

ಮೈಸೂರು: ಎಸ್‌ಸಿಪಿ, ಟಿಎಸ್‌ಪಿ ಅನುದಾನ ಅರ್ಹ ಫಲಾನುಭವಿಗಳಿಗೆ ಸಂಪೂರ್ಣವಾಗಿ ಬಳಕೆ ಆಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.
ತಮ್ಮ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಎಸ್‌ಸಿಪಿ, ಟಿಎಸ್‌ಪಿ ಅನುದಾನ ಬಳಕೆ ಕುರಿತ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸರ್ಕಾರದ ಸೌಲಭ್ಯ ದೊರೆಯಬೇಕು. ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರೆಯುತ್ತಿದೆಯೇ ಎಂಬುದನ್ನು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ವರದಿ ನೀಡಬೇಕು ಎಂದರು.
ಹಾಸ್ಟೆಲ್‌ಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳಲ್ಲಿ ನೀಡುತ್ತಿರುವ ಆಹಾರದ ಗುಣಮಟ್ಟ ಹಾಗೂ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಬೇಕು. ಎಸ್‌ಸಿಪಿ, ಟಿಎಸ್‌ಪಿ ಅಡಿ ನಡೆಯುತ್ತಿರುವ ಕಾಮಗಾರಿಗಳ ಗುಣಮಟ್ಟವನ್ನೂ ಪರಿಶೀಲಿಸಬೇಕು ಎಂದು ನಿರ್ದೇಶನ ನೀಡಿದರು.
ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗುವುದು ಎಂದರು. ಪಾಲಿಕೆಯ ಆಯುಕ್ತ ಆಶಾದ್ ಉರ್ ರೆಹಮಾನ್ ಶರೀಫ್, ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತೆ ನಾಜಿಯಾ ಸುಲ್ತಾನ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಂಗೇಗೌಡ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್ ಸೇರಿದಂತೆ ಇತರರು ಇದ್ದರು.