

ಹನೂರು: ಗ್ರಾಮದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಭಾನುವಾರ ತಾಲೂಕಿನ ಚಂಗಾಧರಹಳ್ಳಿ ಗ್ರಾಮಸ್ಥರು ಶಾಸಕ ಎಂ.ಆರ್. ಮಂಜುನಾಥ್ ಅವರಿಗೆ ಮನವಿ ಮಾಡಿದರು.
ಪಟ್ಟಣದ ಶಾಸಕರ ನಿವಾಸದಲ್ಲಿ ಭೇಟಿ ನೀಡಿದ ಗ್ರಾಮಸ್ಥರು ಸಮಸ್ಯೆ ಬಗ್ಗೆ ವಿವರವಾಗಿ ತಿಳಿಸಿದರು. ಗ್ರಾಮದಲ್ಲಿ ಬಹುತೇಕ ಕುಟುಂಬಗಳು ಕೂಲಿಯನ್ನೇ ನಂಬಿ ಜೀವನ ನಡೆಸುತ್ತಿವೆ. ಆದರೆ ಬೇಸಿಗೆ ಬಂದರೆ ಪ್ರತಿ ವರ್ಷ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುತ್ತದೆ. ಇದೀಗ ಕಳೆದ 2 ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಬಿಂದಿಗೆ ನೀರಿಗೂ ಕಷ್ಟ ಪಡಬೇಕಿದೆ. ಹಾಗಾಗಿ ಗ್ರಾಮದಲ್ಲಿ ನೀರಿನದ್ದೆ ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಪಂ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಈ ಬಗ್ಗೆ ಗಮನಹರಿಸಿ ಗ್ರಾಮದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಿ ಅನುಕೂಲ ಕಲ್ಪಿಸವಂತೆ ಮನವಿ ಮಾಡಿದರು.
ನೀರಿನ ಸಮಸ್ಯೆಯಾಗದಂತೆ ಕ್ರಮ:
ಇದಕ್ಕೆ ಶಾಸಕರು ಪ್ರತಿಕ್ರಿಯಿಸಿ, ಈ ಬಗ್ಗೆ ಗ್ರಾಪಂ ಅಧಿಕಾರಿಗಳಿಗೆ ತಿಳಿಸಿ ಸಮರ್ಪಕ ಕುಡಿಯುವ ನೀರನ್ನು ಪೂರೈಕೆ ಮಾಡುವಂತೆ ಸೂಚಿಸಲಾಗುವುದು. ಇನ್ನು ಬೇಸಿಗೆಯ ವೇಳೆ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವುದು ಗಮನದಲ್ಲಿದೆ. ಹಾಗಾಗಿ ಈ ಸಂಬಂಧ ಯೋಜನೆಯೊಂದನ್ನು ರೂಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ಕಾರ್ಯರೂಪಕ್ಕೆ ತರಲಾಗುವುದು. ಮುಂದಿನ ವರ್ಷದಿಂದ ಪ್ರತಿ ಗ್ರಾಮಕ್ಕೂ ಸಮರ್ಪಕ ಕುಡಿಯುವ ನೀರನ್ನು ಒದಗಿಸುವುದರ ಮೂಲಕ ಸಮಸ್ಯೆಯಾಗದಂತೆ ಅಗತ್ಯ ಕ್ರಮವಹಿಸಲಾಗಿದೆ. ಇದಕ್ಕೆ ತಮ್ಮೆಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.
ಗಾಮಸ್ಥರಾದ ಮುರುಗೇಶ್, ವೀರಪ್ಪ, ಮಾದೇಶ್, ಮಾದಪ್ಪ, ಕುಮಾರ್, ರವಿ, ಸೆಲ್ವರಾಜ್, ಲಕ್ಷ್ಮಣ ಹಾಗೂ ಇನ್ನಿತರರು ಇದ್ದರು.