

ಮೈಸೂರು: ಬೆಳಗಾವಿ ಅಧಿವೇಶ ಆರಂಭಕ್ಕೂ ಮುನ್ನ ರಾಜ್ಯದಲ್ಲಿ ಎಂಇಎಸ್ ನಿಷೇಧಿಸಬೇಕು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದಿಂದ ನಗರದ ಜಯಚಾಮರಾಜೇಂದ್ರ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ರಾಜ್ಯದಲ್ಲಿ ಎಂಇಎಸ್ ಪುಂಡಾಟ ಹೆಚ್ಚಾಗಿದ್ದು, ಅವರೊಂದಿಗೆ ನಮ್ಮ ರಾಜ್ಯದ ಕೆಲವು ಶಾಸಕರು, ಸಂಸದರು ಶಾಮೀಲಾಗಿದ್ದಾರೆ. ಅವರನ್ನು ರಾಜ್ಯದಿಂದ ಹೊರಗಟ್ಟಲು ಕ್ರಮ ವಹಿಸಬೇಕು. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಎಂಇಎಸ್ ಬೆಳವಣಿಗೆಗೆ ಅವಕಾಶ ನೀಡಬಾರದು ಎಂದು ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗ್ರಹಿಸಿದರು.
ಎಂಇಎಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಳೆದ ವರ್ಷ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು. ಬೆಳಗಾವಿ ಅಧಿವೇಶನಕ್ಕೆ ಅಡ್ಡಿಪಡಿಸಲಾಗುವುದು ಎಂದು ಎಂಇಎಸ್ ಎಚ್ಚರಿಕೆ ನೀಡಿದೆ. ಹೀಗಾಗಿ ಸರ್ಕಾರ ಕೂಡಲೇ ಎಂಇಎಸ್ ಅನ್ನು ರಾಜ್ಯದಲ್ಲಿ ಕೂಡಲೇ ನಿಷೇಧಿಸಬೇಕು. ಇಲ್ಲವಾದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಚಿರತೆ ದಾಳಿ ಹೆಚ್ಚಾಗುತ್ತಿದ್ದು, ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ವಿಫಲವಾಗಿದೆ. ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಬೇಕು. ಒಂದುವೇಳೆ ಮುಖ್ಯಮಂತ್ರಿ ಮನೆ ಮುಂದೆ ಚಿರತೆ ಬಂದರೆ ಎಲ್ಲ ಭದ್ರತಾ ಸಿಬ್ಬಂದಿ ಸ್ಥಳದಿಂದ ಪಲಾಯನಗೈಯುತ್ತಾರೆ, ಸರ್ಕಾರದ ಸ್ಥಿತಿ ಆ ರೀತಿ ಇದೆ. ಚಿರತೆಯನ್ನು ಸೆರೆ ಹಿಡಿಯಲು ಸಾಧ್ಯವಾಗದ ಸರ್ಕಾರ ಜನರಿಗೆ ಯಾವ ರೀತಿ ರಕ್ಷಣೆ ನೀಡುತ್ತದೆ ಎಂದು ಪ್ರಶ್ನಿಸಿದರು.