

ಬೆಂಗಳೂರು: ಮಹಾನಗರದಲ್ಲಿರುವ ಎಲ್ಲ ಐಟಿ-ಬಿಟಿ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಮತದಾನದ ದಿನ ರಜೆ ನೀಡಿ ಎಲ್ಲರಿಂದಲೂ ಕಡ್ಡಾಯ ಮತದಾನ ಮಾಡಿಸಲು ಟೆಕ್ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.
ನಗರದ ಎಂ.ಎಸ್ ಬಿಲ್ಡಿಂಗ್‌ನ ಸಮ್ಮೇಳನ ಸಭಾಂಗಣದಲ್ಲಿ ಐಟಿ-ಬಿಟಿ ಇಲಾಖೆ ಸಹಯೋಗದಲ್ಲಿ ಟೆಕ್ ಕಂಪನಿಗಳ ಮುಖ್ಯಸ್ಥರೊಂದಿಗೆ ಮಂಗಳವಾರ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಎಲ್ಲ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ವೇತನ ಸಹಿತ ರಜೆ ನೀಡಲು ಈಗಾಗಲೇ ಸರ್ಕಾರ ಆದೇಶ ಹೊರಡಿಸಿದೆ. ಆ ಬಗ್ಗೆ ಎಲ್ಲರಿಗೂ ಮಾಹಿತಿ ನೀಡಲಾಗಿದ್ದು, ಅದಕ್ಕೆ ಎಲ್ಲ ಸಂಸ್ಥೆಗಳು ಒಪ್ಪಿಕೊಂಡಿದ್ದಾರೆ. ಅಲ್ಲದೆ ಆಯಾ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ತಪ್ಪದೆ ಮತ ಚಲಾಯಿಸಲು ಅರಿವು ಮೂಡಿಸುವ ಕೆಲಸ ಮಾಡಲು ತಿಳಿಸಲಾಗಿದೆ. ನಗರದಲ್ಲಿ ಐಟಿ-ಬಿಟಿ ಹಬ್ ಇದ್ದು, ಲಕ್ಷಾಂತರ ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೆಚ್ಚು ಕಂಪನಿಗಳಿರುವ ಕಡೆ ಹಾಗೂ ಕಡಿಮೆ ಮತದಾನವಾಗಿರುವ ಸಂಸ್ಥೆಗಳಲ್ಲಿ ಹೆಚ್ಚಾಗಿ ಮತದಾನದ ಕುರಿತು ಜಾಗೃತಿ ಮೂಡಿಸಲು ತಿಳಿಸಲಾಗಿದೆ ಎಂದರು.
ಐಟಿ-ಬಿಟಿ ಕಂಪನಿಗಳಲ್ಲಿ ಎಚ್‌ಆರ್‌ಎಂಎಸ್ ವ್ಯವಸ್ಥೆಯಿದ್ದು, ಆ ಮೂಲಕ ಸಿಬ್ಬಂದಿಗಳಿಗೆ ತಪ್ಪದೆ ಮತದಾನ ಮಾಡಲು ಸಂದೇಶ ಕಳುಹಿಸುವ, ಎಲ್ಲ ಭಾಷೆಯನ್ನೊಳಗೊಂಡ ಮೈ ಭಾರತ್ ಹೂ ಚುನಾವಣಾ ಗೀತೆ ಹಾಗೂ ಇನ್ನಿತರ ಜಾಗೃತಿ ಸಂದೇಶಗಳ ದೃಶ್ಯಾವಳಿಗಳನ್ನು ಎಲ್ಲ ಕಂಪನಿಗಳ ಎಲ್‌ಇಡಿ ಪರದೆಗಳಲ್ಲಿ ಹಾಕಲು ಸೂಚಿಸಲಾಗಿದೆ ಎಂದು ಹೇಳಿದರು.
ಈ ವೇಳೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಪಿ.ಎಸ್.ಕಾಂತರಾಜು, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಪ್ರತಿಭಾ, ವಿವಿಧ ಐಟಿ-ಬಿಟಿ ಸಂಸ್ಥೆಗಳ ಮುಖ್ಯಸ್ಥರು ಸೇರಿ ಇನ್ನಿತರ ಅಧಿಕಾರಿಳು ಉಪಸ್ಥಿತರಿದ್ದರು.
ನಗರದಲ್ಲಿ ಸುಮಾರು 4,500 ಐಟಿ-ಬಿಟಿ ಸಂಸ್ಥೆಗಳಿದ್ದು, ಎಲ್ಲ ಸಂಸ್ಥೆಗಳಿಗೂ ಮತದಾನದ ದಿನವಾದ ಏ.26ರಂದು ರಜೆ ನೀಡಿ ಮತದಾರರಿಗೆ ಮತ ಚಲಾಯಿಸಲು ಅನುಕೂಲ ಮಾಡಿಕೊಡಲು ಮನವಿ ಮಾಡಲಾಗಿದೆ. ಜತೆಗೆ ಎಲ್ಲ ಸಿಬ್ಬಂದಿಗಳಿಗೆ ಮೇಲ್ ಮೂಲಕವೂ ಮತದಾನ ಮಾಡಲು ಅರಿವು ಮೂಡಿಸಲು ತಿಳಿಸಲಾಗಿದೆ.
- ಏಕ್‌ರೂಪ್ ಕೌರ್, ಐಟಿ-ಬಿಟಿ ಇಲಾಖೆಯ ಕಾರ್ಯದರ್ಶಿ