

ಮಡಿಕೇರಿ:
ಕಳೆದ ಕೆಲವು ದಿನಗಳಿಂದ ಮಡಿಕೇರಿ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಮೈಸೂರು-ಮಂಗಳೂರು ರಾಷ್ಟಿçÃಯ ಹೆದ್ದಾರಿ 275ರಲ್ಲಿ ಮಡಿಕೇರಿ ಬಳಿ ಬೃಹತ್ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡು ಆತಂಕಕ್ಕೆ ಕಾರಣವಾಗಿದೆ. 2018ರ ಪ್ರಾಕೃತಿಕ ವಿಕೋಪ ಸಂದರ್ಭ ಈ ಭಾಗದಲ್ಲಿ ಹೆದ್ದಾರಿ ಕುಸಿದು ವಾಹನ ಸಂಚಾರಕ್ಕೆ ಅಡ್ಡಿ ಆಗಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಸಿತ ತಡೆಯುವ ಸಲುವಾಗಿ ಇಲ್ಲಿ ಕಾಂಕ್ರಿಟ್ ತಡೆಗೋಡೆ ನಿರ್ಮಿಸಲಾಗಿತ್ತು. ಆದರೆ ಈ ಬಾರಿಯ ಮಳೆಗಾಲದಲ್ಲಿ ಈ ತಡೆಗೋಡೆಯಲ್ಲಿ ಈಗ ಬಿರುಕು ಕಾಣಿಸಿಕೊಂಡಿದೆ.
ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣ ಆಗಿರುವ ಹಿನ್ನೆಲೆಯಲ್ಲಿ ಈ ತಡೆಗೋಡೆಯ ಕೆಳ ಪ್ರದೇಶದಲ್ಲಿ ವಾಸ ಮಾಡುತ್ತಿರುವ ನಿವಾಸಿಗಳನ್ನು ಮುಂಜಾಗ್ರತಾ ಕ್ರಮವಾಗಿ ಗುರುವಾರ ರೆಡ್‌ಕ್ರಾಸ್ ಭವನದ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ. ಈ ಮಧ್ಯೆ ಬಿರುಕು ಬಿಟ್ಟ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಪರಿಶೀಲನೆ ನಡೆಸಿದರು. ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪೊಲೀಸ್ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಬ್ಯಾರಿಕೇಡ್ ಗಳನ್ನು ಅಳವಡಿಸುವ ಮೂಲಕ ವಾಹನಗಳ ಸುರಕ್ಷಿತ ಮತ್ತು ಸುಗಮ ಸಂಚಾರಕ್ಕೆ ಕ್ರಮ ಕೈಗೊಂಡಿದ್ದಾರೆ.
ಮತ್ತೊಂದು ಕಡೆ ರೆಡ್ ಕ್ರಾಸ್ ಭವನದಲ್ಲಿ ಆಶ್ರಯ ಪಡೆದಿರುವ ನಿವಾಸಿಗಳನ್ನು ಕಂದಾಯ ಇಲಾಖೆ ಹಾಗೂ ನಗರಸಭೆಯ ಅಧಿಕಾರಿಗಳು ಭೇಟಿ ಮಾಡಿ ಧೈರ್ಯ ತುಂಬಿದರು. ಈ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದವರಿಗೆ ಊಟ, ಉಪಹಾರ ಸೇರಿದಂತೆ ಮೂಲಭೂತ ಸೌಲಭ್ಯವನ್ನು ಕಲ್ಪಿಸಲಾಗಿದೆ.