ಬಜೆಟ್​ನಲ್ಲಿ 30 ಕೋಟಿ ರೂ. ಕೇಳುತ್ತೇವೆ

B. Nagendrakumar
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ (ಕೆಎಚ್​ಡಿಸಿ)ಕ್ಕೆ ಪ್ರಸಕ್ತ ಬಜೆಟ್​ನಲ್ಲಿ 10 ಕೋಟಿ ರೂ. ಅನುದಾನ ನೀಡಲಾಗಿದೆ. ನೇಕಾರರಿಗೆ ಹೆಚ್ಚಿನ ಅನುದಾನ ಕಲ್ಪಿಸುವ ನಿಟ್ಟಿನಲ್ಲಿ ಮುಂದಿನ ಬಜೆಟ್​ನಲ್ಲಿ 30 ಕೋಟಿ ರೂ. ಅನುದಾನ ನೀಡುವಂತೆ ಮುಖ್ಯಮಂತ್ರಿಯವರಲ್ಲಿ ಕೋರಲಾಗುವುದು ಎಂದು ನಿಗಮದ ನೂತನ ಅಧ್ಯಕ್ಷ ಬಿ. ನಾಗೇಂದ್ರಕುಮಾರ ಹೇಳಿದರು.

ವಿದ್ಯಾನಗರದ ನೇಕಾರಭವನದಲ್ಲಿ ನಿಗಮದ ನೂತನ ಅಧ್ಯಕ್ಷರಾಗಿ ಗುರುವಾರ ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ನಿಗಮ ಆರ್ಥಿಕ ಕೊರತೆ ಎದುರಿಸುತ್ತಿದೆ. ನೇಕಾರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ನಿಗಮವನ್ನು ಯಶಸ್ವಿಯಾಗಿ ಮುನ್ನಡೆಸಲು ಪ್ರಯತ್ನಿಸಲಾಗುವುದು ಎಂದರು.

ವಿದ್ಯಾ ವಿಕಾಸ ಯೋಜನೆಯಡಿ ರಾಜ್ಯ ಎಲ್ಲ ಸರ್ಕಾರಿ ಶಾಲೆಗಳಿಗೆ ನಿಗಮದಿಂದಲೇ ಸಮವಸ್ತ್ರ ಪೂರೈಕೆ ಮಾಡಲು ಅವಕಾಶ ನೀಡಬೇಕೆಂದು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು. ಈ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಲಾಗುವುದು. ಸಾರ್ವಜನಿಕರು ಸಹ ಕೈಮಗ್ಗದ ಉತ್ಪನ್ನಗಳನ್ನು ಹೆಚ್ಚು ಬಳಕೆ ಮಾಡಬೇಕೆಂದು ಮನವಿ ಮಾಡುತ್ತೇವೆ. ಒಟ್ಟಾರೆ ನಿಗಮದ ಆರ್ಥಿಕ ಪುನಶ್ಚೇತನಕ್ಕೆ ಒತ್ತು ನೀಡಲಾಗುವುದು ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿ 30 ವರ್ಷಗಳಿಂದ ಇದ್ದೇನೆ. ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ಐಪನಳ್ಳಿ ಗ್ರಾಪಂ ಸದಸ್ಯನಾಗಿ, ಜಿಪಂ ಸದಸ್ಯನಾಗಿ ಕೆಲಸ ಮಾಡಿದ್ದೇನೆ. ನನ್ನ ಕಾರ್ಯಚಟುವಟಿಕೆಗಳನ್ನು ಗುರುತಿಸಿ ಪಕ್ಷದ ವರಿಷ್ಠರು ನಿಗಮದ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಉತ್ತಮವಾಗಿ ಕೆಲಸ ಮಾಡಿ ತೋರಿಸುತ್ತೇನೆ ಎಂದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಗರೀಮಾ ಪನ್ವಾರ್, ರೇಷ್ಮೆ ನೇಯ್ಗೆಯ 175 ಹಾಗೂ ಹತ್ತಿ ಬಟ್ಟೆ ನೇಯ್ಗೆಯ 3260 ಸೇರಿ ಒಟ್ಟಾರೆಯಾಗಿ 3435 ನೇಕಾರರು ನಿಗಮದೊಂದಿಗೆ ಹೆಸರು ನೋಂದಾಯಿಸಿದ್ದಾರೆ. 2016ರವರೆಗೆ ನೇಕಾರರಿಗೆ ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಬಳಿಕ 196 ಮನೆಗಳಿಗಾಗಿ ನೇಕಾರರಿಂದ ಬೇಡಿಕೆ ಸಲ್ಲಿಕೆಯಾಗಿವೆ. ಮುಂದಿನ ದಿನಗಳಲ್ಲಿ ನೇಕಾರರಿಗೆ ಮನೆಗಳನ್ನು ನೀಡಲು ಕ್ರಮ ವಹಿಸಲಾಗುವುದು ಎಂದರು.

ಜಂಟಿ ನಿರ್ದೇಶಕ ಶ್ರೀನಿವಾಸ ಸಫಾರೆ, ಉಪ ನಿರ್ದೇಶಕಿ ಅನುಪಮಾ ಕೆ.ಎಸ್., ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net