ಗ್ಯಾರಂಟಿ ಯೋಜನೆಗಳಿಗೆ ನಾವೇ ಗ್ಯಾರಂಟಿ

BLY- 11-2
ಸಂತೋಷ್‌ಲಾಡ್
Published on

ಬಳ್ಳಾರಿ: ರಾಜ್ಯ ಸರ್ಕಾರವು ಜಾರಿಗೊಳಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ನಮ್ಮ ಸರ್ಕಾರದ ಅವಧಿ ಇರುವವರೆಗೂ ಗ್ಯಾರಂಟಿ ಯೋಜನೆಗಳನ್ನು ಪ್ರತಿ ವರ್ಗದ ಜನರಿಗೂ ತಲುಪಿಸುತ್ತೇವೆ. ಅದಕ್ಕೆ ನಾವೇ ಗ್ಯಾರಂಟಿ ಎಂದು ಕಾರ್ಮಿಕ ಸಚಿವ ಸಂತೋಷ್‌ಲಾಡ್ ಹೇಳಿದರು.

ನಗರದ ಖಾಸಗಿ ಹೋಟೆಲ್ನಲ್ಲಿ ಭಾನುವಾರದಂದು ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬೊಕ್ಕಸದಿಂದ ಸುಮಾರು 58 ಸಾವಿರ ಕೋಟಿ ರೂ. ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸಲಾಗಿದೆ. ಇಡೀ ದೇಶದಲ್ಲಿಯೇ ನಮ್ಮ ರಾಜ್ಯ ಸರ್ಕಾರವು ಉಚಿತ ಐದು ಗ್ಯಾರಂಟಿ ಯೋಜನೆಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಹಾಗೂ ಇತರ ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ತಾಲೂಕು, ಹೋಬಳಿ, ಗ್ರಾಮ ಮಟ್ಟದಲ್ಲಿಯೂ ಜನರ ಮನವರಿಕೆ ಮಾಡಿಕೊಡುವ ಕೆಲಸ ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಮತ್ತು ಶಾಸಕರು ಮಾಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದ್ದು, ಈಗಾಗಲೇ ರಾಜ್ಯ ಸರ್ಕಾರದಿಂದ 26 ಲಕ್ಷ ರೈತರ ಖಾತೆಗೆ ಎರಡು ಸಾವಿರ ರೂ. ನಂತೆ ಬರ ಪರಿಹಾರ ಹಣ ವರ್ಗಾವಣೆ ಮಾಡಲಾಗಿದೆ. ಇನ್ನುಳಿದ 3 ರಿಂದ 4 ಲಕ್ಷ ರೈತರ ಖಾತೆಗೆ ಬರ ಪರಿಹಾರ ಹಣ ಜಮಾ ಮಾಡಲಾಗುವುದು ಮತ್ತು ಕೇಂದ್ರ ಸರ್ಕಾರದಿಂದ ಬರ ಪರಿಹಾರ ಹಣ ನಿರೀಕ್ಷಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುಮತಿ ದೊರೆತ ತಕ್ಷಣ ಕೇಂದ್ರದಿಂದ ಶೇ.88 ರಷ್ಟು ಅನುದಾನ ಮತ್ತು ರಾಜ್ಯ ಸರ್ಕಾರದಿಂದ ಶೇ.12 ರಷ್ಟು ಅನುದಾನ ಸಹಭಾಗಿತ್ವದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ವಿವರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಮತ್ತು ಬಳ್ಳಾರಿ ನಗರ ಶಾಸಕ ನಾರಾ ಭತ್ ರೆಡ್ಡಿ ಅವರು ಜಿಲ್ಲೆಯಲ್ಲಿ ಅಪೆರಲ್ ಪಾರ್ಕ್, ಜೀನ್ಸ್ ಪಾರ್ಕ್ ನಿರ್ಮಾಣ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆದಿದ್ದಾರೆ ಎಂದು ತಿಳಿಸಿದರು.

ಬಳ್ಳಾರಿ ಕ್ಷೇತ್ರ ಕಾಂಗ್ರೆಸ್‌ನ ಬುನಾದಿ
ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರವನ್ನು ಗೆಲ್ಲುತ್ತೇವೆ. ಈ ಕ್ಷೇತ್ರ ಕಾಂಗ್ರೆಸ್‌ನ ಭದ್ರ ಬುನಾದಿಯಾಗಿದ್ದು, ಯಾರೇ ಅಭ್ಯರ್ಥಿಗಳಾದರೂ ಅವರನ್ನು ಗೆಲ್ಲಿಸುವ ಕೆಲಸ ಮಾಡಲಾಗುವುದು ಅದಕ್ಕಾಗಿ ಹೋಬಳಿ ಮಟ್ಟದಲ್ಲಿ ಗ್ಯಾರಂಟಿ ಸ್ಕೀಂಗಳ ಬಗ್ಗೆ ಮನೆ ಮನೆಗೆ ಜಾಗೃತಿ ಮೂಡಿಸಲಾಗುವುದು. ಬಿ.ನಾಗೇಂದ್ರ ಮತ್ತು ಜಮೀರ್ ಅಹ್ಮದ್‌ಖಾನ್ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ
ಟಿವಿ ಪ್ರಚಾರಕ್ಕಾಗಿ ತಗೆದುಕೊಳ್ಳುವ ಸಮಯವನ್ನು ಪ್ರಧಾನಿ ಮೋದಿ ಅವರು ನಿಲ್ಲಿಸಬೇಕು. ಪ್ರಚಾರಕ್ಕಾಗಿ 6500 ಕೋಟಿ ರೂ. ಹಣ ವ್ಯಯಿಸಿದ್ದಾರೆ. ಅಭಿವೃದ್ಧಿ ಕಾರ್ಯ ಮಾಡಿದರೆ ಇಷ್ಟೊಂದು ಪ್ರಚಾರ ಮಾಡುವ ಅಗತ್ಯ ಇರಲಿಲ್ಲ. ಕಳೆದ ಯುಪಿಎ ಸರ್ಕಾರದ ಅವಧಿಯ ಮತ್ತು ಈಗಿನ ಎನ್‌ಡಿಎ ಸರ್ಕಾರದ ಅವಧಿಯ ಯೋಜನೆ, ಅಭಿವೃದ್ಧಿಗಳ ಬಗ್ಗೆ ಚರ್ಚೆ ಆಗಬೇಕಿದೆ. ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಕುಸಿಯುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆ, ಬುಲೆಟ್‌ಟ್ರೈನ್ ಯೋಜನೆಗಳ ಬಗ್ಗೆ ಮಾತನಾಡುವುದಿಲ್ಲ. ಡಾಲರ್ ಮುಂದೆ ರೂಪಾಯಿ ಮೌಲ್ಯ ಕುಸಿಯುತ್ತಿದೆ. ಅದರ ಬಗ್ಗೆ ಎಲ್ಲಿಯೂ ಚಕಾರ ಎತ್ತುವುದಿಲ್ಲ. ಪುಲ್ವಾಮಾ ದಾಳಿ ವೇಳೆ ಆದ ಘಟನೆಯ ಬಗ್ಗೆ ಇನ್ನು ಸಂಪೂರ್ಣ ತನಿಖೆ ಆಗಲಿಲ್ಲ. ಸುಪ್ರೀಂ ಕೋರ್ಟ್ ಹೇಳಿದ ಜಾಗದಲ್ಲಿ ರಾಮಮಂದಿರ ಕಟ್ಟಿಲ್ಲ. ಆದರೂ ಬಿಜೆಪಿಯವರೇ ಕಟ್ಟಿಸಿರೋದು ಎನ್ನುವ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ ಎಂದು ಸಚಿವ ಸಂತೋಷ್ ಲಾಡ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಮಹಾನಗರ ಪಾಲಿಕೆಯ ಮೇಯರ್ ಬಿ.ಶ್ವೇತಾ, ಉಪಮೇಯರ್ ಬಿ.ಜಾನಕಿ, ,ಮುಖಂಡರಾದ ವೆಂಕಟೇಶ್ ಪ್ರಸಾದ್, ಮಾನಯ್ಯ, ಗಾದೆಪ್ಪ, ಗುಮ್ಮನೂರು ಜಗನ್ನಾಥ್ ಸೇರಿದಂತೆ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net