ಸಮಯ ಬಂದಾಗ ನಮ್ಮ ಶಕ್ತಿಯನ್ನು ತೋರಿಸಬೇಕು

21-02-Shiva-3
ರಾಯಚೂರಿನ ಖಾಸಗಿ ಹೋಟೆಲ್‌ನಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದಿಂದ ಬುಧವಾರ ಸಂಜೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಶಾಸಕ ಶ್ಯಾಮನೂರು ಶಿವಶಂಕರಪ್ಪರನ್ನು ಸನ್ಮಾನಿಸಿ, ಗೌರವಿಸಲಾಯಿತು. ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ಅಭಿನವ ರಾಚೋಟಿವೀರ ಶಿವಾಚಾರ್ಯ ಸ್ವಾಮೀಜಿ, ಮಾಜಿ ಶಾಸಕ ಬಸನಗೌಡ ಬ್ಯಾಗವಾಟ, ಮಹಾಸಭಾ ಜಿಲ್ಲಾಧ್ಯಕ್ಷ ಚಂದ್ರಶೇಖರ ಪಾಟೀಲ್ ಮಿರ್ಜಾಪುರ, ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಶರಣಭೂಪಾಲ ನಾಡಗೌಡ ಇದ್ದರು.
Published on

ರಾಯಚೂರು: ಯಾವುದೇ ಸಮಾಜ ಅಭಿವೃದ್ಧಿ ಹೊಂದಬೇಕಾದರೆ ಆ ಸಮಯದ ಜನರಲ್ಲಿ ಒಗ್ಗಟ್ಟು ಇರಬೇಕು. ಈ ನಿಟ್ಟಿನಲ್ಲಿ ವೀರಶೈವ ಲಿಂಗಾಯತ ಸಮಾಜದ ಒಗ್ಗೂಡಿ ಸಮಯ ಬಂದಾಗ ನಾವು ಏನು ಎಂಬ ಶಕ್ತಿಯನ್ನು ತೋರಿಸಬೇಕಾಗಿದೆ ಎಂದು ಶಾಸಕ ಶ್ಯಾಮನೂರು ಶಿವಶಂಕರಪ್ಪ ಹೇಳಿದರು.
ಸ್ಥಳೀಯ ಖಾಸಗಿ ಹೋಟೆಲ್‌ನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಬುಧವಾರ ಸಂಜೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ನಾವೆಲ್ಲರೂ ಒಂದೇ ಕುಟುಂಬದಂತಿರಬೇಕು. ಬೇರೆ ಸಮಾಜದವರನ್ನು ನಮ್ಮ ಅಣ್ಣ ತಮ್ಮಂದಿರಂತೆ ಕಾಣಬೇಕು ಎಂದರು.
ಮಹಾಸಭಾ ಸಮಾಜದ ಜನರನ್ನು ಒಗ್ಗೂಡಿಸುವ ಮತ್ತು ಸಂಘಟಿಸುವ ಕೆಲಸ ಮಾಡುತ್ತಾ ಬಂದಿದೆ. ನಮ್ಮ ಒಗ್ಗಟ್ಟು ಮತ್ತು ಶಕ್ತಿಯನ್ನು ತೋರಿಸಿದಾಗ ಮಾತ್ರ ನಮ್ಮ ಬೇಡಿಕೆಗಳು ಈಡೇರಿಸಿಕೊಳ್ಳಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಎಲ್ಲ ಕೆಲಸ ಮಾಡಬೇಕು ಎಂದು ಹೇಳಿದರು.
ಸಾನ್ನಿಧ್ಯ ವಹಿಸಿದ್ದ ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಶ್ಯಾಮನೂರು ಶಿವಶಂಕರಪ್ಪ ಕೊಡುಗೆ ಬಹು ದೊಡ್ಡದಾಗಿದೆ. ಸಮಾಜದ ಅಭಿವೃದ್ಧಿ ನಿಟ್ಟಿನಲ್ಲಿ ಮಹಾಸಭಾ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿವೀರ ಶಿವಾಚಾರ್ಯ ಸ್ವಾಮೀಜಿ, ಮಾಜಿ ಶಾಸಕ ಬಸನಗೌಡ ಬ್ಯಾಗವಾಟ, ಮಹಾಸಭಾ ಜಿಲ್ಲಾಧ್ಯಕ್ಷ ಚಂದ್ರಶೇಖರ ಪಾಟೀಲ್ ಮಿರ್ಜಾಪುರ, ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಶರಣಭೂಪಾಲ ನಾಡಗೌಡ, ಮುಖಂಡರಾದ ಸಿದ್ದನಗೌಡ ಪಾಟೀಲ್, ಪದಾಕಾರಿಗಳಾದ ಡಾ.ಪರಮೇಶ್ವರ ಸಾಲಿಮಠ, ವೀರಭದ್ರಪ್ಪ ಅಂತರಗಂಗಿ, ಮಲ್ಲಿಕಾರ್ಜುನ ದೋತರಬಂಡಿ, ವಿಜಯಕುಮಾರ ಪಾಟೀಲ್ ಶಾವಂತಗೇರಿ, ವಿಜಯಕುಮಾರ ಸಜ್ಜನ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net