

ಶಿವಮೊಗ್ಗ: ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರವಾಗಿ ಬೈಂದೂರು ಸೇರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಾದ್ಯಂತ 400 ಸಭೆಗಳನ್ನು ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಲೋಕಸಭಾ ಚುನಾವಣೆ ಸಂಬಂಧ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ, ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ.20ರಂದು ಗೀತಾ ಮತ್ತು ನಟ ಶಿವರಾಜ್‌ಕುಮಾರ್ ಶಿವಮೊಗ್ಗಕ್ಕೆ ಆಗಮಿಸಲಿದ್ದು ಭವ್ಯ ಸ್ವಾಗತದ ಮೂಲಕ ಇಬ್ಬರನ್ನೂ ಬರಮಾಡಿಕೊಳ್ಳಲಾಗುವುದು ಎಂದರು.
ಅಂದು ಶಿವಮೊಗ್ಗದಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗುವುದು. ಹೋಬಳಿ, ಗ್ರಾಪಂ, ತಾಲೂಕು ಮಟ್ಟದಲ್ಲಿ ಸಮಾವೇಶಗಳನ್ನು ಆಯೋಜಿಸಲಾಗುವುದು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ತಾಲೂಕು ಕೇಂದ್ರಗಳಿಗೆ ಹಾಗೂ ನಟ ಶಿವರಾಜ್‌ಕುಮಾರ್ ಎಲ್ಲ ಹೋಬಳಿ ಕೇಂದ್ರಗಳಿಗೂ ಭೇಟಿ ಕೊಟ್ಟು ಪ್ರಚಾರ ನಡೆಸುವರು ಎಂದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದಿದ್ದೇವೆ. ಅದೇ ಗ್ಯಾರಂಟಿ ಲೆಕ್ಕದಲ್ಲೇ ಲೋಕಸಭೆ ಚುನಾವಣೆ ಎದುರಿಸುತ್ತೇವೆ. ನುಡಿದಂತೆ ನಡೆಯುವ ಮೂಲಕ ಜನರ ವಿಶ್ವಾಸ ಉಳಿಸಿಕೊಂಡಿದ್ದೇವೆ. ಹಾಗಾಗಿ ಲೋಕಸಭಾ ಚುನಾವಣೆಯನ್ನೂ ಗ್ಯಾರಂಟಿ ಮೇಲೆ ಎದುರಿಸುತ್ತೇವೆ. ಟಿಕೆಟ್ ಘೋಷಣೆ ಬಳಿಕ ಗೀತಾ ಅವರು ಕ್ಷೇತ್ರದ ಕಾರ್ಯಕರ್ತರು, ಜನರೊಂದಿಗೆ ಸಂಪರ್ಕದಲ್ಲಿದ್ದಾರೆ. ಎಲ್ಲವನ್ನೂ ಬಹಿರಂಗಪಡಿಸುವುದಕ್ಕೆ ಆಗುವುದಿಲ್ಲ. ಸಂಸದರಾಗಿ ಗೀತಾ ಜವಾಬ್ದಾರಿ ನಿಭಾಯಿಸುವ ಸಾಮರ್ಥ್ಯ ಬೆಳೆಸಿಕೊಂಡಿದ್ದಾರೆ ಎಂದು ಹೇಳಿದರು.
ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ, ಸಂಚಾಲಕ ಸಿ.ಎಸ್.ಚಂದ್ರಭೂಪಾಲ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಎನ್.ರಮೇಶ್, ವಿಜಯಕುಮಾರ್ ಸಂತೇಕಡೂರು, ಜಿ.ಡಿ.ಮಂಜುನಾಥ ಸುದ್ದಿಗೋಷ್ಠಿಯಲ್ಲಿದ್ದರು.