಗೋಷ್ಠಿಯಲ್ಲಿದ್ದರು.