

ಶಿವಮೊಗ್ಗ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಗ್ಯಾರಂಟಿಗಳಿಂದ ರಾಜ್ಯ ದಿವಾಳಿ ಆಗುತ್ತದೆ ಎಂದು ದೂರಿದ್ದರು. ಆದರೆ ಇದೀ ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರವೇ ಮಹಿಳೆಯರಿಗೆ ಹಲವು ಗ್ಯಾರಂಟಿಗಳನ್ನು ಘೋಷಿಸಿದೆ. ಈ ಬಗ್ಗೆ ಏನು ಹೇಳುತ್ತಾರೆಂದು ಮಾಜಿ ಎಂಎಲ್‌ಸಿ ಆರ್.ಪ್ರಸನ್ನಕುಮಾರ್ ಪ್ರಶ್ನಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಕೊಟ್ಟ ಗ್ಯಾರಂಟಿಗಳನ್ನು ಈಡೇರಿಸುತ್ತಿದ್ದು ಇದನ್ನು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ. ಮುಂದುವರು ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸುವ ಕೆಲಸ ಆಗಬೇಕಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕೆಪಿಸಿಸಿ ಸಹಕಾರ ವಿಭಾಗದ ಸಂಚಾಲಕ ಆರ್.ಎಂ.ಮಂಜುನಾಥಗೌಡ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಷರತ್ತುಗಳಲ್ಲದೆ ಮಾಜಿ ಎಂಎಲ್‌ಸಿ ಆಯನೂರು ಮಂಜುನಾಥ ಸೇರಿ ಹಲವರು ಸೇರ್ಪಡೆ ಆಗಿದ್ದಾರೆ. ಮುಂದೆಯೂ ಮತ್ತಷ್ಟು ಮಂದಿ ಸೇರ್ಪಡೆ ಆಗುವವರಿದ್ದಾರೆ. ಇವರೆಲ್ಲರೂ ತಮ್ಮ ಶಕ್ತಿಯನ್ನು ಮುಂಬರುವ ಚುನಾವಣೆಗಳಲ್ಲಿ ಪಕ್ಷಕ್ಕೆ ಧಾರೆಯೆರೆಯಬೇಕಿದೆ ಎಂದರು. ಮಾಜಿ ಎಂಎಲ್‌ಸಿ ಆಯನೂರು ಮಂಜುನಾಥ, ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್, ಮುಖಂಡರಾದ ಎಸ್.ಜೆ.ಮರಿಯಪ್ಪ, ಎಸ್.ಪಿ.ಶೇಷಾದ್ರಿ, ಕಲಗೋಡು ರತ್ನಾಕರ್, ಚಂದ್ರಶೇಖರ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.