ಶೀಘ್ರವೇ ಅಚ್ಚುಕಟ್ಟು ವ್ಯಾಪ್ತಿಯ ಕೆರೆಗೆ ನೀರು

28 HANUR 3
ರಾಮನಗುಡ್ಡೆಯಲ್ಲಿ ಆಯೋಜಿಸಿದ್ದ ರೈತರ ಸಭೆಯಲ್ಲಿ ಶಾಸಕ ಎಂ.ಆರ್.ಮಂಜುನಾಥ್ ಮಾತನಾಡಿದರು. ಗುರಮಲ್ಲಪ್ಪ, ಕರಿಯಪ್ಪ, ಕರುಣಾಮಯಿ ಇತರರು ಇದ್ದರು.
Published on

ಹನೂರು: ಅಚ್ಚುಕಟ್ಟು ಪ್ರದೇಶದ ರೈತರಿಗೆ ಮೊದಲ ಆದ್ಯತೆ ನೀಡಿ ಶಾಶ್ವತವಾಗಿ ನೀರೋದಗಿಸುವ ಸಲುವಾಗಿ ಕೆರೆಗೆ ನೀರು ತುಂಬಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ಮಾಹಿತಿ ನೀಡಿದರು.

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಗಲ ಸಮೀಪದ ರಾಮನಗುಡ್ಡೆ ಬಯಲಿನಲ್ಲಿ ಶನಿವಾರ ಕೆರೆಗೆ ನೀರು ತುಂಬಿಸುವ ಯೋಜನೆ ಸಂಬಂಧ ಆಯೋಜಿಸಿದ್ದ ರೈತರ ಸಭೆಯಲ್ಲಿ ಮಾತನಾಡಿದರು.

ಹನೂರು ಭಾಗದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಕೃಷಿ ತೊಡಗಿದ್ದಾರೆ. ಆದರೆ ಸಮರ್ಪಕ ನೀರಾವರಿ ಸೌಕರ್ಯ ಇಲ್ಲ. ಹಾಗಾಗಿ ರೈತರಿಗೆ ಸಮರ್ಪಕ ನೀರಾವರಿ ಸೌಕರ್ಯ ಒದಗಿಸುವ ಉದ್ದೇಶದಿಂದ ಯೋಜನೆ ರೂಪಿಸಲಾಗಿದೆ. ಈ ಯೋಜನೆಗೆ ಸರ್ಕಾರದಿಂದ 52 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಇದರಲ್ಲಿ ಅಕಾರಿಗಳ ಅವೈಜ್ಞಾನಿಕ ಕ್ರಿಯಾ ಯೋಜನೆಯಿಂದ ನನೆಗುದಿಗೆ ಬಿದ್ದಿದ್ದ ರಾಮನಗುಡ್ಡೆ ಕೆರೆ ತುಂಬಿಸುವ ಯೋಜನೆಗೆ 14.35 ಕೋಟಿ ರೂ. ಅನುದಾನ ನೀಡಲಾಗಿದೆ. ಇನ್ನು 2 ತಿಂಗಳೊಳಗಾಗಿ ಕಾಮಗಾರಿ ಆರಂಭವಾಗಲಿದೆ. ಮುಂದಿನ ದಿನಗಳಲ್ಲಿ ಈ ಭಾಗದ ಅಚ್ಚುಕಟ್ಟು ಪ್ರದೇಶದ ರೈತರ ಕೃಷಿಗೆ ಅನುಕೂಲವಾಗಲಿದೆ. ಇನ್ನು ಈ ಭಾಗದಲ್ಲಿ ಒತ್ತುವರಿಯಾಗಿರುವ ಜಾಗವನ್ನು ತೆರವುಗೊಳಿಸಲಾಗುವುದು. ನಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದು. ರೈತರು ಓಡಾಟಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದು ತಿಳಿಸಿದರು.

67 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಈಗಾಗಲೇ ಹಲವು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. 67 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ಇದರಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ತೀವ್ರ ಹದಗೆಟ್ಟಿದ್ದ ಬಂಡಳ್ಳಿ-ಹನೂರು ರಸ್ತೆ, 25 ಕೋಟಿ ರೂ. ವೆಚ್ಚದಲ್ಲಿ ರಾಮಾಪುರ ರಸ್ತೆ, ಇನ್ನುಳಿದ 17 ಕೋಟಿ ರೂ. ವೆಚ್ಚದಲ್ಲಿ ಬಾಕಿ ಉಳಿದಿರುವ ಕೌದಳ್ಳಿ- ರಾಮಾಪುರ ರಸ್ತೆ ಹಾಗೂ ಅಜ್ಜೀಪುರ ರಸ್ತೆ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.

ಚಾಮುಲ್ ಮಾಜಿ ಅಧ್ಯಕ್ಷ ಗುರುಮಲ್ಲಪ್ಪ, ತಾಲೂಕು ರೈತ ಸಂಘದ ಅಧ್ಯಕ್ಷ ಚಂಗಡಿ ಕರಿಯಪ್ಪ, ರೈತ ಮುಖಂಡರಾದ ವಿನೇಶ್, ಮಾದಪ್ಪ, ನೀರಾವರಿ ಇಲಾಖೆಯ ಎಇಇ ಕರುಣಾಮಯಿ, ಮುಖಂಡರಾದ ವಿಜಯಕುಮಾರ್, ಜಸ್ಸಿಂ ಪಾಷ ಹಾಗೂ ಇತರದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net