ನಾರಾಯಣಪುರ ಜಲಾಶಯದಿಂದ ನದಿಗೆ ನೀರು

04-04-Shiva-1
ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅಧ್ಯಕ್ಷತೆಯಲ್ಲಿ ಕುಡಿಯುವ ನೀರು ಸರಬರಾಜು ಕುರಿತು ಗುರುವಾರ ಸಭೆ ಜರುಗಿತು. ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಸಹಾಯಕ ಆಯುಕ್ತ ಎಸ್.ಎಸ್.ಸಂಪಗಾವಿ, ನಗರಾಭಿವೃದ್ಧಿ ಪ್ರಾಕಾರದ ಯೋಜನಾ ನಿರ್ದೇಶಕ ಜಗದೀಶ ಗಂಗಣ್ಣನವರ ಇದ್ದರು.
Published on

ರಾಯಚೂರು: ಜನರಿಗೆ ಕುಡಿಯುವ ನೀರಿನ ಅವಶ್ಯಕತೆಯನ್ನು ಮನಗಂಡು ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಶೀಘ್ರದಲ್ಲಿ ಒಂದು ಟಿಎಂಸಿ ನೀರು ಹರಿಸಲಾಗುತ್ತಿದೆ. ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅಧಿಕಾರಿಗಳಿಗೆ ಸೂಚಿಸಿದರು.
ಸ್ಥಳೀಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರು ಸರಬರಾಜು ಕುರಿತು ಗುರುವಾರ ಜರುಗಿದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳನ್ನು ಗುರುತಿಸಿ ನೀರಿನ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದರು.
ತುಂಗಭದ್ರಾ ಜಲಾಶಯದಿಂದ ಕಾಲುವೆ ನೀರು ಹರಿಸಿ ಜಿಲ್ಲೆಯಲ್ಲಿನ ಶೇ.80ರಷ್ಟು ಕೆರೆಗಳನ್ನು ಈಗಾಗಲೇ ಭರ್ತಿ ಮಾಡಲಾಗಿದೆ. ಶೇ.20ರಷ್ಟು ಕೆರೆಗಳಿಗೆ ಶೇ.50ರಷ್ಟು ನೀರು ತುಂಬಲಾಗಿದೆ. ಅಗತ್ಯವಿದ್ದಲ್ಲಿ ಮುಂದಿನ ದಿನಗಳಲ್ಲಿ ನೀರು ಹರಿಸಿ ಕೆರೆಗಳನ್ನು ತುಂಬಲಾಗುವುದು.
ನದಿ ಮತ್ತು ಕಾಲುವೆ ಅವಲಂಬಿತವಲ್ಲದ ಹಳ್ಳಿಗಳಿಗೆ ಕೊಳವೆಬಾವಿ ಮೂಲಕ ನೀರು ಸರಬರಾಜು ಮಾಡಲಾಗುತ್ತಿದ್ದು, ಹೊಸ ಕೊಳವೆಬಾವಿ ಅವಶ್ಯಕತೆಯಿದ್ದಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಿ ಕೊಳವೆಬಾವಿ ಕೊರೆಸಲು ಕ್ರಮಕೈಗೊಳ್ಳಬೇಕು. ಅದಕ್ಕಾಗಿ ಪ್ರತಿ ತಾಲೂಕಿಗೆ 50 ಲಕ್ಷ ರೂ.ಗಳನ್ನು ಮಂಜೂರು ಮಾಡಲಾಗಿದೆ.
87 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ಪಡೆದು ನೀರು ಪಡೆಯಲಾಗುತ್ತಿದ್ದು, ಮೇ ಎರಡನೇ ವಾರದಲ್ಲಿ ಮತ್ತೆ ನೀರಿನ ಅವಶ್ಯಕತೆ ಬೀಳುತ್ತಿದ್ದು, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ನೀರಿನ ಅಭಾವ ಉಂಟಾಗದಂತೆ ಕ್ರಮಕೈಗೊಳ್ಳಬೇಕು ಎಂದು ಚಂದ್ರಶೇಖರ ನಾಯಕ ತಿಳಿಸಿದರು.
ಈ ಸಂದರ್ಭದಲ್ಲಿ ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಸಹಾಯಕ ಆಯುಕ್ತ ಎಸ್.ಎಸ್.ಸಂಪಗಾವಿ, ನಗರಾಭಿವೃದ್ಧಿ ಪ್ರಾಕಾರದ ಯೋಜನಾ ನಿರ್ದೇಶಕ ಜಗದೀಶ ಗಂಗಣ್ಣನವರ, ತಹಸೀಲ್ದಾರ್ ಸುರೇಶ ವರ್ಮಾ, ನಗರಸಭೆ ಪೌರಾಯುಕ್ತ ಜಿ.ಎನ್.ಚಲಪತಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ, ತಾ.ಪಂ. ಇಒ ಮಾನಪ್ಪ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net