

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ವಿಶ್ವಕರ್ಮ ಯೋಜನೆ ಜಾರಿಗೊಳಿಸಿದ್ದು, ಸೆ. 17 ರಂದು ಯೋಜನೆಗೆ ಚಾಲನೆ ದೊರಕಲಿದೆ. ಈ ಯೋಜನೆಯಿಂದ ಭಾರತದ ಸಾಂಪ್ರದಾಯಿಕ ಕುಲಕಸುಬುಗಳಿಗೆ ಬಲ ಬರಲಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರು ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದಾರೆ. ಮುಂದಿನ ಐವತ್ತು ವರ್ಷಗಳಲ್ಲಿ ಭಾರತ ಹೇಗಿರಬೇಕೆಂಬ ಭವ್ಯ ಕನಸುಕಟ್ಟಿಕೊಂಡು ಆ ನಿಟ್ಟಿನಲ್ಲಿ ಯೋಜನೆ ರೂಪಿಸುತ್ತಿದ್ದಾರೆ. ಅಂಥ ಯೋಜನೆಗಳ ಪೈಕಿ ವಿಶ್ವಕರ್ಮ ಕೂಡ ಒಂದಾಗಿದೆ. ಇದು ದೇಶದ ಇತಿಹಾಸದಲ್ಲಿಯೇ ಐತಿಹಾಸಿಕ ಮೈಲಿಗಲ್ಲಾಗಲಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.
ಭವಿಷ್ಯದ ಭಾರತ ಹೇಗಿರಬೇಕೆಂದು ಯೋಚನೆ, ಯೋಜನೆ ಹಾಕಿಕೊಂಡು ಕಾರ್ಯ ನಿರ್ವಹಿಸುತ್ತಿರುವ ಮೋದಿ ರೂಪಿಸಿದ ವಿಶ್ವ ಕರ್ಮ ಯೋಜನೆಯಡಿ ಮೊದಲ ಹಂತದಲ್ಲಿ 1 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲಸೌಲಭ್ಯ ಒದಗಿಸಲಾಗುತ್ತದೆ. ಎರಡನೇ ಹಂತದಲ್ಲಿ ಶೇ.5 ರ ಬಡ್ಡಿ ದರದಲ್ಲಿ 5 ಲಕ್ಷ ರೂ.ಗಳವರೆಗೆ ಸಾಲಸೌಲಭ್ಯ ಒದಗಿಸಲಾಗುತ್ತದೆ. ಈಗಾಗಲೇ ಸರ್ಕಾರದಿಂದ ತರಬೇತಿ ನೀಡಲಾಗುತ್ತಿದೆ. ಬಳಿಕ ಪ್ರಮಾಣ ಪತ್ರ ನೀಡುವುದರೊಂದಿಗೆ ಯೋಜನೆ ಅನುಷ್ಟಾನಕ್ಕೆ ಬರಲಿದೆ ಎಂದರು.
ಒಟ್ಟು 18 ಸಮುದಾಯಗಳನ್ನು ಈ ಯೋಜನೆ ವ್ಯಾಪ್ತಿಗೆ ಒಳಪಡಿಸಲಾಗುತ್ತಿದೆ. ಕೌಶಲ್ಯ ವೃದ್ಧಿಸಿ ಹೆಚ್ಚಿನ ಆದಾಯ ಗಳಿಸುವಂತೆ ಮಾಡುವುದು ಯೋಜನೆಯ ಉದ್ದೇಶಗಳಲ್ಲೊಂದು. ಹಿಂದುಳಿದ ವರ್ಗಗಳಿಗೆ ಇಂಥ ಅನೇಕ ಯೋಜನೆಗಳನ್ನು ಬಿಜೆಪಿ ಜಾರಿಗೊಳಿಸಿದೆ. ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ 10 ನಿಗಮಗಳನ್ನು ಹೆಚ್ಚುವರಿಯಾಗಿ ಸ್ಥಾಪಿಸಲಾಗಿದೆ. ಆದರೆ, ಕಾಂಗ್ರೆಸ್ ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನವನ್ನೇ ನೀಡುತ್ತಿಲ್ಲ. ಬದಲಾಗಿ ಕ್ರಿಶ್ಚಿಯನ್ ನಿಗಮ ಸ್ಥಾಪಿಸಿ 100 ಕೋಟಿ ರೂ.ಅನುದಾನ ಬಿಡುಗಡೆ ಮಾಡುತ್ತದೆ. ಹಿಂದುಳಿದ ವರ್ಗವನ್ನು ಕಡೆಗಣಿಸುತ್ತದೆ. ರಾಜ್ಯದಲ್ಲಿ ಆರ್ಥಿಕ ದಿವಾಳಿ ಎದ್ದಿದೆ. ಗ್ಯಾರಂಟಿ ಯೋಜನೆ ಹೆಸರಲ್ಲಿ ಜನರ ಸುಲಿಗೆಗೆ ಇಳಿದಿದೆ. ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಅನುದಾನ ಸಹ ಅನ್ಯ ಉದ್ದೇಶಗಳಿಗೆ ಬಳಸಲಾಗುತ್ತಿದೆ. ಆದರೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಪುತ್ರ ಪ್ರಿಯಾಂಕ್ ಖರ್ಗೆ ಮೌನವಾಗಿರುವುದು ದುರ್ದೈವದ ಸಂಗತಿ ಎಂದರು.
ಹಿಂದುಳಿದ ಸಮುದಾಯಗಳ ಅಭಿವೃದ್ಧಿ ಆಗಬೇಕಾದರೆ ಬಿಜೆಪಿ ಸರ್ಕಾರ ಬೇಕು. ಹೀಗಾಗಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿಸಲು ಕೇಂದ್ರದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕೆಂದರು.
ಬೆಳಗಾವಿ ವಿಭಾಗದ ಪ್ರಭಾರಿ ಚಂದ್ರಶೇಖರ ಕವಟಗಿ, ಸಾಬು ಮಾಶ್ಯಾಳ, ಪ್ರಮೋದ