ಕೊನೇ ಭಾಗದ ಜಮೀನುಗಳಿಗೆ ಹರಿಯಲಿದೆ ನೀರು

ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಕಾವೇರಿ ನೀರಾವರಿ ನಿಗಮ ಅಧಿಕಾರಿಗಳು ಸಭೆಯಲ್ಲಿ ಶಾಸಕ ಕೆ.ಎಂ.ಉದಯ್ ಮಾತನಾಡಿದರು. ನಾಗರಾಜು, ಅಜಯ್, ರಾಜೇಶ್ ಇದ್ದರು.
ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಕಾವೇರಿ ನೀರಾವರಿ ನಿಗಮ ಅಧಿಕಾರಿಗಳು ಸಭೆಯಲ್ಲಿ ಶಾಸಕ ಕೆ.ಎಂ.ಉದಯ್ ಮಾತನಾಡಿದರು. ನಾಗರಾಜು, ಅಜಯ್, ರಾಜೇಶ್ ಇದ್ದರು.
Published on

ಮದ್ದೂರು: ತಾಲೂಕಿನ ವಿಶ್ವೇಶ್ವರಯ್ಯ ನಾಲೆಯ ಕೊನೆಯ ಭಾಗದ ಜಮೀನುಗಳಿಗೆ ನಿರಂತರವಾಗಿ ನೀರು ಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ತಾಲೂಕಿನಾದ್ಯಂತ ಶೇ.75 ರಷ್ಟು ಕೆರೆ, ಕಟ್ಟೆಗಳು ಭರ್ತಿಯಾಗಿವೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ಕೊನೆಯ ಭಾಗದ ಜಮೀನುಗಳಿಗೆ ನೀರು ಹರಿಸಲು ಅಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದು ಕೆಲ ವ್ಯಕ್ತಿಗಳು ಇಲ್ಲಸಲ್ಲದ ಅಪಪ್ರಚಾರ ಮಾಡುವ ಮೂಲಕ ರೈತರ ದಿಕ್ಕು ತಪ್ಪಿಸುತ್ತಿದ್ದಾರೆಂದು ಆರೋಪಿಸಿದರು.

ಕೆ.ಆರ್.ಎಸ್. ಅಣೆಕಟ್ಟೆ ಭರ್ತಿಯಾಗುವ ಮುನ್ನವೇ ನಿಗಮದ ಅಧಿಕಾರಿಗಳು ಮತ್ತು ಸಚಿವರೊಟ್ಟಿಗೆ ಹಲವು ಸಭೆ ಮಾಡಿ ಚರ್ಚಿಸಿ ಮಳವಳ್ಳಿ ಮತ್ತು ಮದ್ದೂರು ತಾಲೂಕಿನ ಕೊನೆಯ ಭಾಗದ ಜಮೀನುಗಳಿಗೆ ನೀರು ಹರಿಸಲು ಪ್ರಥಮ ಆದ್ಯತೆ ನೀಡುವಂತೆ ಮನವಿ ಮಾಡಲಾಗಿತ್ತು. ಅದರಂತೆಯೇ ಅಧಿಕಾರಿಗಳು ನೀರು ಹರಿಸಲು ಮುಂದಾಗಿದ್ದು, ದೇವರ ಕೃಪೆಯಿಂದ ಕೆ.ಆರ್.ಎಸ್. ಅಣೆಕಟ್ಟೆ ಭರ್ತಿಯಾಗಿದೆ ಎಂದು ಹೇಳಿದರು.

ತಾಲೂಕಿನಾದ್ಯಂತ ಶೇ.60 ರಷ್ಟು ಕೃಷಿ ಚಟುವಟಿಕೆ ಕಾರ್ಯ ಪೂರ್ಣಗೊಂಡಿದ್ದು, ಬಾಕಿ ಉಳಿದಿರುವ ರೈತರು ಜಮೀನನ್ನು ಹದಗೊಳಿಸುತ್ತಿದ್ದಾರೆ. ಹಂತ ಹಂತವಾಗಿ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಿ ಆ ಭಾಗದ ರೈತರು ಬೇಸಾಯ ಮಾಡಲು ಅನುಕೂಲ ಕಲ್ಪಿಸಲಾಗಿದೆ ಎಂದರು.

ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳಾದ ನಾಗರಾಜು, ಅಜಯ್, ರಾಜೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net