

ಸುಂಟಿಕೊಪ್ಪ: ಚುನಾವಣೆ ಸಂದರ್ಭದಲ್ಲಿ ಮಾತ್ರ ನಾವು ರಾಜಕೀಯವಾಗಿ ಪರಸ್ಪರ ಎದುರಾಳಿಗಳೇ ಹೊರತು ಅಭಿವೃದ್ಧಿ ವಿಷಯದಲ್ಲಿ ನಾವೆಲ್ಲರೂ ಒಂದಾಗಿ ಸಾಗಬೇಕೆಂದು ಶಾಸಕ ಮಂತರ್‌ಗೌಡ ಕರೆ ನೀಡಿದ್ದಾರೆ.
ಲೋಟಸ್ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಮಾರುಕಟ್ಟೆ ಸೇರಿದಂತೆ ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 40 ಲಕ್ಷ ರೂ. ವಿವಿಧ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್‌ಗೌಡ ಶುಕ್ರವಾರ ಭೂಮಿ ಪೂಜೆ ನೇರವೇರಿಸಿದ ಬಳಿಕ ಅವರು ಮಾತನಾಡಿದರು.
ಇತ್ತೀಚೆಗೆ ಮುಖ್ಯಮಂತ್ರಿಗಳು ರಾಜ್ಯದ ಎಲ್ಲ ಶಾಸಕರಿಗೆ ತಲಾ 10 ಕೋಟಿ ರೂ. ಅನುದಾನ ಕೊಟ್ಟಿದ್ದಾರೆ. ಇದರಿಂದ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಈ ಮೊದಲೇ ಮಂಜೂರಾಗಿರುವ ಆರೋಗ್ಯ ಇಲಾಖೆ ನಿಗದಿತ ಅನುದಾನ, ಬರ ಪರಿಹಾರ, ಮಳೆ ಪರಿಹಾರ, ತಾಲೂಕು ಪಂಚಾಯಿತಿ ಅನುದಾನದ ಅಡಿಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶುಂಕುಸ್ಥಾಪನೆ ನೇರವೇರಿಸಲಾಗಿದೆ. ಗ್ರಾಮ ಪಂಚಾಯಿತಿ ಸದಸ್ಯರು ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರು ಗುಣಮಟ್ಟದ ಕಾಮಗಾರಿಯನ್ನು ಪರಿಶೀಲಿಸಬೇಕು ಎಂದು ಕಿವಿಮಾತು ಹೇಳಿದರು.
ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ 7 ವಾರ್ಡ್‌ಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ರಸ್ತೆಗಳು ಬಸ್ ನಿಲ್ದಾಣ, ಪ್ರವಾಸಿ ಮಂದಿರ ಹಾಗೂ ಮಾರುಕಟ್ಟೆ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳು ಆಗಬೇಕಾಗಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್, ಉಪಾಧ್ಯಕ್ಷೆ ಶಿವಮ್ಮ, ಪಿಡಿಓ ವಿ.ಜಿ.ಲೋಕೇಶ್, ಗ್ಯಾರಂಟಿ ಅನುಷ್ಠಾನ ಸಮತಿ ಹಾಗೂ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಜಿ.ಪಂ.ಮಾಜಿ ಸದಸ್ಯ ಪಿ.ಎಂ.ಲತೀಫ್, ನಗರಾಧ್ಯಕ್ಷ ರಫೀಕ್ ಖಾನ್, ಹೋಬಳಿ ಅಧ್ಯಕ್ಷ ರಜಾಕ್, ಅಲ್ಪಸಂಖ್ಯಾತರ ಅಧ್ಯಕ್ಷ ಅಬ್ಧುಲ್‌ಅಜೀಜ್, ಪಂಚಾಯಿತಿ ಸದಸ್ಯರಾದ ನಾಗರತ್ನ, ಪಿ.ಎಫ್.ಸಬಾಸ್ಟಿನ್, ಸೋಮನಾಥ್, ಆಲಿಕುಟ್ಟಿ, ಪ್ರಸಾದ್ ಕುಟ್ಟಪ್ಪ, ಶಬೀರ್, ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.