

ಮೈಸೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸುವುದಿಲ್ಲ. ಈ ಬಗ್ಗೆ ಯಾರೂ ಸಂಶಯಪಡುವ ಅಗತ್ಯವಿಲ್ಲ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರ್‌ನಾಥ್ ಸ್ಪಷ್ಟಪಡಿಸಿದರು.
ದೇಶದಲ್ಲಿ ಗ್ಯಾರಂಟಿ ಯೋಜನೆಗಳು ಮನೆ ಮಾತಾಗಿವೆ. ಆದರೆ ವಿರೋಧ ಪಕ್ಷದವರು ಗ್ಯಾರಂಟಿಗಳನ್ನು ನಿಲ್ಲಿಸುತ್ತಾರೆ ಎಂದು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಅವರೇ ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಯಾರೂ ಸಂಶಯಪಡುವ ಅಗತ್ಯವಿಲ್ಲ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯಪಾಲರು ಫೆ.12ರಂದು ಗ್ಯಾರಂಟಿಗಳು 1.2 ಕೋಟಿ ಜನರನ್ನು ಬಡತನ ರೇಖೆಯಿಂದ ಹೊರಗೆ ತಂದಿವೆ ಎಂದು ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ. 4.6 ಕೋಟಿ ಜನರಿಗೆ ನೇರವಾಗಿ ಅನುಕೂಲವಾಗಿದೆ. ಬಡವರ ಬದುಕಿಗೆ ಬೆಳಕಾಗುವ ಕಾರ್ಯಕ್ರಮಗಳಾಗಿವೆ. ಗ್ಯಾರಂಟಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾ, ತಾಲೂಕು ಮಟ್ಟದ ಅಧ್ಯಕ್ಷರು, ಉಸ್ತುವಾರಿಗಳು, ಪದಾಧಿಕಾರಿಗಳನ್ನು ನೇಮಿಸಲಾಗುತ್ತಿದೆ. ಬಡವರನ್ನು ಮೇಲೆತ್ತುವುದೇ ಇದರ ಉದ್ದೇಶ ಎಂದರು.
ವಿಪಕ್ಷಗಳು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಹಗರಣವನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಬೀಳಿಸುವ ಪ್ರಯತ್ನ ಮಾಡುತ್ತಿವೆ. ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ದೆಹಲಿಗೆ ಹೋದವರೆಲ್ಲ ಲಾಭಿ ಮಾಡುತ್ತಾರೆ ಎಂಬುದೆಲ್ಲ ಸುಳ್ಳು. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾಗಲ್ಲ. ಈ ರೀತಿಯ ಚರ್ಚೆ ಮಾಡಿರುವುದು ವಿರೋಧ ಪಕ್ಷಗಳು. ಆದರೆ, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ರಾಷ್ಟ್ರೀಯ ನಾಯಕರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಎಲ್ಲರೂ ಅವರ ಪರ ನಿಂತಿದ್ದಾರೆ. ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಾಗಿ ತರಾತುರಿಯಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಪ್ರಕರಣದಲ್ಲಿ ಅನುಮತಿ ನೀಡದೆ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಸಮಾಜದಲ್ಲಿ ತಾರತಮ್ಯ ತೊಲಗಿಸಿದಾಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ. ಮೋದಿ ಸರ್ಕಾರ ತರಾತುರಿಯಲ್ಲಿ ಮಹಿಳಾ ಮೀಸಲಾತಿ ಜಾರಿಗೊಳಿಸಿದೆ. ಆದರೆ ಅದು ಜಾರಿಯಾಗಿಲ್ಲ. ಶೀಘ್ರವಾಗಿ ಮೀಸಲು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಅರುಣ್‌ಕುಮಾರ್, ಪುಷ್ಪಲತಾ ಚಿಕ್ಕಣ್ಣ, ಪುಷ್ಪವಲ್ಲಿ ಇದ್ದರು.