ವಕ್ಫ್ ಹಟಾವೋ-ದೇಶ ಬಚಾವೋ, ಮುಂದುವರದಿ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ

WOKF DHARANI YATNAL
ವಿಜಯಪುರ ಜಿಲ್ಲಾಡಳಿತ ಕಚೇರಿ ಎದುರು ನಡೆಯುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿಯಲ್ಲಿ ವಿವಿಧ ಸಮುದಾಯ ಹಾಗೂ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದರು. ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಸಂಸದ ಪಿ.ಸಿ. ಗದ್ದಿಗೌಡರ ಮತ್ತಿತರರಿದ್ದಾರೆ.
Published on

ವಿಜಯಪುರ: ‘ವಕ್ಫ್ ಹಟಾವೋ-ದೇಶ ಬಚಾವೋ, ಮಾರಕ ವಕ್ಫ್ ಕಾಯ್ದೆ ನಿರ್ಮೂಲನೆ ನಮ್ಮೆಲ್ಲರ ಗುರಿ’ ಘೋಷವಾಕ್ಯದಡಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಮುಂದುವರಿದಿದ್ದು, ಬುಧವಾರ ಮುಸ್ಲಿಂ ರೈತರಾದಿಯಾಗಿ ವಿವಿಧ ಸಂಘ-ಸಂಸ್ಥೆಗಳು, ಸಂಘಟನೆಗಳು ಹಾಗೂ ಸಮುದಾಯಗಳ ಮುಖಂಡರು ಬೆಂಬಲ ಸೂಚಿಸಿದರು.

ಇಲ್ಲಿನ ಜಿಲ್ಲಾಡಳಿತ ಕಚೇರಿ ಎದುರು ನಡೆಯುತ್ತಿರುವ ಧರಣಿಯಲ್ಲಿ ಜಿಲ್ಲೆ ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ರೈತರು, ರಾಜಕೀಯ ಮುಖಂಡರು ಹಾಗೂ ಸಾಮಾಜಿಕ ಹೋರಾಟಗಾರರು ಪಾಲ್ಗೊಂಡರು. ಮೂರನೇ ದಿನವೂ ರೈತರು ಸಹವಾಲು ಸಲ್ಲಿಸಿದರು. ಕೆಲವು ಮುಸ್ಲಿಂ ರೈತರು ಧರಣಿಯಲ್ಲಿ ಪಾಲ್ಗೊಂಡು ತಮ್ಮ ಜಮೀನು ಸಹ ವಕ್ಫ್‌ಗೆ ಸೇರ್ಪಡೆಯಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಬಸನಗೌಡ ಪಾಟೀಲ ಯತ್ನಾಳರ ಮುಂದೆ ಅಳಲು ತೋಡಿಕೊಂಡಿದ್ದು ಗಮನ ಸೆಳೆಯಿತು. ಧರಣಿಯ ಮೊದಲ ದಿನವೇ ನಾದ ಕೆಡಿ ಗ್ರಾಮದ ಮುಸ್ಲಿಂ ರೈತನೋರ್ವ ವಕ್ಫ್ ವಿರುದ್ಧ ಆಕ್ರೋಶ ಹೊರಹಾಕಿದ್ದನು. ಇದೀಗ ಧರಣಿ ಸ್ಥಳಕ್ಕೆ ಆಗಮಿಸಿ ಅಹವಾಲು ಸಲ್ಲಿಸುತ್ತಿರುವುದು ವಿಶೇಷ.

ಜಿಲ್ಲೆಗೆ ಆಗಮಿಸಲಿರುವ ಜೆಪಿಸಿ ತಂಡಕ್ಕೆ ಸಲ್ಲಿಸಲು ಅಗತ್ಯ ದಾಖಲೆಗಳೊಂದಿಗೆ ನಗರ ಶಾಸಕರ ಜನಸಂಪರ್ಕ ಕಾರ್ಯಾಲಯಕ್ಕೆ ಹಾಗೂ ಧರಣಿ ಸ್ಥಳದಲ್ಲಿ ವಿಜಯಪುರ, ಬಾಗಲಕೋಟ, ಚಿಕ್ಕೋಡಿ, ಕಲಬುರಗಿ, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳ ರೈತರು ನೂರಾರು ಅರ್ಜಿಗಳನ್ನು ಸಲ್ಲಿಸಿದರು.

ಸಂಸದ ಪಿ.ಸಿ. ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ, ಮಾಜಿ ಶಾಸಕ ವೀರಣ್ಣ ಚರಂತಿಮಠ, ಗುರುರಾಜ ಆಚಾರ್ಯ, ಶಿವರಾಮ ಗಾಂವಕರ, ಸಂಸದ ರಮೇಶ ಜಿಗಜಿಣಗಿ, ಲಿಂಗಾಯತ ಪಂಚಮಸಾಲಿ ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜ ಸ್ವಾಮೀಜಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ, ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ, ಮುಖಂಡರಾದ ಕಾಸುಗೌಡ ಬಿರಾದಾರ, ಸಂಜೀವ ಐಹೊಳಿ, ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಬಿ.ಎಂ.ಪಾಟೀಲ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net