

ಪಿರಿಯಾಪಟ್ಟಣ: ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಜಾಗೃತಿ ಮೂಡಿಸುವ ಉದ್ದೇಶದಿಂದ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಡಿ.ಬಿ.ಸುನೀಲ್ ಕುಮಾರ್ ತಿಳಿಸಿದರು.
ತಾಲೂಕು ಸ್ವೀಪ್ ಸಮಿತಿಯಿಂದ ತಾಲೂಕು ಪಂಚಾಯಿತಿ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ ವಿಷಯ ಕುರಿತ ಸಭೆಯಲ್ಲಿ ಅವರು ಮಾತನಾಡಿದರು. ಏ.26 ರಂದು ನಡೆಯಲಿರುವ ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಮತದಾರರಲ್ಲಿ ಜಾಗೃತಿ ಮೂಡಿಸಲು ಅಗತ್ಯ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುವಂತೆ ತಾಲೂಕಿನ 34 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಪಿಡಿಒಗಳಿಗೆ ಸೂಚಿಸಲಾಗಿದೆ ಎಂದರು.
ಮತಗಟ್ಟೆಗಳಲ್ಲಿ ಮೂಲಸೌಲಭ್ಯಗಳು ಇರುವುದನ್ನು ಖಚಿತಪಡಿಸಿಕೊಳ್ಳುವುದರ ಜತೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಿಡಿಒಗಳ ನೇತೃತ್ವದಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮವನ್ನು ಏ.21 ರಂದು ಎಲ್ಲಾ ಮತಗಟ್ಟೆಗಳಲ್ಲಿ ರಾಷ್ಟ್ರೀಯ ಹಬ್ಬ ಮಾದರಿಯಲ್ಲಿ ಹಮ್ಮಿಕೊಳ್ಳುವಂತೆ ತಿಳಿಸಲಾಗಿದೆ ಎಂದರು. ಏ.26ರ ಮತದಾನದ ದಿನದಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಚುನಾವಣಾ ಆಯೋಗದ ಸೂಚನೆಯಂತೆ ಪ್ರತಿ ಗಂಟೆಗೊಮ್ಮೆ ಮತದಾನ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದು ಸಲಹೆ ನೀಡಿದರು.
ತಾಲೂಕು ಪಂಚಾಯಿತಿ ಆವರಣದಿಂದ ಸಾರಿಗೆ ಬಸ್ ನಿಲ್ದಾಣದವರೆಗೆ ಜಾಥಾ ನಡೆಯಿತು. ಟಿಪಿಒ ವಸಂತಲಕ್ಷ್ಮೀ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಜಿ.ಸಿ.ಮಹದೇವ್, ಪುರಸಭೆ ಹೆಲ್ತ್ ಇನ್‌ಸ್ಪೆಕ್ಟರ್ ಮೋಹನ್ ಕುಮಾರ್, ಸಾರಿಗೆ ನಿಯಂತ್ರಕ ಶ್ರೀಧರ್ ಇದ್ದರು.