ಮತದಾನದ ಮೂಲಕ ಬಲಿಷ್ಠ ರಾಷ್ಟ್ರ ಕಟ್ಟೋಣ

25 Jaggu10A-Web
ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿ.ಎಂ.ಜೋಶಿ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್, ಜಿಪಂ ಸಿಇಒ ಎಚ್.ವಿ.ದರ್ಶನ್, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್, ಸ್ವೀಪ್ ಐಕಾನ್ ರಾಘವೇಂದ್ರ ಅನ್ವೇಕರ್ ಇತರರು ಇದ್ದರು.
Published on

ಬೆಳಗಾವಿ: ಮತದಾನ ಕುರಿತು ಜಾಗೃತಿ ಮೂಡಿಸಿ ಸಮರ್ಥ ನಾಯಕನನ್ನು ಆಯ್ಕೆ ಮಾಡುವ ಮೂಲಕ ಬಲಿಷ್ಠ ದೇಶ ಕಟ್ಟುವ ಕೆಲಸವನ್ನು ಎಲ್ಲರೂ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿ.ಎಂ.ಜೋಶಿ ಹೇಳಿದ್ದಾರೆ.

ಚುನಾವಣಾ ಆಯೋಗ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆಯಿಂದ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ 11ನೇ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿ ಶೇ. 70-80 ಮತದಾನವಾಗುತ್ತಿದ್ದು, ನಗರ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಕಡಿಮೆಯಾಗುತ್ತಿರುವುದು ವಿಷಾದಕರ ಸಂಗತಿ. ಮತದಾನದ ಕುರಿತು ಸರ್ಕಾರ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದೆ. ವಿದ್ಯಾರ್ಥಿಗಳೂ ಸಹ ಆಸಕ್ತಿ ವಹಿಸಿ, ಮತದಾರರ ಪಟ್ಟಿಯಲ್ಲಿ ತಮ್ಮ ಹಾಗೂ ತಮ್ಮ ಕುಟುಂಬದವರ ಹೆಸರು ನೋಂದಾಯಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾತನಾಡಿ, ಭಾರತವು ಭಾಷೆ, ಧರ್ಮ, ಜನಾಂಗ ಹೊಂದಿದ ವೈವಿಧ್ಯಮಯ ದೇಶವಾಗಿದ್ದರೂ ಎಲ್ಲರಿಗೂ ಸಮಾನ ಮತದಾನದ ಹಕ್ಕು ಹಾಗೂ ಸಮರ್ಥ ನಾಯಕನನ್ನು ಆಯ್ದುಕೊಳ್ಳುವ ಆಯ್ಕೆ ನೀಡಲಾಗಿದೆ. 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಜಿಲ್ಲಾಧಿಕಾರಿಗಳು ಪ್ರತಿಜ್ಞಾವಿಧಿ ಬೋಧಿಸಿದರು. ನೂತನ ಮತದಾರರಿಗೆ ಚುನಾವಣಾ ಗುರುತಿನ ಚೀಟಿ ವಿತರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು. ನಗರ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್, ಜಿಪಂ ಸಿಇಒ ಎಚ್.ವಿ.ದರ್ಶನ್, ಎಡಿಸಿ ಅಶೋಕ ದುಡಗುಂಟಿ, ಪಾಲಿಕೆ ಆಯುಕ್ತ ಕೆ.ಎಚ್.ಜಗದೀಶ, ಸ್ವೀಪ್ ಐಕಾನ್‌ಗಳಾದ ರಾಘವೇಂದ್ರ ಅನ್ವೇಕರ್, ರೋಹನ ಕೊಂಕಣಿ, ಸುನೀತಾ ದೇಸಾಯಿ ಇದ್ದರು.

ಜಾಥಾ ಕಾರ್ಯಕ್ರಮ: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಡಿಸಿ ಕಚೇರಿಯಿಂದ ಚನ್ನಮ್ಮ ವೃತ್ತದ ಮಾರ್ಗವಾಗಿ ಜಿಪಂ ಕಾರ್ಯಾಲಯದವರೆಗೆ ಜಾಥಾ ಆಯೋಜಿಸಲ್ಗಾತ್ತು. ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಹಸಿರು ನಿಶಾನೆ ತೋರುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net