ನಾಳೆ 3,284 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

21 smg 21
Published on

ಶಿವಮೊಗ್ಗ: ಮೊದಲ ಹಂತದಲ್ಲಿ ಜಿಲ್ಲೆಯ ಮೂರು ತಾಲೂಕಿನ 113 ಗ್ರಾಪಂಗಳಿಗೆ ಡಿ.22ರ ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದ್ದು 3,71,387 ಮತದಾರರು ಹಕ್ಕು ಚಲಾಯಿಸುವ ಅವಕಾಶ ಹೊಂದಿದ್ದಾರೆ. ಬಂದೋಬಸ್ತ್​ಗಾಗಿ 900 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಆಯಾ ತಾಲೂಕು ಕೇಂದ್ರಗಳಲ್ಲಿ ಡಿ.30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಡಿ.27ರಂದು 2ನೇ ಹಂತದಲ್ಲಿ ಸಾಗರ, ಶಿಕಾರಿಪುರ, ಸೊರಬ ಮತ್ತು ಹೊಸನಗರ ತಾಲೂಕಿನ ಗ್ರಾಪಂಗಳಿಗೆ ಮತದಾನ ಪ್ರಕ್ರಿಯೆ ನಡೆಸಲಾಗುತ್ತದೆ.

ಮೊದಲ ಹಂತದಲ್ಲಿ ಟ್ಟು 1,212 ಸ್ಥಾನಗಳ ಪೈಕಿ ಶಿವಮೊಗ್ಗ ತಾಲೂಕಿನ ಎರಡು ಸ್ಥಾನಗಳಿಗೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿರಲಿಲ್ಲ. ಮೂರು ತಾಲೂಕಿನಿಂದ ಒಟ್ಟು 82 ಮಂದಿ ಅವಿರೋಧ ಆಯ್ಕೆಯಾಗಿದ್ದರು. ಇದೀಗ 1,128 ಸ್ಥಾನಗಳಿಗೆ ಮತದಾನ ನಡೆಯಲಿದ್ದು, 1,804 ಪುರುಷ ಅಭ್ಯರ್ಥಿಗಳು ಹಾಗೂ 1,480 ಮಹಿಳಾ ಅಭ್ಯರ್ಥಿಗಳು ಸೇರಿ ಒಟ್ಟು 3,284 ಮಂದಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಮಸ್ಟರಿಂಗ್ ಕೇಂದ್ರಕ್ಕೆ ಡಿಸಿ ಭೇಟಿ: ಸೋಮವಾರ ಶಿವಮೊಗ್ಗದ ಎಚ್.ಎಸ್.ರುದ್ರಪ್ಪ ಎನ್​ಇಎಸ್ ಕಾಲೇಜಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಮತದಾನ ಕಾರ್ಯಕ್ಕೆ ನಿಯೋಜನೆಗೊಂಡ ಅಗತ್ಯ ನಿರ್ದೇಶನಗಳನ್ನು ನೀಡಿದರು. ಕಡೇ ಕ್ಷಣದಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ಕಾರ್ಯನಿರ್ವಹಿಸಿ ಎಂದು ತಿಳಿಸಿದರು. ಮತದಾನ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿ ಸೋಮವಾರ ಬೆಳಗ್ಗೆ 10.30ರ ಸುಮಾರಿಗೆ ಮಸ್ಟರಿಂಗ್ ಕೇಂದ್ರಗಳಿಗೆ ಆಗಮಿಸಿದರು. ಆ ಸಂದರ್ಭದಲ್ಲಿ ತಾಲೂಕು ಆಡಳಿತದ ಅಧಿಕಾರಿಗಳು, ಮತಗಟ್ಟೆ ನಿರ್ವಹಣೆ ಬಗ್ಗೆ ಸೂಚನ್ನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net