

ಉಡುಪಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳ ಆಯ್ಕೆ ಅಧಿಕಾರ ಮತದಾರರದ್ದು, ಮತದಾರರು ವಿವೇಚನೆಯಿಂದ ಯಾವುದೇ ಆಮೀಷಗಳಿಗೆ ಒಳಗಾಗದೇ ಮತ ಚಲಾಯಿಸಬೇಕು. ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದರೊಂದಿಗೆ ಸ್ವಸ್ಥ ಸಮಾಜ ನಿಮಾರ್ಣ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದರು.
ಗುರುವಾರ ಅಜ್ಜರಕಾಡು ಪುರಭವನದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಸಂವಿಧಾನದಲ್ಲಿ ಹದಿನೆಂಟು ವರ್ಷ ತುಂಬಿದ ಪ್ರತಿಯೊಬ್ಬ ಭಾರತೀಯ ನಾಗರಿಕರಿಗೆ ಮತದಾನ ಮಾಡಲು ಅವಕಾಶ ನೀಡಲಾಗಿದೆ. ಉತ್ತಮ ಅಭ್ಯರ್ಥಿಗಳಿಗೆ ಮತ ಹಾಕುವುದರೊಂದಿಗೆ ತಮ್ಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಆಗ ಮಾತ್ರ ಉತ್ತಮ ಸಮಾಜ ನಿಮಾರ್ಣ ಮಾಡಲು ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ಚುನಾವಣೆ ಪ್ರಜಾಪ್ರಭುತ್ವದ ಹಬ್ಬ. ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿ ತಳವೂರಲು ಚುನಾವಣೆ ಅತ್ಯಗತ್ಯ. ಪಾರದರ್ಶಕ ಆಡಳಿತ ನಡೆಸುವ ಸರ್ಕಾರ ರಚಿಸುವ ಜವಾಬ್ದಾರಿ ಮತದಾರರದ್ದಾಗಿದೆ. 2008ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶೇ. 55ರಷ್ಟು ಮತದಾನವಾಗಿತ್ತು. ಶೇ.45ರಷ್ಟು ಮಂದಿ ಹೊರಗುಳಿದರೆ ಆಯ್ಕೆ ಸಮರ್ಪಕವಾಗಿದೆ ಎಂಬುದನ್ನು ನಿರ್ಧರಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಯುವ ಮತದಾರರು ಸೋಮಾರಿ ಮನೋಭಾವ ಬಿಟ್ಟು ಮತದಾನ ಮಾಡಬೇಕು ಎಂದರು.
ಶೇ.100 ಮತದಾನ ವಾಗ್ಧಾನ
ಜಿಲ್ಲೆಯ ಅರ್ಹ ಪ್ರತಿಯೊಬ್ಬ ನಾಗರಿಕರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ, ಪ್ರತಿಶತ@ ನೂರರಷ್ಟು ಮತದಾನ; ಉಡುಪಿ ಜಿಲ್ಲೆಯ ವಾಗ್ದಾನ ಎಂಬ ಘೋಷವಾಕ್ಯವನ್ನು ಜಾರಿಗೊಳಿಸಿದರು. ಕ್ವಿಜ್ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಆಲೂರು ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಹಾಗೂ ಬೆಸ್ಟ್ ನ್ಯಾಷನಲ್ ಲೆವೆಲ್ ಮಾಸ್ಟರ್ ಟೆನರ್ ಪ್ರಶಸ್ತಿ ಪಡೆದ ಡಯಟ್ನ ಪ್ರಾಂಶುಪಾಲ ಅಶೋಕ್ ಕಾಮತ್ ಅವರಿಗೆ ಅಭಿನಂದನೆ ಸಲ್ಲಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಮಾತನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಮತದಾರರ ದಿನಾಚರಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.
ಇದೇ ಸಂದರ್ಭದಲ್ಲಿ ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಗೊಂಡ ಯುವ ಮತದಾರರಿಗೆ ಮತದಾರರ ಗುರುತಿನ ಚೀಟಿಯನ್ನು ಸಾಂಕೇತಿಕವಾಗಿ ವಿತರಿಸಲಾಯಿತು. ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಎಎಸ್ಪಿ ಸಿದ್ಧಲಿಂಗಪ್ಪ, ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಜಿಲ್ಲಾ ವತಿಯಿಂದ ನೇಮಿಸಲಾದ ರಾಯಭಾರಿಗಳಾದ ರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಶೆಟ್ಟಿ, ಕಲಾವಿದೆ ಮಾನಸಿ ಸುಧೀರ್, ರಂಗಭೂಮಿ ನಟಿ ಆರ್.ಜೆ ಕಾಜಲ್, ಕ್ರಿಕೇಟ್ ಆಟಗಾರ ಪೃಥ್ವಿರಾಜ್ ಶೆಟ್ಟಿ ಹುಂಚಣಿ ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಸ್ವಾಗತಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿದರು.